ಹಾಸನ

ಗೌಡರನ್ನು ಗೆಲ್ಲಿಸಲು ಒಗ್ಗಟ್ಟಾಗಿ ಹೋರಾಡಿ

Published On :

ಅರಸೀಕೆರೆ: ರೈತರ ಏಳಿಗೆಗಾಗಿ ದುಡಿದು ಮುಖ್ಯಮಂತ್ರಿಯಾಗಿ, ಪ್ರಧಾನಮಂತ್ರಿಯಾಗಿ, ಜಿಲ್ಲೆಯಿಂದ ಅತ್ಯುನ್ನತ ಪದವಿಯನ್ನೇರಿ ಜಿಲ್ಲೆಗೆ ಕೀರ್ತಿ ತಂದ ಮಾಜಿ ಪ್ರಧಾನಿ ದೇವೇಗೌಡರನ್ನು ಏ. 17ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಲಕ್ಷಕ್ಕೂ ಅಧಿಕ ಮತಗಳಿಂದ ಚುನಾಯಿಸಿ ಸಂಸತ್ತಿಗೆ ಕಳುಹಿಸಿಕೊಡಲು ಕಾರ್ಯಕರ್ತರು ಒಗ್ಗಟ್ಟಿನಿಂದ ಹೋರಾಟ ನಡೆಸಬೇಕೆಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಕಾರ್ಯಕರ್ತರಿಗೆ ಮನವಿ ಮಾಡಿದರು.
ತಾಲ್ಲೂಕಿನ ಬಿಳಿಕಲ್ ರಂಗನಾಥಸ್ವಾಮಿ ದೇಗುಲದ ಆವರಣದಲ್ಲಿರುವ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಮಾಜಿ ಪ್ರಧಾನಿ ದೇವೇಗೌಡರು ತಮ್ಮ ಇಳಿ ವಯಸ್ಸಿನಲ್ಲಿಯೂ ಜನರ ಸಂಕಷ್ಟಕ್ಕೆ ಮಿಡಿಯುವ, ಸ್ಪಂದಿಸುವ ಹೃದಯ ವೈಶಾಲ್ಯ ಅವರಲ್ಲಿದೆ. ಅಂತಹ ಶ್ರೇಷ್ಠ ಮುತ್ಸದ್ದಿ ರಾಜಕಾರಣಿಯನ್ನು ಸಂಸತ್ತಿಗೆ ಆರಿಸುವ ಮೂಲಕ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸಬೇಕೆಂದು ಶಿವಲಿಂಗೇಗೌಡ ಕರೆ ನೀಡಿದರು.
ತಕ್ಕಪಾಠ ಕಲಿಸಿ: ರಾಷ್ಟ್ರೀಯ ಪಕ್ಷಗಳಿಂದ ರಾಜ್ಯದ ಹಿತಕಾಯಲು ಸಾಧ್ಯವಿಲ್ಲ. ಯಾವುದೇ ಪಕ್ಷ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ, ರಾಷ್ಟ್ರೀಯ ಪಕ್ಷಗಳಿಗೆ ಪರ್ಯಾಯವಾಗಿ ದೇಶದಲ್ಲಿ ತೃತೀಯ ರಂಗ ಬಲಗೊಂಡಿದೆ.  ಕಾಂಗ್ರೆಸ್ನ ಆಧಾರ ರಹಿತ ಆರೋಪಗಳಿಗೆ ಕಿವಿಗೊಡುವ ಅಗತ್ಯವಿಲ್ಲ. ಅಪಪ್ರಚಾರದ ಮೂಲಕವೇ ತೇಜೋವಧೆಗೆ ಮುಂದಾಗಿರುವ ಪಕ್ಷದ ಮುಖಂಡರಿಗೆ ತಕ್ಕ ಪಾಠ ಕಲಿಸಬೇಕೆಂದರು.
ಹೆಚ್ಚು ಮತ ತಂದುಕೊಡಿ: ಮಾಜಿ ಶಾಸಕ ಜಿ.ಎಸ್. ಪರಮೇಶ್ವರಪ್ಪ ಮಾತನಾಡಿ, ತಾಲೂಕಿನ ಹಾಗೂ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಅನುಭವಿ ರಾಜಕಾರಣಿಗಳ ಅಗತ್ಯವಿದೆ. ಈ ನಿಟ್ಟಿನಲ್ಲಿ ದೇವೇಗೌಡರ ಆಯ್ಕೆ ಸಮರ್ಥನೀಯ ಕಾರ್ಯಕರ್ತರು ಸಂಘಟನಾತ್ಮಕ ಹೋರಾಟದ ಮೂಲಕ ತಾಲೂಕಿನಿಂದ ಅತಿ ಹೆಚ್ಚಿನ ಮತಗಳನ್ನು ದೇವೇಗೌಡರಿಗೆ ತಂದು ಕೊಡಬೇಕಿದೆ ಎಂದರು.
ಸಭೆಯಲ್ಲಿ ಜಿಪಂ ಉಪಾಧ್ಯಕ್ಷ ಬಿಳಿಚೌಡಯ್ಯ, ಸದಸ್ಯ ಹುಚ್ಚೇಗೌಡ, ತಾಪಂ ಮಾಜಿ ಅಧ್ಯಕ್ಷ ಎಚ್.ಟಿ. ಶಿವಮೂರ್ತಿ, ಜೆಡಿಎಸ್ ತಾಲೂಕು ಅಧ್ಯಕ್ಷ ಸಿದ್ದರಾಮಶೆಟ್ಟಿ, ಪುರಸಭಾಧ್ಯಕ್ಷ ಮೋಹನ್ ಕುಮಾರ್ ಮಾತನಾಡಿದರು. ಸಭೆಯಲ್ಲಿ ಜಿಪಂ ಸದಸ್ಯರಾದ ರತ್ನಮ್ಮ, ಪಾರ್ವತಮ್ಮ, ಎಚ್ ಡಿ ಸಿ ಸಿ ಬ್ಯಾಂಕ್ ಉಪಾಧ್ಯಕ್ಷ ಯೋಗೀಶಪ್ಪ, ಜೆ.ಸಿ.ಪುರ ಗ್ರಾಪಂ ಅಧ್ಯಕ್ಷೆ ನಿರ್ಮಲ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.