'ರಾಜ್ಯದ ರಸ್ತೆಗಳನ್ನು ಮೇಲ್ದರ್ಜೆಗೇರಿಸಲು ಕೇಂದ್ರಕ್ಕೆ ಮನವಿ'
ಕನ್ನಡಪ್ರಭ ವಾರ್ತೆ, ಹಾಸನ. ಸೆ.11
ರಾಜ್ಯದ ಕೆಲವು ರಸ್ತೆಗಳನ್ನು ಮೇಲ್ದರ್ಜೆಗೇರಿಸುವ ಸಂಬಂಧ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದು, ಇದಕ್ಕೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ತಿಳಿಸಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿನ ಕೆಲ ರಸ್ತೆಗಳನ್ನು ಮೇಲ್ದರ್ಜೆಗೇರಿಸುವ ಬಗ್ಗೆ ನಾನು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಅದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ಬೇಡಿಕೆಗೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದೆ ಎಂದ ಅವರು, ಶಿರಾಡಿ ಘಾಟ್ ರಸ್ತೆ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಡಿಪಿಆರ್ ಅನ್ನು ಕೇಳಿದೆ ಎಂದರು. ದುದ್ದ-ಅರಸೀಕೆರೆ-ತಿಪಟೂರಿಗೆ ರಸ್ತೆಗೆ ಸಂಬಂಧಿಸಿದಂತೆ ಈಗಾಗಲೇ ಗುತ್ತಿಗೆದಾರರು ರಸ್ತೆ ಕಾಮಗಾರಿ ಮುಂದುವರೆಸಲು ಒಪ್ಪಿಕೊಂಡಿದ್ದು, ಕೂಡಲೇ ರಸ್ತೆ ಕಾಮಗಾರಿ ಪ್ರಾರಂಭವಾಗಲಿದೆ. ಜೊತೆಗೆ ಅರಕಲಗೂಡು- ಆನೆಚೌಕ್- ಗುಂಡ್ಲುಪೇಟೆಯ ರಸ್ತೆ ಅಭಿವೃದ್ಧಿ ಯೋಜನೆಯನ್ನು 249 ಕೋಟಿ ವೆಚ್ಚದಲ್ಲಿ ಸಿದ್ಧಪಡಿಸುತ್ತಿದ್ದು, ಕೂಡಲೇ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಮಾನ್ಯತೆ ಬಗ್ಗೆ ಕೇಂದ್ರ ಸಚಿವರಿಗೆ ಮನವಿ: ಇನ್ನೂ ಪಶು ವೈದ್ಯಕೀಯ ಕಾಲೇಜಿಗೆ ಮಾನ್ಯತೆ ನೀಡುವ ಬಗ್ಗೆ ಇರುವಂತಹ ಕೆಲವು ಲೋಪಗಳನ್ನು ಕಾನೂನು ಸಚಿವರು ಸರಿಪಡಿಸಿ ಕೇಂದ್ರದ ಕೃಷಿ ಸಚಿವರಿಗೆ ಕಳುಹಿಸಿದ್ದು, ಈ ಸಮಸ್ಯೆಯು ಕೂಡ ಕೆಲ ದಿನಗಳಲ್ಲಿ ಪರಿಹಾರವಾಗಲಿದೆ ಎಂದ ಅವರು, ಕುಡಿಯು ನೀರು ಯೋಜನೆಗೆ ಸಂಬಂಧಿಸಿದಂತೆ 3051 ಕಾಮಗಾರಿಗೆ 81 ಕೋಟಿ ಮಂಜೂರಾಗಿದ್ದು, ಬಸವ ವಸತಿಯನ್ನು ಇಂದಿರಾ ಆವಾಸ್ ಯೋಜನೆಯಡಿ ಮನೆಗಳ ಘಟಕ ವೆಚ್ಚವನ್ನು 75 ಸಾವಿರದಿಂದ 1.20 ಲಕ್ಷಗಳಿಗೆ ಹೆಚ್ಚಿಸಲಾಗಿದೆ ಎಂದರು. ಡಾ. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಪರಿಶಿಷ್ಟ ಜಾತಿ ಹಾಗೂ ಪಂಗಡದ ಫಲಾನುಭವಿಗಳ ತೆಗೆದುಕೊಂಡಿದ್ದ ಒಟ್ಟು ಸಾಲ ಹಾಗೂ ಬಡ್ಡಿಯನ್ನು ಮನ್ನಾ ಮಾಡಲಾಗಿದೆ. ಹಿಂದುಳಿದ ವರ್ಗಕ್ಕೆ ಸೇರಿದ 18,358 ಫಲಾನುಭವಿಗಳು ಪಡೆದಿದ್ದ ಸಾಲ ಮತ್ತು ಬಡ್ಡಿ 15.89 ಕೋಟಿ ಸಾಲ ಮನ್ನಾ ಮಾಡಲಾಗಿದೆ. ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಮತ್ತು ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಯೋಜನೆಯಲ್ಲಿ ಸಾಲವನ್ನು ಮನ್ನಾ ಮಾಡಲಾಗಿದೆ ಎಂದರು. ಕಷ್ಟ ಎಂದು ಬರುವಂತಹ ಸಾರ್ವಜನಿಕರಿಗೆ ಸರ್ಕಾರದ ಯೋಜನೆಗಳು ತ್ವರಿತವಾಗಿ ಅನುಷ್ಠಾನಗೊಳಿಸಬೇಕು ಹಾಗೂ ಜನರ ಸಮಸ್ಯೆಗೆ ಕ್ರಿಯಾಶೀಲತೆಯಿಂದ ಜಿಲ್ಲಾಡಳಿತ ಸ್ಪಂಧಿಸುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುವಂತೆ ಆದೇಶಿಸಿರುವುದಾಗಿ ಹೇಳಿದರು. ಶಾಸಕರಾದ ಎ. ಮಂಜು, ರುದ್ರೇಶ್ಗೌಡ, ಜಿಲ್ಲಾಧಿಕಾರಿ ವಿ. ಅನ್ಬುಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣನವರ್, ಜಿಪಂ ಸಿಇಒ ಉಪೇಂದ್ರ ಪ್ರತಾಪ್ಸಿಂಗ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

