ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ನ್ಯಾ. ಸೋಮಶೇಖರ್ ಆತಂಕ
ಅರಕಲಗೂಡು: ಪ್ರಸ್ತುತ ದಿನಗಳಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದಂತಹ ಪ್ರಕರಣಗಳಲ್ಲಿ ಶಿಕ್ಷಕರೆ ಭಾಗಿಗಳಾಗುತ್ತಿರುವುದು ನಿಜಕ್ಕೂ ಆತಂಕಕಾರಿ ವಿಷಯವಾಗಿದ್ದು, ಪಾಲಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಅಂಜುವಂತಹ ಪರಿಸ್ಥಿತಿ ಎದುರಾಗಿರುವುದು ನಾಗರಿಕ ಸಮಾಜ ತಲೆತಗ್ಗಿಸುವಂತಹ ವಿಚಾರವಾಗಿದೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜೆ.ಎಸ್.ಸೋಮಶೇಖರ್ ಹೇಳಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಅರಕಲಗೂಡು ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಮತ್ತು ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಕಾನೂನು ಕಾರ್ಯಾಗಾರ ಉದ್ಘಾಟಿಸಿ, ಮಾತನಾಡಿದರು.
ಶಿಕ್ಷಣ ಮಾನವನ ಮೂಲಭೂತ ಹಕ್ಕು. ಪ್ರತಿ ಮಗುವೂ ಶಿಕ್ಷಣ ಪಡೆಯಬೇಕು ಎಂಬುದು ಸರ್ಕಾರದ ಉದ್ದೇಶವಾಗಿದ್ದು, ಅದಕ್ಕಾಗಿ ಕಾಯ್ದೆಯನ್ನೇ ಜಾರಿಗೆ ತಂದಿದೆ ಎಂದ ಅವರು ಪ್ರಾಥಮಿಕ ಹಂತದಿಂದಲೇ ಮಕ್ಕಳಿಗೆ ಕಾನೂನಿನ ಅರಿವು ಮೂಡಿಸುವ ಅಗತ್ಯವಿದೆ ಎಂದರು.
ಮುಖ್ಯ ಅತಿಥಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಮುಸ್ತಫಹುಸೇನ್ ಎಸ್.ಎ. ಮಾತನಾಡಿ ವರದಕ್ಷಿಣೆ ಕೊಡುವವರ ಮೇಲೂ ಕಾನೂನು ಕ್ರಮ ಕೈಗೊಳ್ಳುವಂತಾದರೆ, ವರದಕ್ಷಿಣೆ ಕೊಡುವುದನ್ನು ತಪ್ಪಿಸಲು ಸಾಧ್ಯವಾಗಬಹುದು ಎಂದು ಅಭಿಪ್ರಾಯಪಟ್ಟರು.
ಜಿಲ್ಲಾ ಎಸ್ಪಿ ರವಿ ಡಿ.ಚನ್ನಣ್ಣನವರ್ ಮಾತನಾಡಿ ದೆಶದಲ್ಲಿ ಪ್ರತಿ ವಿಷಯ ಚಟುವಟಿಕೆಗೂ ಒಂದು ಕಾನೂನು ಇದೆ. ಪ್ರಸ್ತುತ ಸಮಾಜದ ಅವಸ್ಥೆಗೆ ಶಿಕ್ಷಕರೂ ಪಾಲುದಾರರು. ಸಣ್ಣ ಮಗು ತಪ್ಪು ಮಾಡಿದಾಗ ಪಾಲಕರು, ಶಾಲೆಯಲ್ಲಿ ಶಿಕ್ಷಕರು ಅವರನ್ನು ತಿದ್ದದಿದ್ದರೆ ಸಮಾಜದಲ್ಲಿ ಆ ಮಗು ತಪ್ಪಿತಸ್ಥನಾಗಿ ರೂಪುಗೊಳ್ಳುತ್ತಾನೆ. ಬಂದೂಕು ಲಾಠಿಯಿಂದ ಸಮಾಜವನ್ನು ತಿದ್ದಲು ಸಾಧ್ಯವಿಲ್ಲ. ಶಿಕ್ಷಣ ಮಾತ್ರದಿಂದ ಸುಧಾರಣೆ ಸಾಧ್ಯ ಎಂದು ಪ್ರತಿಪಾದಿಸಿದರು. ಶಿಕ್ಷಕರು ನಿರಂತರ ಅಧ್ಯಯನದಿಂದ ಉತ್ತಮ ಶಿಕ್ಷಕರಾಗಲು ಸಾಧ್ಯ. ದುರ್ದೈವವೆಂದರೆ ಇಂದಿನ ಶಿಕ್ಷಕರು ಪಠ್ಯಕ್ರಮಗಳಿಗೆ ಮಾತ್ರ ಸೀಮಿತರಾಗುತ್ತಿದ್ದು, ಮಕ್ಕಳಲ್ಲಿ ಬದುಕಿನ ಪಾಠ ಹೇಳುವವರು ಕಡಿಮೆಯಾಗಿದ್ದಾರೆ ಎಂದರು. ವಕೀಲರ ಸಂಘದ ಅಧ್ಯಕ್ಷ ಬಿ.ಸಿ.ರಾಜೇಶ್ ಅಧ್ಯಕ್ಷತೆ ವಹಿಸಿದ್ದರು. ಜೆಎಂಎಫ್ಸಿ ಸಿವಿಲ್ ನ್ಯಾಯಾಧೀಶ ಬಿ.ಕೆ.ಗಿರೀಶ್, ಸಹಾಯಕ ಸರ್ಕಾರಿ ಅಭಿಯೋಜಕ ಕೆ.ಎಸ್.ನಾಗೇಂದ್ರ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ರೇವಣ್ಣ, ನ್ಯಾಯಾಂಗ ಇಲಾಖೆಯ ವ್ಯವಸ್ಥಾಪಕ ರಾಥೋಡ್ ಉಪಸ್ಥಿತರಿದ್ದರು.
ಸಮಾರಂಭದಿಂದ ದೂರ ಉಳಿದ ವಕೀಲರು
ಕಾನೂನು ಸೇವಾ ಪ್ರಾಧಿಕಾರ ಮತ್ತು ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಕಾನೂನು ಕಾರ್ಯಾಗಾರದ ಉದ್ಘಾಟನಾ ಸಮಾರಂಭದಲ್ಲಿ ವಕೀಲರುಗಳೇ ಸಮಾರಂಭದಿಂದ ದೂರ ಉಳಿದಿದ್ದು ಎಲ್ಲರ ಹುಬ್ಬೇರುವಂತೆ ಮಾಡಿತ್ತು. ವಕೀಲರ ಸಂಘದ ಪದಾಧಿಕಾರಿಯೊಬ್ಬರು ಕಾರ್ಯಕ್ರಮವೊಂದರಲ್ಲಿ ವಕೀಲರ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಅನುಚಿತ ಮಾತುಗಳನ್ನಾಡಿದ್ದೇ ಇದಕ್ಕೆ ಕಾರಣ ಎಂಬ ಮಾತು ಕೇಳಿಬಂತು.ಸಮಾರಂಭದಲ್ಲಿ ಕೇವಲ ಬೆರಳೆಣಿಕೆಯಷ್ಟು ವಕೀಲರು ಮಾತ್ರ ಹಾಜರಿದ್ದರು. ಸಂಘದ ಕಾರ್ಯದರ್ಶಿ ಎಸ್.ಟಿ.ಪ್ರಕಾಶ್ ಸೇರಿದಂತೆ 60ಕ್ಕೂ ಹೆಚ್ಚು ವಕೀಲರು ಕಾರ್ಯಕ್ರಮದಿಂದ ದೂರ ಉಳಿದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

