ಬೇಲೂರು ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ರದ್ದು
ಕ.ಪ್ರ. ವಾರ್ತೆ ಬೇಲೂರು ಸೆ. 7
ಪಟ್ಟಣ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆಯಬೇಕಿದ್ದ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದರಿಂದ ಚುನಾವಣೆ ರದ್ದಾಗಿ ಅಧಿಕಾರ ಗದ್ದುಗೆ ಹಿಡಿಯುವ ಜೆಡಿಎಸ್ ಆಸೆಗೆ ತಣ್ಣೀರು ಎರೆಚಿದಂತಾಗಿದೆ.
ಮಾಧ್ಯಮಗಳಲ್ಲಿ ತಡೆಯಾಜ್ಞೆ ಇರುವುದನ್ನು ಮನಗಂಡ ಪುರಸಭೆ ಅಧಿಕಾರಿಗಳು ಚುನಾವಣೆಗೆ ಯಾವುದೇ ಪೂರ್ವ ಸಿದ್ಧತೆ ಮಾಡಿಕೊಂಡಿರಲಿಲ್ಲ. ನಂತರ ಆಗಮಿಸಿದ ಚುನಾವಣಾಧಿಕಾರಿ ಜಗದೀಶ್, ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಆಗಮಿಸಿದ್ದ ಜೆಡಿಎಸ್ ಅಭ್ಯರ್ಥಿ ಚನ್ನಕೇಶವ, ಗಿರೀಶ್ ನಾಮಪತ್ರ ಸಲ್ಲಿಸಲು ಮುಂದಾದಾಗ ತಡೆಯಾಜ್ಞೆ ಇರುವುದರಿಂದ ನಾಮಪತ್ರ ಸ್ವೀಕರಿಸುವುದಿಲ್ಲ ಎಂದು ತಿಳಿಸಿದರು. ಇದರಿಂದ ಕುಪಿತಗೊಂಡ ಜೆಡಿಎಸ್ ತಾಲೂಕು ಅಧ್ಯಕ್ಷ ತೊ.ಚ.ಅನಂತಸುಬ್ಬರಾಯ, ಜಿಪಂ ಸದಸ್ಯ ಬಿ.ಡಿ.ಚಂದ್ರೇಗೌಡ, ಮಾಜಿ ಜಿಲ್ಲಾಧ್ಯಕ್ಷ ಕೆ.ಎಸ್.ಲಿಂಗೇಶ್, ತಾಪಂ ಮಾಜಿ ಸದಸ್ಯ ನಾಗರಾಜ್, ಜೆಡಿಎಸ್ ಕಾರ್ಯಾಧ್ಯಕ್ಷ ಬಿ.ಸಿ.ಮಂಜುನಾಥ್ ಚುನಾವಣಾಧಿಕಾರಿಗಳೊಂದಿಗೆ ವಾಗ್ವಾದಕ್ಕೆ ಇಳಿದರು.
ಹಾಸನದಲ್ಲಿ ಚುನಾವಣೆ ಪ್ರಕ್ರಿಯೆ ನಡೆದಿದೆ, ಇಲ್ಲೇಕೆ ರದ್ದು ಪಡಿಸಿದ್ದೀರಾ ಎಂದು ಪ್ರಶ್ನಿಸಿದರು. ಇಲ್ಲಿ ಮೀಸಲಾತಿ ಸರಿಯಿಲ್ಲ ಎಂಬ ಕಾರಣಕ್ಕೆ ಶಾಂತಮ್ಮ ಎಂಬುವರು ತಡೆಯಾಜ್ಞೆ ತಂದಿದ್ದಾರೆ. ಇದಕ್ಕೂ ಹಾಸನಕ್ಕೂ ಸಂಬಂಧವಿಲ್ಲ. ಈ ಬಗ್ಗೆ ಹೈಕೋರ್ಟ್ ತಡೆಯಾಜ್ಞೆ ಇರುವ ಕುರಿತು ಮೇಲಾಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದೆ ಎಂದು ಚುನಾವಣಾಧಿಕಾರಿ ಸ್ಪಷ್ಟಪಡಿಸಿದರು.
ಜೆಡಿಎಸ್ ಮುಖಂಡರು ನಾಮಪತ್ರ ಸಲ್ಲಿಸಲು ಎಷ್ಟೇ ಪ್ರಯತ್ನಿಸಿದರೂ ಪ್ರಯೋಜನವಾಗದೆ ಚುನಾವಣಾಧಿಕಾರಿ ನೀಡಿದ ಹಿಂಬರಹ ಪಡೆದು ತೆರಳಿದರು. ತಾಲೂಕು ಜೆಡಿಎಸ್ ಅಧ್ಯಕ್ಷ ತೊ.ಚ.ಅನಂತಸುಬ್ಬರಾಯ ಮಾತನಾಡಿ, ತಡೆಯಾಜ್ಞೆ ಬಂದಿಲ್ಲ. ಕಾಂಗ್ರೆಸ್ನವರು ಉದ್ದೇಶಪೂರ್ವಕವಾಗಿ ಜೆಡಿಎಸ್ ಅಧಿಕಾರಕ್ಕೆ ಬರುವುದನ್ನು ತಡೆಯಲು ಮತ್ತು ವಾಮಮಾರ್ಗದಲ್ಲಿ ಅಧಿಕಾರ ಹಿಡಿಯಲು ಹುನ್ನಾರ ನಡೆಸಿದ್ದಾರೆ. ಇದರಲ್ಲಿ ಎಂದಿಗೂ ಯಶಸ್ವಿಯಾಗುವುದಿಲ್ಲ. ಇಂದಿನ ಘಟನೆಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

