ಅರಕಲಗೂಡು: ನಕಲಿ ರಸಗೊಬ್ಬರ ಮಾರಾಟ
ಕನ್ನಡಪ್ರಭ ವಾರ್ತೆ ಹಾಸನ ಸೆ.14
ಅರಕಲಗೂಡು ತಾಲೂಕಿನ ಕೊಣನೂರು ಹೋಬಳಿಯ ಕೆಲ ಅಂಗಡಿಗಳಲ್ಲಿ ನಕಲಿ ಕ್ರಿಮಿನಾಶಕ ಹಾಗೂ ರಸಗೊಬ್ಬರ ಮಾರಾಟ ಮಾಡುತ್ತಿದ್ದು, ಇದರ ವಿರುದ್ಧ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ನಡೆಸುವುದಾಗಿ ರೈತಸಂಘದ ಮುಖಂಡ ಹೋತಿ ಹುಚ್ಚಪ್ಪ ಎಚ್ಚರಿಕೆ ನೀಡಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೋಬಳಿಯ ಕಾವೇರಿ ಹೈಟೆಕ್ ಆಗ್ರೋ ಏಜೆನ್ಸಿಯಲ್ಲಿ ಬವಿಸ್ತೀನ್ ಎಂಬ ನಕಲಿ ಕ್ರಿಮಿನಾಶಕ ಮಾರಾಟ ಮಾಡಲಾಗುತ್ತಿದೆ. ಈ ಕ್ರಿಮಿನಾಶಕವನ್ನು ತರಕಾರಿ ಹಾಗೂ ಕೆಲ ಹಣ್ಣುಗಳಿಗೆ ಸಿಂಪಡಿಸಲಾಗುತ್ತದೆ. ಒಂದು ಪ್ಯಾಕೆಟ್ಗೆ 80 ರು.ಗಳಂತೆ ಮಾರಾಟ ಮಾಡಲಾಗುತ್ತಿದೆ. ಈ ಅಂಗಡಿಯಲ್ಲಿ ಒಂದೇ ಹೆಸರಿನ ನಕಲಿ ಮತ್ತು ಅಸಲಿ ಕ್ರಿಮಿನಾಶಕಗಳನ್ನು ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಈ ಕ್ರಿಮಿನಾಶಕ ತರಕಾರಿಗಳಿಗೆ ಸಿಂಪಡಿಸಿದ ಮೇಲೆ ಬೆಳೆ ಸಂಪೂರ್ಣವಾಗಿ ನಾಶವಾಗಿದೆ. ಈ ಬಗ್ಗೆ ರೈತರು ಅಂಗಡಿಯವರನ್ನು ಕೇಳಲು ಹೋದರೆ ಬೆದರಿಕೆ ಒಡ್ಡುತ್ತಿದ್ದಾರೆ. ಹಲವು ರೈತರು ಈ ನಕಲಿ ಕ್ರಿಮಿನಾಶಕ ಖರೀದಿಸಿ ಮೋಸ ಹೋಗಿದ್ದಾರೆ. ಒಂದೇ ಅಂಗಡಿಯಲ್ಲಿ ಅಸಲಿ ಮತ್ತು ನಕಲಿ ಕ್ರಿಮಿನಾಶಕ ಮಾರಾಟ ಮಾಡುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ದೂರಿದರು. ನಕಲಿ ಕ್ರಮಿನಾಶಕ ಮಾರಾಟ ಮಾಡುತ್ತಿರುವ ಬಗ್ಗೆ ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಗೆ ದೂರು ನೀಡಿದ್ದರೂ ಅಧಿಕಾರಿಗಳು ಕ್ರಮ ಜರುಗಿಸಿಲ್ಲ. ಈ ಅಂಗಡಿಯಲ್ಲಿ ನಕಲಿ ಕ್ರಿಮಿನಾಶಕ ಹಾಗೂ ರಸಗೊಬ್ಬರ ಮಾರಾಟ ಮಾಡುತ್ತಿದ್ದಾರೆ ಎಂದರು. ನಕಲಿ ಮಾರಾಟದ ಹಿಂದೆ ದೊಡ್ಡ ಮಾರಾಟಗಾರರ ಜಾಲವಿದ್ದು, ಈ ವಿರುದ್ಧ ಅಧಿಕಾರಿಗಳು ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಹಾಗೂ ಅಧಿಕಾರಿಗಳ ಕುಮ್ಮಕ್ಕಿನಿಂದಲೇ ಅಂಗಡಿಗಳಲ್ಲಿ ನಕಲಿ ರಸಗೊಬ್ಬರ, ಔಷಧ ಮಾರಾಟವಾಗುತ್ತಿದೆ. ಅಧಿಕಾರಿಗಳಿಗೆ ರೈತರ ಬಗ್ಗೆ ಸಲ್ಪವು ಕಾಳಜಿ ಇಲ್ಲದಂತಾಗಿದೆ ಎಂದು ದೂರಿದರು. ಇಂಥ ಮಾರಾಟಗಾರರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಉಗ್ರ ಹೋರಾಟ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

