'ಮೂಲ ವಿಜ್ಞಾನ ನಿರಂತರ'
ಹೊಳೆನರಸೀಪುರ: ಮೂಲ ವಿಜ್ಞಾನಗಳು ಎಂದಿಗೂ ನಿರಂತರ ಮತ್ತು ಶಾಶ್ವತವಾಗಿ ಕಂಡುಬರುತ್ತವೆ ಎಂದು ಹೊಳೆನರಸೀಪುರ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಎಚ್.ಎಸ್. ರಮೇಶ್ ತಿಳಿಸಿದರು.
ಅವರು ತಾಲೂಕಿನ ಪಡುವಲಹಿಪ್ಪೆಯಲ್ಲಿನ ಎಚ್.ಡಿ. ದೇವೇಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ನಡೆದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಪ್ರಯುಕ್ತ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಭೌತಶಾಸ್ತ್ರ ವಿಭಾಗ ಜಂಟಿಯಾಗಿ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡುತ್ತಾ, ಮೂಲ ವಿಜ್ಞಾನಗಳಾದ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತಶಾಸ್ತ್ರ ಗಳು ಸಾರ್ವತ್ರಿಕ ಸತ್ಯಗಳಾಗಿವೆ ಎಂದು ಹೇಳಿದರು.
ಅಧ್ಯಯನದ ಮೂಲಕ ಬದುಕು: ಎಂದೆಂದಿಗೂ ಈ ವಿಜ್ಞಾನಗಳು ಮಹತ್ವವನ್ನು ಉಳಿಸಿಕೊಂಡು ಬರುತ್ತಿದ್ದು, ವಿದ್ಯಾರ್ಥಿಗಳು ಮೂಲ ವಿಜ್ಞಾನಗಳ ಕಡೆಗೆ ಹೆಚ್ಚಿನ ಆಸಕ್ತಿಯನ್ನು ವಹಿಸಿ, ಅಧ್ಯಯನ ಮಾಡುವ ಮೂಲಕ ತಮ್ಮ ಬದುಕನ್ನು ಕಟ್ಟಿಕೊಳ್ಳಬೇಕು ಎಂದು ಅವರು ಕರೆ ನೀಡಿದರು. ಇದೇ ಸಂದರ್ಭದಲ್ಲಿ ನೊಬೆಲ್ ಪ್ರಶಸ್ತಿ ಪುರಸ್ಕತ ಅಂತಾರಾಷ್ಟ್ರೀಯ ಖ್ಯಾತಿಯ ಭಾರತೀಯ ವಿಜ್ಞಾನಿ ಸರ್. ಸಿ.ವಿ. ರಾಮನ್ ಅವರ ಜೀವನ ಮತ್ತು ಸಾಧನೆಗಳನ್ನು ವಿವರಿಸಿದರು.
ಸಂಪ್ರದಾಯಗಳಲ್ಲಿ ವಿಜ್ಞಾನ: ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಡಿ. ನಾರಾಯಣ ಅವರು, ವಿಜ್ಞಾನ ಎಂಬುದು ವ್ಯಕ್ತಿ ಜೀವನದ ಅವಿಭಾಜ್ಯ ಅಂಗವಾಗಿದೆ. ಕಲೆ, ವಾಣಿಜ್ಯ ಹಾಗೂ ಯಾವುದೇ ವಿಭಾಗದ ವಿದ್ಯಾರ್ಥಿಗಳೂ ವಿಜ್ಞಾನದ ಅರಿವನ್ನು ಪಡೆಯುವುದು ಅತಿ ಅಗತ್ಯವಾಗಿದೆ. ನಮ್ಮ ಹಿರಿಯರು ಹಾಕಿಕೊಟ್ಟ ಅದೆಷ್ಟೋ ಸಂಪ್ರದಾಯಗಳಲ್ಲಿ ವಿಜ್ಞಾನದ ಸಾರ ಅಡಕವಾಗಿದೆ ಎಂದರು.
ಬದುಕು ರೂಪಿಸಿಕೊಳ್ಳಬಹುದು: ಪಿಯುಸಿ ನಂತರ ವಿಜ್ಞಾನದ ವಿದ್ಯಾರ್ಥಿಗಳು ಕೇವಲ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ವಿಭಾಗಗಳನ್ನು ಮಾತ್ರ ಭವಿಷ್ಯದ ಹಾದಿಗಳೆಂದು ಭಾವಿಸಿದ್ದಾರೆ.
ಇವುಗಳಷ್ಟೇ ಅಲ್ಲದೇ ಮೂಲ ವಿಜ್ಞಾನಗಳಲ್ಲಿ ಬಿಎಸ್ಸಿ, ಬಿಎಡ್, ಎಂಎಸ್ಸಿ, ಪಿ ಎಚ್ ಡಿ ಪದವಿಗಳನ್ನು ಪಡೆದುಕೊಳ್ಳುವ ಮೂಲಕ ಬದುಕನ್ನು ಉತ್ತಮವಾಗಿ ರೂಪಿಸಿಕೊಳ್ಳಬಹುದಾಗಿದೆ ಎಂದರು.
ಕಾಲೇಜಿನ ಗಣಿತಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಡಾ.ಪಿ.ಎನ್. ವಿನಯ್ ಕುಮಾರ್ ಸ್ವಾಗತಿಸಿದರು. ವಾಣಿ ಪ್ರಾರ್ಥಿಸಿದರು. ಭೌತಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಆರ್.ಎಸ್.ನಿರಂಜನ್ ವಂದಿಸಿದರು. ತೃತೀಯ ಬಿಎಸ್ಸಿ ವಿದ್ಯಾರ್ಥಿನಿಯರಾದ ಅಶ್ವಿನಿ ಮತ್ತು ಚಂದ್ರಿಕಾ ಕಾರ್ಯಕ್ರಮವನ್ನು ನಿರೂಪಿಸಿದರು. ಕಾಲೇಜಿನ ವಾಣಿಜ್ಯಶಾಸ್ತ್ರ, ಕಲಾ ಮತ್ತು ವಿಜ್ಞಾನ ವಿಭಾಗದ ಎಲ್ಲಾ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

