ಹಾಸನ

ಜೆಡಿಎಸ್‌ಗೆ ದಲಿತ ಸಂಘಟನೆಗಳ ಬೆಂಬಲ

Published On :

ಹಾಸನ: ಭ್ರಷ್ಟ ಕಾಂಗ್ರೆಸ್ ಹಾಗೂ ಕೋಮುವಾದಿ ಬಿಜೆಪಿ ತಿರಸ್ಕರಿಸಿ ಜೆಡಿಎಸ್ ಬೆಂಬಲಿಸುವುದಾಗಿ ವಿವಿಧ ದಲಿತ ಸಂಘಟನೆಗಳು ತಿಳಿಸಿವೆ.
ನಗರದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಕೃಷ್ಣದಾಸ್ ಮತ್ತಿತರರು ಮಾತನಾಡಿ, ಕಳೆದ 40 ವರ್ಷಗಳಿಂದ ಸಮಿತಿ ಬಡವರ-ಶೋಷಿತರ ಪರವಾಗಿ ಕೆಲಸ ಮಾಡುತ್ತಾ ಸಾಮಾಜಿಕ-ರಾಜಕೀಯವಾಗಿ ಜನರನ್ನು ಜಾಗೃತಗೊಳಿಸುತ್ತಿದೆ. ಲೋಕಸಭಾ ಚುನಾವಣೆ ಎದುರಾಗಿರುವ ಸಂದರ್ಭದಲ್ಲಿ ಮತದಾರರನ್ನು, ಅದರಲ್ಲೂ ವಿಶೇಷವಾಗಿ ದಲಿತರು, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಮತದಾರರನ್ನು ವಿವಿಧ ರಾಜಕೀಯ ಪಕ್ಷಗಳು ಸೆಳೆಯಲು ನಿರತವಾಗಿವೆ.
ಕಳೆದ ಮಾ.28ರಂದು ಛಲವಾದಿ ಮಹಾಸಭಾ, ಕರ್ನಾಟಕ ಮಾದಿಗ ದಂಡೋರ, ಪ್ರಜಾ ವಿಮೋಚನಾ ಚಳುವಳಿ ಸೇರಿದಂತೆ ನಾನಾ ದಲಿತ ಸಂಘಟನೆಗಳ ಪದಾಧಿಕಾರಿಗಳ ಸಭೆ ನಡೆಸಿ ಭ್ರಷ್ಟ ಕಾಂಗ್ರೆಸ್ ಮತ್ತು ಕೋಮುವಾದಿ ಬಿಜೆಪಿ ತಿರಸ್ಕರಿಸಿ ಜೆಡಿಎಸ್ ಅಭ್ಯರ್ಥಿ ಎಚ್.ಡಿ.ದೇವೇಗೌಡರನ್ನು ಬೆಂಬಲಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದರು.
ಗೌಡರ ಗೆಲವಿಗೆ ಕಂಕಣ: ಭ್ರಷ್ಟ ಕಾಂಗ್ರೆಸ್ ಮತ್ತು ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ತೀರ್ಮಾನಿಸಿ ಹಾಸನ ಲೋಕಸಭಾ ಕ್ಷೇತ್ರದಿಂದ ಜನತಾದಳದ ಅಭ್ಯರ್ಥಿ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಬೆಂಬಲಿಸಿ ಗೆಲ್ಲಿಸಲು ಸಭೆ ತೀರ್ಮಾನಿಸಲಾಗಿದೆ. ದೇವೇಗೌಡರು ರೈತ ಪರ ಚಿಂತಿಸಿ ಹೋರಾಟ ಮಾಡುತ್ತಾ ಬಂದಿದ್ದಾರೆ.
ದಲಿತ ವರ್ಗದ ಶಿಕ್ಷಣಕ್ಕೆ ಒತ್ತು: ದಲಿತ, ಹಿಂದುಳಿತ ಮತ್ತು ಅಲ್ಪಸಂಖ್ಯಾತ ಮಕ್ಕಳ ವಿದ್ಯಾಭ್ಯಾಸಕ್ಕೆ ಒತ್ತು ನೀಡಿ ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸಿದ್ದಲ್ಲದೆ ಜಿಲ್ಲೆಯಲ್ಲಿ ಮೆಡಿಕಲ್, ಎಂಜಿನಿಯರಿಂಗ್, ಕೃಷಿ, ಪಶು ಸಂಗೋಪನೆ, ನರ್ಸಿಂಗ್ ಕಾಲೇಜು ಹೀಗೆ ಹಲವಾರು ವಿದ್ಯಾಸಂಸ್ಥೆಗಳನ್ನು ಪ್ರಾರಂಭಿಸಿದ್ದಾರೆ. ಹಾಸನದಲ್ಲಿ ಹೈಟೆಕ್ ಬಸ್‌ನಿಲ್ದಾಣ, ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಗೌಜರ ಕೊಡುಗೆ ಅಪಾರ. ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತ ಸಮುದಾಯಗಳಿಗೆ ರಾಜಕೀಯ ಸ್ಥಾನ ಮಾನ ನೀಡಿ ಅವರು ಸಮಾಜದ ಮುಖ್ಯವಾಹಿನಿಗೆ ಬರಲು ಗೌಡರನ್ನು ಗೆಲ್ಲಿಸಿ ಜಿಲ್ಲೆಯ ಘನತೆ ಎತ್ತಿ ಹಿಡಿಯಬೇಕು ಎಂದರು.
ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಬಿ.ಪಿ.ಜಯರಾಮ್, ಮಾದಿಗ ದಂಡೋರ ಜಿಲ್ಲಾಧ್ಯಕ್ಷ ಎಸ್.ಕೆ.ನಿಂಗರಾಜು, ಪ್ರಜಾವಿ ಮೋಚನಾ ಚಳವಳಿ ಜಿಲ್ಲಾಧ್ಯಕ್ಷ ಲಕ್ಷ್ಮಣ್ ಕಡಕನಹಳ್ಳಿ, ದಲಿತ ಸಂಘಟನೆಗಳ ವೇದಿಕೆ ಗೌರವಾಧ್ಯಕ್ಷ ನೇರಲಕೆರೆ ಮಂಜಣ್ಣ, ಜಿಲ್ಲಾ ಛಲವಾದಿ ಮಹಾಸಭಾ ಅಧ್ಯಕ್ಷ ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.