'ಚುನಾವಣೆ ನಂತರ ನೀರಾವರಿ ಯೋಜನೆ'
ಚನ್ನರಾಯಪಟ್ಟಣ: ಜಿಲ್ಲೆಯಲ್ಲಿ ಕೆಲ ಕಾರಣಗಳನ್ನು ಮುಂದಿಟ್ಟುಕೊಂಡು ಏತ ನೀರಾವರಿ ಯೋಜನೆಗಳು ನೆನೆಗುದಿಗೆ ಬಿದ್ದಿದ್ದು, ಚುನಾವಣಾ ನಂತರ ಅವುಗಳನ್ನು ಚಾಲನೆ ನೀಡುವುದೇ ತಮ್ಮ ಕೆಲಸವಾಗಿದೆ ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದರು.
ಪಟ್ಟಣದ ಶ್ರೀ ವಿನಾಯಕ ಕಾರು ನಿಲ್ದಾಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎ. ಮಂಜು ಪರ ಮತಯಾಚಿಸಿ ಮಾತನಾಡಿ ಜಿಲ್ಲೆಯಲ್ಲಿ ಏತ ನೀರಾವರಿ ಯೋಜನೆಗಳನ್ನು ಕಲ್ಪಿಸಲು ಕಾಂಗ್ರೆಸ್ ಸರ್ಕಾರ ಹಣ ನೀಡಿದ್ದರೂ ಅವುಗಳ ಕಾಮಗಾರಿ ಪೂರ್ಣಗೊಳಿಸಿದರೆ ಕಾಂಗ್ರೆಸ್ ಪಕ್ಷಕ್ಕೆ ಹೆಸರು ಬರುತ್ತದೆ ಎಂದು ನೆನೆಗುದಿಗೆ ತಳ್ಳಿದ್ದಾರೆ ಎಂದು ಟೀಕಿಸಿದರು.
ಅಧಿಕಾರಿಗಳಿಗೆ ಎಚ್ಚರಿಕೆ: ಹಾಸನ ಜಿಲ್ಲೆಯಲ್ಲಿ ತಮ್ಮ ಪ್ರಾಬಲ್ಯವನ್ನು ತೋರುತ್ತಿರುವ ಅಪ್ಪಮಕ್ಕಳ ತಾಳಕ್ಕೆ ತಕ್ಕಂತೆ ಅಧಿಕಾರಿಗಳು ಕುಣಿಯುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಅದು ನಡೆಯುವುದಿಲ್ಲ ಎಂದರು.
ಎಚ್ಡಿಕೆ ವಿರುದ್ಧ ಪರೋಕ್ಷ ಟೀಕೆ: ರಾಮನಗರದಿಂದ ತಮ್ಮ ಸಹೋದರ ವಿರುದ್ಧ ಸೋಲು ಖಚಿತ ಎಂದು ತಿಳಿದು ಚಿಕ್ಕಬಳ್ಳಾಪುರಕ್ಕೆ ಪಲಾಯನ ಮಾಡಿರುವ ಮಾಜಿ ಮುಖ್ಯಮಂತ್ರಿಗಳಿಗೆ ಅಲ್ಲಿಯೂ ಸೋಲು ಕಟ್ಟಿಟ್ಟಿದ್ದು. ಇವರು ರಾಜ್ಯದಲ್ಲಿ ಯಾವ ಕ್ಷೇತ್ರದಿಂದಲೂ ಗೆಲ್ಲಲು ಸಾಧ್ಯವಿಲ್ಲ. ಇಷ್ಟಿದ್ದರೂ ದೇವೇಗೌಡ ಅವರು ತಮ್ಮ ಮೊಮ್ಮಕ್ಕಳನ್ನು ರಾಜಕೀಯಕ್ಕೆ ತರುವ ಪ್ರಯತ್ನದಲ್ಲಿದ್ದಾರೆ ಎಂದು ಅವರು ತಿಳಿಸಿದರು.
ಕಾಂಗ್ರೆಸ್ ಅಭ್ಯರ್ಥಿ ಎ. ಮಂಜು ಮಾತನಾಡಿ, ಎಚ್.ಡಿ. ರೇವಣ್ಣ ಅವರು ಜಿಲ್ಲೆಗೆ ಯಾವ ಅಭಿವೃದ್ಧಿ ಮಾಡಿದ್ದಾರೆಂದು ಸಾಬೀತುಪಡಿಸಬೇಕಾದರೆ ಹೇಮಾವತಿ ನದಿಗೆ ತಮ್ಮ ಮನೆಯ ಬಳಿ ಕಟ್ಟಿಸಿರುವ ತಡೆಗೋಡೆಯೊಂದೇ ಉದಾಹರಣೆ ಎಂದರು.
ಮಾಜಿ ಸಚಿವೆ ರಾಣಿ ಸತೀಶ್, ಮಾಜಿ ಶಾಸಕ ಸಿ.ಎಸ್. ಪುಟ್ಟೇಗೌಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ. ಶಿವರಾಂ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಅಶ್ವಿನ್ಕುಮಾರ್ ರೈ, ವಿಧಾನಪರಿಷತ್ ಮಾಜಿ ಸದಸ್ಯ ಎಸ್.ಎಂ. ಆನಂದ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಲಿತಮ್ಮ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಾಲಸ್ವಾಮಿ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷರಾದ ಚಂದ್ರಶೇಖರ್, ವಿಜಯ್ ಕುಮಾರ್, ಜಿಲ್ಲಾ ಪಂಚಾಯಿತಿ ಸದಸ್ಯ ರಂಗಸ್ವಾಮಿ, ನಂಜುಂಡೇಗೌಡ, ಸಿ.ವಿ. ರಾಜಪ್ಪ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಗೌಡರ ಕೊಡುಗೆಏನು?
ಸಿದ್ದರಾಮಯ್ಯ ಅವರು ರು. 1ಗೆ ಅಕ್ಕಿ, ಹಾಲಿಗೆ ರು. 4 ಸಹಾಯಧನ, ಹಾಗೂ ಇತರೆ ಕಾಯಕ್ರಮಗಳನ್ನು ಜಾರಿಗೆ ತಂದು ರಾಜ್ಯದ ಎಲ್ಲರ ಮನಗೆದ್ದಿದ್ದಾರೆ. ದೇವೇಗೌಡ ಅವರು ಮುಖ್ಯಮಂತ್ರಿ, ಪ್ರಧಾನಿಯಾದರೂ ಅವರು ಈ ರಾಜ್ಯಕ್ಕೆ ನೀಡಿದ ಕೊಡುಗೆಯೇನು ಎಂಬುದನ್ನು ಸಾಕ್ಷೀಕರಿಸಲಿ ಎಂದು ಸವಾಲು ಹಾಕಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

