ಹಾಸನ

ಕುಡಿವ ನೀರು ಸೇರಿ ಪ್ರಮುಖ ಸಮಸ್ಯೆಗಳಿಗೆ ಆದ್ಯತೆ ನೀಡಿ

Published On :

ಕ.ಪ್ರ.ವಾರ್ತೆ   ಬೇಲೂರು   ಅ.29
ತಾಲೂಕಿನಲ್ಲಿ ಬರ ಸಂಬಂಧ ಸರ್ಕಾರ 5 ಕೋಟಿ ರು. ಬಿಡುಗಡೆಗೊಳಿಸಿದ್ದು, ಅಧಿಕಾರಿಗಳು ಕುಡಿಯುವ ನೀರು ಇನ್ನಿತರೆ ಪ್ರಮುಖ ಸಮಸ್ಯೆಗಳಿಗೆ ಸ್ಪಂದಿಸುಂತೆ ಶಾಸಕ ವೈ.ಎನ್.ರುದ್ರೇಶಗೌಡ ಸೂಚಿಸಿದರು.
ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು ತಾಲೂಕಿನ ಮಲೆನಾಡು, ಬಯಲು ಸೀಮೆಗಳಲ್ಲಿ ಕುಡಿಯುವ ನೀರಿಗೆ ತೀವ್ರ ತೊಂದರೆ ಉಂಟಾಗಿದ್ದು, ಇಲಾಖೆ ಅಧಿಕಾರಿಗಳು ಈ ಬಗ್ಗೆ ಹೆಚ್ಚಿನ ಗಮನಹರಿಸುವುದು ಸೂಕ್ತ ಎಂದು ಹೇಳಿದರು.
ಗಂಗಾ ಕಲ್ಯಾಣ ಯೋಜನೆಯಡಿ 5 ವರ್ಷಗಳ ಹಿಂದೆ ಕೊಳವೆ ಬಾವಿ ಕೊರೆದಿದ್ದು, ಇಂದಿಗೂ ವಿದ್ಯುತ್ ಸಂಪರ್ಕ ಕಲ್ಪಿಸಿಲ್ಲ. ಹೀಗಾದರೆ ಬೋರ್ವೆಲ್ಗಳಲ್ಲಿ ನೀರು ಬರುವುದಾದರೂ ಹೇಗೆ ಎಂದು ಪ್ರಶ್ನಿಸಿದರು. ವಿದ್ಯುತ್ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅವ್ಯವಸ್ಥೆಯಾಗಿದ್ದು ಕೂಡಲೆ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಶಾಸಕರು ಎಚ್ಚರಿಕೆ ನೀಡಿದರು.
ತಾಲೂಕಿನ ಅಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇದ್ದು, ರೋಗಿಗಳಿಗೆ ತುಂಬಾ ತೊಂದರೆ ಉಂಟಾಗಿದೆ ಎಂದು ವೈದ್ಯ ಡಾ.ನರಸೇಗೌಡ ಸಭೆಯಲ್ಲಿ ಪ್ರಸ್ತಾಪಿಸಿದಾಗ, ಶಾಸಕ ರುದ್ರೇಶಗೌಡ ಪ್ರತಿಕ್ರಿಯಿಸಿ, ತಾಲೂಕಿನಲ್ಲಿ 29 ವೈದ್ಯರ ಅವಶ್ಯಕತೆಯಿದ್ದು ಈಗ ಕೇವಲ 17 ವೈದ್ಯರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಬಗ್ಗೆ ಆರೋಗ್ಯ ಸಚಿವರ ಜೊತೆ ಚರ್ಚಿಸುವುದಾಗಿ ತಿಳಿಸಿದರು.
ಸಾರ್ವಜನಿಕ ವಿದ್ಯಾರ್ಥಿ ನಿಲಯಗಳು ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿದ್ದು ಪ್ರತಿ ತಿಂಗಳು 2 ಲಕ್ಷ ರು. ಬಾಡಿಗೆ ಕಟ್ಟುವ ಸ್ಥಿತಿ ನಿರ್ಮಾಣವಾಗಿದೆ. ಅದರೆ ಕೆಲ ನಿಲಯಗಳಿಗೆ ಸ್ವಂತ ಜಾಗವಿದ್ದರೂ ಕಟ್ಟಡ ನಿರ್ಮಿಸಿಲ್ಲ. ಈ ಬಗ್ಗೆ ಇಲಾಖೆ ಅಧಿಕಾರಿಗಳು ಗಮನಹರಿಸುವಂತೆ ಸೂಚನೆ ನೀಡಿದರು.
ತಾಲೂಕಿನಲ್ಲಿ ಕಾಲುಬಾಯಿ ಜ್ವರದಿಂದ ನರಳುತ್ತಿರುವ ಜಾನುವಾರುಗಳ ಬಗ್ಗೆ ಮಾಹಿತಿ ನೀಡಿ ಎಂದು ಪಶು ವೈದ್ಯಾಧಿಕಾರಿಗಳಿಗೆ ತಿಳಿಸಿದಾಗ ವೈದ್ಯಾಧಿಕಾರಿ ತಾಲೂಕಿನ 17 ಹಳ್ಳಿಗಳಲ್ಲಿ 99 ಜಾನುವಾರುಗಳಿಗೆ ಕಾಲುಬಾಯಿ ರೋಗ ಹರಡಿದ್ದು, ರೋಗದಿಂದ 5 ಹಸುಗಳು ಸಾವನ್ನಪ್ಪಿದೆ ಎಂದು ಮಾಹಿತಿ ನೀಡಿದರು.
ಜಿಪಂ ಸದಸ್ಯ ಅಮಿತ್ಶೆಟ್ಟಿ, ಬಿ.ಡಿ.ಚಂದ್ರೇಗೌಡ, ಹೇಮಾವತಿ ಮಂಜುನಾಥ್, ಜಿ.ಟಿ.ಇಂದಿರಾ, ತಾಲೂಕು ಪಂಚಾಯ್ತಿ ಅಧ್ಯಕ್ಷೆ ಸುಮಿತ್ರರುದ್ರಯ್ಯ, ಉಪಾಧ್ಯಕ್ಷೆ ಕಮಲಮ್ಮ, ತಾಪಂ ಕಾರ್ಯನಿರ್ವಾಹಣಾಧಿಕಾರಿ ಶಿವಣ್ಣ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.