ಕಾಂಗ್ರೆಸ್ ಪಾದಯಾತ್ರೆ
ಕ.ಪ್ರ. ವಾರ್ತೆ ತುಮಕೂರು ಏ.6
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ತುಮಕೂರು ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ನಗರಪಾಲಿಕೆ ಸದಸ್ಯರು, ಮುಖಂಡರು ಹಾಗೂ ವಿವಿಧ ಬ್ಲಾಕ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಭೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಷಫಿ ಅಹಮದ್ ಅಧ್ಯಕ್ಷತೆಯಲ್ಲಿ ನಡೆಯಿತು.
ನಗರಪಾಲಿಕೆ ಸದಸ್ಯ, ವಿವಿಧ ಬ್ಲಾಕ್ಗಳ ಅಧ್ಯಕ್ಷರು, ಸಾಹಿತಿಗಳು, ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದ ಈ ಸಭೆಯಲ್ಲಿ ತುಮಕೂರು ನಗರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಸ್.ಪಿ. ಮುದ್ದಹನುಮೇಗೌಡರ ಗೆಲವಿಗೆ ಮುಖಂಡರು ಮತ್ತು ಕಾರ್ಯಕರ್ತರು ವ್ಯಾಪಕ ಪ್ರಚಾರ ಕೈಗೊಳ್ಳುವ ನಿಟ್ಟಿನಲ್ಲಿ ಚರ್ಚೆ ನಡೆಸಿ ಏಪ್ರಿಲ್ 7 ರಿಂದ 12 ರವರೆಗೆ ನಿರಂತರವಾಗಿ ನಗರದ 35 ವಾರ್ಡುಗಳಲ್ಲಿ ಪಾದಯಾತ್ರೆ ಮೂಲಕ ಪ್ರಚಾರ ನಡೆಸಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್. ಷಫಿ ಅಹಮದ್ ಮಾತನಾಡಿ, ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಶತಾಯ ಗತಾಯ ಕಾಂಗ್ರೆಸ್ ಅಭ್ಯರ್ಥಿಯ ಗೆಲವಿಗೆ ನಾವೆಲ್ಲರೂ ಹೋರಾಟ ಮಾಡಬೇಕಾಗಿದೆ. ಒಂದು ಕಾಲದಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ತುಮಕೂರು ಇತ್ತೀಚಿನ ವರ್ಷಗಳಲ್ಲಿ ಗೆಲ್ಲುವುದು ಕಷ್ಟವಾಗಿದೆ. ಈ ನಿಟ್ಟಿನಲ್ಲಿ ಮುಖಂಡರು ಎಲ್ಲರೂ ಒಗ್ಗೂಡಿ ಕೆಲಸ ಮಾಡಿದರೆ
ಈ ಬಾರಿ ಗೆಲವು ಸಾಧಿಸಬಹುದು. ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರು, ನಗರಪಾಲಿಕೆ ಸದಸ್ಯರು ಒಗ್ಗೂಡಿ ಕೆಲಸ ಮಾಡುವ ಮೂಲಕ ಪಕ್ಷದ ಅಭ್ಯರ್ಥಿ ಮುದ್ದಹನುಮೇಗೌಡರ ಗೆಲುವಿಗೆ ಶ್ರಮಿಸುವಂತೆ ಕರೆ ನೀಡಿದರು. ತುಮಕೂರು ನಗರ ಶಾಸಕ ಡಾ.ರಫೀಕ್ ಅಹಮದ್ ಮಾತನಾಡಿ, ಕೇಂದ್ರದ ಯುಪಿಎ ಮತ್ತು ಸಿದ್ದರಾಮಯ್ಯ ನೇತೃತ್ವದ ರಾಜ್ಯಸರಕಾರ ಬಡವರು, ದೀನದಲಿತರು, ಕೊಳಗೇರಿ ನಿವಾಸಿಗಳು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರಿಗೆ ಹಲವಾರು ಯೋಜನೆಗಳನ್ನು ತರುವ ಮೂಲಕ ಅವರ ಅರ್ಥಿಕ ಮತ್ತು ಸಾಮಾಜಿಕ ಉನ್ನತಿಗೆ ಪೂರಕವಾಗಿ ಕೆಲಸ ಮಾಡಿದೆ. ಆದ್ದರಿಂದ ಪಕ್ಷದಲ್ಲಿರುವ ನಗರಪಾಲಿಕೆ ಸದಸ್ಯರು, ಪಕ್ಷದ ವಿವಿಧ ಬ್ಲಾಕ್ಗಳ ಮುಖಂಡರು ಒಗ್ಗೂಡಿ ಕೆಲಸ ಮಾಡುವ ಮೂಲಕ ಮುದ್ದಹನುಮೇಗೌಡರ ಗೆಲವಿಗೆ ಹೋರಾಡಬೇಕಾಗಿದೆ. ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಜನಪರ ಕಾರ್ಯಕ್ರಮಗಳನ್ನು ಪ್ರತಿಮನೆ ಮನೆಗೆ ತಿಳಿಸುವ ಮೂಲಕ ಮತದಾರರು ಕಾಂಗ್ರೆಸ್ ಪಕ್ಷದತ್ತ ಒಲವು ತೋರುವಂತೆ ಮಾಡಬೇಕಾಗಿದೆ ಎಂದರು.
ಗೆಲವಿಗೆ ಶ್ರಮಿಸಿ: ಏ.7 ರಿಂದ 12 ರವರೆಗೆ ನಗರದ 35 ವಾರ್ಡುಗಳಲ್ಲಿಯೂ ನಡೆಯುವ ನಿರಂತರ ಪ್ರಚಾರ ಪಾದಯಾತ್ರೆಯಲ್ಲಿ ಎಲ್ಲಾ ಮುಖಂಡರು, ಕಾರ್ಯಕರ್ತರು ಭಾಗವಹಿಸಿ ಪಕ್ಷದ ಅಭ್ಯರ್ಥಿಯ ಗೆಲವಿಗೆ ಶ್ರಮಿಸಬೇಕೆಂದರು.
ಸಭೆಯಲ್ಲಿ ನಗರಪಾಲಿಕೆ ಅಧ್ಯಕ್ಷೆ ಗೀತಾರುದ್ರೇಶ್, ಸದಸ್ಯರಾದ ನಯಾಜ್, ಹಫೀಜ್, ಮೆಹಬೂಬ್ ಪಾಷ, ಮುಖಂಡರಾದ ಅನ್ನಪೂರ್ಣ ವೆಂಕಟನಂಜಪ್ಪ, ಹಿಂದುಳಿದ ವರ್ಗಗಗಳ ವಿಭಾಗದ ಅಧ್ಯಕ್ಷ ಟಿ.ಬಿ. ಮಲ್ಲೇಶ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್,ಅಫ್ತಾಬ್ ಅಹಮದ್, ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ರಾಮಕೃಷ್ಣಯ್ಯ ಸೇರಿದಂತೆ ಎಲ್ಲಾ ನಗರಪಾಲಿಕೆ ಸದಸ್ಯರು,ವಿವಿಧ ಬ್ಲಾಕ್ಗಳ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

