ಗ್ರಾಪಂ ಕಚೇರಿ ಮುಂದೆ ರೈತಸಂಘ ಪ್ರತಿಭಟನೆ
ಕ.ಪ್ರ. ವಾರ್ತೆ ಅರಸೀಕೆರೆ ಸೆ.15
ತಾಲೂಕಿನ ಬೆಂಡೆಕೆರೆ ಸರ್ಕಾರಿ ಪ್ರಾಥಮಿಕ ಶಾಲೆ ಕಟ್ಟಡ ಕುಸಿದು ತಿಂಗಳುಗಳೇ ಕಳೆದರೂ ಶಿಕ್ಷಣ ಇಲಾಖೆ ಕಟ್ಟಡ ದುರಸ್ತಿ ಕಾರ್ಯಕ್ಕೆ ಕ್ರಮ ತೆಗೆದುಕೊಳ್ಳದೆ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿ ರೈತ ಸಂಘದ ಜಿಲ್ಲಾ ಸಂಚಾಲಕ ಕನಕಂಚೇನಹಳ್ಳಿ ಪ್ರಸನ್ನಕುಮಾರ್ ನೇತೃತ್ವದಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಬೆಂಡೆಕೆರೆ ಗ್ರಾಮ ಪಂಚಾಯತಿ ಮುಂದೆ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಖಾಸಗಿ ಶಿಕ್ಷಣ ಸಂಸ್ಥೆಗಳ ಹಾವಳಿಯಿಂದ ಗ್ರಾಮೀಣ ಪ್ರದೇಶದಲ್ಲಿಯೂ ಸರ್ಕಾರಿ ಶಾಲೆಗಳಿಗೆ ಮಕ್ಕಳು ಬಾರದೆ ಮುಚ್ಚುವ ಸ್ಥಿತಿ ನಿರ್ಮಾಣವಾಗಿದೆ.
ಇಂತಹ ಪರಿಸ್ಥಿತಿಯಲ್ಲಿ ಕಟ್ಟಡ ಕುಸಿದು ಹಲವು ತಿಂಗಳು ಕಳೆದರೂ ಗಮನ ಹರಿಸದ ಇಲಾಖೆಯ ಬೇಜವಾಬ್ದಾರಿ ನೀತಿಯನ್ನು ಪ್ರತಿಭಟನಾಕಾರರು ಬಲವಾಗಿ ಖಂಡಿಸಿ ಶಿಕ್ಷಣ ಇಲಾಖೆ ವಿರುದ್ಧ ಘೋಷಣೆ ಕೂಗಿದರು. ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಹೊಸದಾಗಿ ಕಟ್ಟಡ ನಿರ್ಮಿಸುವಂತೆ ಶಿಕ್ಷಣ ಇಲಾಖೆಯನ್ನು ಒತ್ತಾಯಿಸಿದರು.
ಕನಕಂಚೇನಹಳ್ಳಿ ಪ್ರಸನ್ನಕುಮಾರ್ ಮಾತನಾಡಿ ಮಕ್ಕಳ ಉತ್ತಮ ಶಿಕ್ಷಣಕ್ಕೆ ಸರ್ಕಾರ ಕೋಟ್ಯಂತರ ರು. ಬಿಡುಗಡೆ ಮಾಡುತ್ತಿದ್ದರೂ ಇಂತಹ ಕಟ್ಟಡಗಳ ದುರಸ್ತಿ ಕಾರ್ಯ ಕೈಗೊಳ್ಳದೆ ಕೈಕಟ್ಟಿ ಕುಳಿತಿರುವುದು ವಿಷಾದದ ಸಂಗತಿ. ಈ ಸರಕಾರಿ ಶಾಲೆ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತಿದ್ದು ಕಳೆದ ಕೆಲವು ತಿಂಗಳ ಹಿಂದೆ ಲಾರಿಯೊಂದು ಗುದ್ದಿದ ಪರಿಣಾಮ ಕಟ್ಟಡ ಕುಸಿಯಿತು. ಶಿಕ್ಷಕರು ಶಾಲೆಯ ಆವರಣದಲ್ಲೇ ಪಾಠ ಪ್ರವಚನ ಮಾಡುತ್ತಿದ್ದು, ಇದರಿಂದ ವಿದ್ಯಾರ್ಥಿಗಳು ಕಿರಿಕಿರಿ ಅನುಭವಿಸುವಂತಾಗಿದೆ. ಕೂಡಲೇ ಕಟ್ಟಡ ದುರಸ್ತಿ ಕೈಗೊಳ್ಳದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಶಾಲೆಗೆ ಭೇಟಿ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜ್ ವಿದ್ಯಾಭ್ಯಾಸಕ್ಕೆ ತೊಂದರೆಯಾಗದ ರೀತಿ ಶೀಘ್ರದಲ್ಲೆ ಕಟ್ಟಡ ನಿರ್ಮಿಸಿ ಕೊಡುವ ಭರವಸೆ ನೀಡಿದರು.
ಜಿಪಂ ಉಪಾಧ್ಯಕ್ಷ ಬಿಳಿಚೌಡಯ್ಯ ಪ್ರತಿಭಟನಾಕಾರರ ಮನವಿ ಆಲಿಸಿ ಸರಕಾರಿ ಜಾಗದಲ್ಲಿ ಹೊಸದಾಗಿ ಶಾಲಾ ಕಟ್ಟಡ ನಿರ್ಮಿಸಿಕೊಡುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದೆಂದು ಭರವಸೆ ನಂತರ ಪ್ರತಿಭಟನೆ ಹಿಂಪಡೆದರು. ಗ್ರಾಮದ ಧರ್ಮಪ್ಪ, ಆದರ್ಶ, ಲಕ್ಕಮ್ಮ, ರಾಮಯ್ಯ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

