ದಲಿತರ ಪರ ಗೌಡರ ಗರ್ಜನೆ
ಕ.ಪ್ರ. ವಾರ್ತೆ ಹಾಸನ ಏ. 3
ಸಮಾಜದಲ್ಲಿ ಸೌಲಭ್ಯ ವಂಚಿತರಾಗಿರುವವರ ಪರ ಮಾಜಿ ಪ್ರಧಾನಿ ದೇವೇಗೌಡರು ಪಾರ್ಲಿಮೆಂಟ್ ಒಳಗೆ ಗರ್ಜನೆ ಮಾಡಿ ಫಲ ದೊರಕಿಸಿಕೊಟ್ಟಿದ್ದಾರೆ ಎಂದು ವಾಲ್ಮೀಕಿ ಸಮಾಜದ ಮುಖಂಡರೂ ಆದ ಜೆಡಿಎಸ್ ಎಸ್.ಟಿ ಮೋರ್ಚಾ ರಾಜ್ಯಾಧ್ಯಕ್ಷ ಮಧುಗಿರಿ ರಮೇಶ್ ಹೇಳಿದ್ದಾರೆ.
ನಗರದ ಸಂತೇಪೇಟೆ, ರಾಜಮ್ಮ ಚನ್ನವೀರಪ್ಪ ಕಲ್ಯಾಣ ಮಂಟಪದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ವಾಲ್ಮೀಕಿ ಸಮಾಜದ ಸಮಾವೇಶದಲ್ಲಿ ಮಾತನಾಡಿದ ಅವರು, ದೇವೇಗೌಡರು ಎಲ್ಲಾ ಸಮಾಜದವರ ಆಸ್ತಿ. ಜಿಲ್ಲೆಯಲ್ಲಿ ಸಾವಿರಾರು ಜನ ಅಲ್ಪ ಸಂಖ್ಯಾತರು ಇದ್ದಾರೆ. ಜನಸೇವೆಯಲ್ಲಿ ತೊಡಗಿರುವ ಗೌಡರಿಗೆ ಏ. 17ರ ಚುನಾವಣೆಯಲ್ಲಿ ಬೆಂಬಲಿಸುವ ಮೂಲಕ ಶಕ್ತಿ ತುಂಬಬೇಕಿದೆ ಎಂದು ಕರೆ ನೀಡಿದರು.
ಭವಿಷ್ಯ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ. ತೃತೀಯ ರಂಗ ಅಧಿಕಾರಕ್ಕೆ ಬರಲಿದ್ದು, ಎಚ್.ಡಿ. ದೇವೇಗೌಡರ ನೇತೃತ್ವದಲ್ಲಿ ಸರ್ಕಾರ ರಚನೆಯಾಗಲಿದೆ ಎಂದು ಭವಿಷ್ಯ ನುಡಿದರು.
ದಲಿತರಿಗೆ ವಂಚನೆ: ಬಿ.ಪಿ. ಜಯರಾಮ್ ಮಾತನಾಡಿ, ಹಲವಾರು ಹಗರಣಗಳಿಂದ ಒಟ್ಟು ರು. 3 ಲಕ್ಷ ಕೋಟಿಗೂ ಹೆಚ್ಚು ಮೌಲ್ಯದ ಭ್ರಷ್ಟಚಾರ ಮಾಡಲಾಗಿದೆ ಎಂದು ದೂರಿದರು.
50 ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ದಲಿತರನ್ನು ವಂಚಿಸುತ್ತಾ ಬಂದಿದೆ. ಖಾಸಗಿ ಕ್ಷೇತ್ರದಲ್ಲಿ ಎಸ್.ಸಿ, ಎಸ್.ಟಿ, ಒಬಿಸಿಗಳಿಗೆ ಮೀಸಲಾತಿ ನೀಡಬೇಕೆಂಬ ಕೂಗಿಗೆ ಬೆಲೆ ನೀಡದ ಕಾಂಗ್ರೆಸ್ ಇನ್ಫೋಸಿಸ್, ರಿಲಯನ್ಸ್ ಮತ್ತು ವಿಪ್ರೋದಂತಹ ಕಾರ್ಪೋರೇಟ್ ಲಾಬಿಗೆ ಮಣಿದು ಸಾಮಾಜಿಕ ನ್ಯಾಯಕ್ಕೆ ತಿಲಾಂಜಲಿ ನೀಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಭ್ರಷ್ಟ ಕಾಂಗ್ರೆಸ್ ಹಾಗೂ ಕೋಮುವಾದಿ ಬಿಜೆಪಿ ಪಕ್ಷಗಳನ್ನು ಅಧಿಕಾರದಿಂದ ದೂರವಿಡಬೇಕಾಗಿದೆ ಎಂದು ಅವರು ಆಗ್ರಹಿಸಿದರು. ಜಿಲ್ಲಾ ವಾಲ್ಮಿಕಿ ಸಂಘದ ಅಧ್ಯಕ್ಷರು, ಜನಪ್ರತಿನಿಧಿಗಳು, ಹಿಂದುಳಿದ ಜಾತಿಯ ಮುಖಂಡರಾದ ಮಹಾಂತಪ್ಪ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, 83 ಕೆಜಿಯ ಬೃಹತ್ ಕೇಕ್ ಕತ್ತರಿಸಲಾಯಿತು.
ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂ, ಕ್ಷೇತ್ರದ ಶಾಸಕರಾದ ಎಚ್.ಎಸ್. ಪ್ರಕಾಶ್, ಜೆಡಿಎಸ್ ಜಿಲ್ಲಾಧ್ಯಕ್ಷ ಜಾವಗಲ್ ರಾಜಶೇಖರ್, ವಿಧಾನಪರಿಷತ್ ಸದಸ್ಯ ಎಚ್.ಡಿ. ಕೋಟೆ, ಜಿಪಂ ಮಾಜಿ ಅಧ್ಯಕ್ಷ ಬಿ.ಆರ್. ಸತ್ಯನಾರಾಯಣ್, ನಗರಸಭೆ ಅಧ್ಯಕ್ಷೆ ಶ್ರೀವಿದ್ಯಾ ಆನಂದ್, ಮುಖಂಡರಾದ ಕೆ.ಎಂ. ರಾಜೇಗೌಡ, ನಗರಸಭೆ ಮಾಜಿ ಅಧ್ಯಕ್ಷ ಸಿ.ಆರ್. ಶಂಕರ್, ಸಯ್ಯಾದ್ ಅಕ್ಬರ್, ಜಿಪಂ ಮಾಜಿ ಉಪಾಧ್ಯಕ್ಷ ಎಸ್. ದ್ಯಾವೇಗೌಡ, ಪಾರಿಜಾನ್ ಹಾಗೂ ಇತರರು ಇದ್ದರು.
ಜನ ಬೇಸತ್ತಿದ್ದಾರೆ
ಈ ಸಂದರ್ಭದಲ್ಲಿ ಮಾತನಾಡಿದ ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಹಾಗೂ ನಗರಸಭೆ ಮಾಜಿ ಅಧ್ಯಕ್ಷ ಚನ್ನವೀರಪ್ಪ, ದೇಶದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ದುರಾಡಳಿತದಿಂದ ಜನತೆ ಬೇಸತ್ತಿದ್ದಾರೆ. ಮುಂದಿನ ದಿವಸಗಳಲ್ಲಿ ತೃತೀಯ ರಂಗ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

