ಹಾಸನ

'ಎತ್ತಿನಹೊಳೆ ತಮ್ಮದೆನ್ನುತ್ತಿರುವ ಕಾಂಗ್ರೆಸ್‌ಗೆ ನಾಚಿಕೆ ಇಲ್ಲ'

Published On :

ಅರಸೀಕೆರೆ: ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಎತ್ತಿನಹೊಳೆ ನೀರಾವರಿ ಯೋಜನೆಗೆ ಟೆಂಡರ್ ಕರೆಯಲಾಗಿದ್ದು ಅದನ್ನು ತಮ್ಮ ಸಾಧನೆ ಎಂದು ಹೇಳಿಕೊಳ್ಳುತ್ತಿರುವ ಕಾಂಗ್ರೆಸಿಗರಿಗೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನಾಚಿಕೆಯಾಗುವುದಿಲ್ಲವೇ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಕಿಡಿಕಾರಿದರು.
ಪಟ್ಟಣದ ತಾಲೂಕು ಕಚೇರಿಯಿಂದ ಪಿಪಿ ವೃತ್ತದವರೆಗೂ ಶನಿವಾರ ಪಾದಯಾತ್ರೆ ನಡೆಸುವ ಮೂಲಕ ಹಾಸನ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿ.ಎಚ್.ವಿಜಯಶಂಕರ್ ಪರವಾಗಿ ಸಾರ್ವಜನಿಕರಲ್ಲಿ ಮತಯಾಚನೆ ಮಾಡಿದ ಅವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಪಕ್ಕದ ಮನೆಯಲ್ಲಿ ಗಂಡು ಮಕ್ಕಳಾದರೇ ತಮ್ಮದೆ ಮಗು ಎನ್ನುವ ಪರಿಪಾಠವನ್ನು ಕಾಂಗ್ರೆಸಿಗರು ಮುಂದುವರೆಸಿಕೊಂಡು ಬಂದಿರುವುದಕ್ಕೆ ತಾಜಾ ಉದಾಹರಣೆಯಾಗಿದೆ ಎಂದರು.
ಸದಾನಂದಗೌಡ ಮುಖ್ಯಮಂತ್ರಿ ಹಾಗೂ ಬಸವರಾಜು ಬೊಮ್ಮಾಯಿ ನೀರಾವರಿ ಸಚಿವರಾಗಿದ್ದ ಅವಧಿಯಲ್ಲಿ ಎತ್ತಿನಹೊಳೆ ಯೋಜನೆಗೆ ಅನುನುಷ್ಠಾನಗೊಳಿಸಲಾಗಿದ್ದು, ನಂತರ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಆ ಯೋಜನೆಯನ್ನು ಪುನರ್ ಪರಿಶೀಲಿಸಿ ಯೋಜನೆಗಾಗಿ ನಿಗದಿಪಡಿಸಿದ್ದ ಹಣವನ್ನು ಹೆಚ್ಚುಗೊಳಿಸಿದ್ದಷ್ಟೇ ಕಾಂಗ್ರೆಸ್ ಸಾಧನೆ. ಇದನ್ನು ತಮ್ಮದೆಂದು ಹೇಳಿಕೊಳ್ಳುವುದು ಎಷ್ಟರ ಮಟ್ಟಿಗೆ ಸರಿ ಎಂಬುದನ್ನು ಪಶ್ನಿಸಿಕೊಳ್ಳಲಿ ಎಂದು ತಿಳಿಸಿದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ತಾಲೂಕಿಗೆ ಯಗಚಿ ಕುಡಿಯುವ ನೀರು, ಹೊನ್ನವಳ್ಳಿ ಏತ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆಯಲ್ಲದೆ, ಪಟ್ಟಣದ ಶುದ್ಧ ಕುಡಿಯುವ ನೀರು ಯೋಜನೆ 477 ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು ಯೋಜನೆಗೆ ಹಣ ಮಂಜೂರು ಮಾಡಲಾಗಿದ್ದು ಕಾಮಗಾರಿ ಪ್ರಗತಿಯಲ್ಲಿದೆ. ಆದರೆ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಯಾವ ಯಾವ ಅಭಿವೃದ್ಧಿ ಕಾರ್ಯಗಳನ್ನು ಅನುಷ್ಟಾನಗೊಳಿಸಲಾಗಿದೆ ಎಂಬುದನ್ನು ತಿಳಿಸಲಿ ಎಂದು ಸವಾಲು ಹಾಕಿದರು.
ಶಿವಮೊಗ್ಗ ಕ್ಷೇತ್ರದಲ್ಲಿ ಬಿ.ಎಸ್.ಯಡಿಯೂರಪ್ಪನವರಿಗೆ ಎದುರಾಳಿಗಳೇ ಇಲ್ಲ, ನಮ್ಮ ಜಿಲ್ಲೆ ಹಿಂದಿನಿಂದಲೂ ಕಲೆ-ಕಲಾವಿದರಿಗೆ ಗೌರವ ಕೊಡುತ್ತಾ ಬಂದಿದ್ದು ಈಗಲೂ ಚಲನಚಿತ್ರ ನಟ-ನಟಿಯರು ಬಂದಾಗ ಅವರನ್ನು ನೋಡಿ ಆನಂದಿಸಿ ಗೌರವ ನೀಡುತ್ತಿದ್ದಾರೆ. ಆದರೆ, ಅದು ಮತವಾಗಿ ಪರಿವರ್ತನೆಗೊಳ್ಳಲು ಸಾಧ್ಯವಿಲ್ಲ ಎಂದು ನುಡಿದರು.
ರಾಜ್ಯ ಸರ್ಕಾರದ ಆಡಳಿತದ ವಿರುದ್ದವೇ ಕಾಂಗ್ರೆಸ್ ರಾಜ್ಯಾಧ್ಯಕ್ಷ ಪರಮೇಶ್ವರ್ ಹಾಗೂ ಕೇಂದ್ರ ಮಾಜಿ ಸಚಿವ ಸಿ.ಕೆ.ಜಾಫರ್ ಷರೀಪ್ ಅವರು ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ದಲಿತರು ಮತ್ತು ಹಿಂದುಳಿದ ವರ್ಗಗಳ ಅಲ್ಪಸಂಖ್ಯಾತ ಜನರನ್ನು ಕಡೆಗಣಿಸಲಾಗುತ್ತಿದೆ ಎಂದು ಬಹಿರಂಗವಾಗಿ ಟೀಕಿಸಿದ್ದನ್ನು ಮರೆತ್ತಿದ್ದಾರೆಯೇ, ಎಂದು ಪ್ರಶ್ನಿಸಿದರು. ಈ ಎಲ್ಲಾ ವರ್ಗದ ಅಭಿವೃದ್ದಿಗಾಗಿ ರು. 1 ಸಾವಿರ ಕೋಟಿ ನೀಡಿದ್ದು, ಬಿಜೆಪಿ ಸರ್ಕಾರದ ಸಾಧನೆಯಾಗಿದೆ ಎಂಬುದನ್ನು ರಾಜ್ಯದ ಜನತೆ ಎಂದಿಗೂ ಮರೆಯದೆ ಈ ಬಾರಿ ಬಿಜೆಪಿ ಬೆಂಬಲಿಸಲಿದ್ದಾರೆ ಎಂದರು.
ತಪ್ಪು ಮಾಡುವುದು ಮನುಷ್ಯನ ಸಹಜ ಗುಣ ಅದನ್ನು ತಿದ್ದಿ ನಡೆಯುವುದು ನಿಜವಾದ ಧರ್ಮ ಗುಣ. ಬಿಜೆಪಿ ಮುಖಂಡರು ಭಿನ್ನಾಭಿಪ್ರಾಯ ಬದಿಗಿಟ್ಟು ಒಂದಾಗಿದ್ದಾರೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.