ಹಾಸನ

ಆತ್ಮರಕ್ಷಣೆ, ನಾಗರಿಕ ತರಬೇತಿಗೆ ಚಾಲನೆ

Published On :

ಕ.ಪ್ರ.ವಾರ್ತೆ    ಹಾಸನ    ಫೆ. 3
ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಯುವತಿಯರಿಗಾಗಿ  ಸ್ವ- ಆತ್ಮ ರಕ್ಷಣಾ ತರಬೇತಿ, ನಾಗರಿಕ ಬಂದೂಕು ತರಬೇತಿ ಮತ್ತು ತಾಲೂಕು ಕೇಂದ್ರಗಳಲ್ಲಿ ದೂರುಪೆಟ್ಟಿಗೆ ವಿಸ್ತರಣಾ ಕಾರ್ಯಕ್ರಮ ಸೋಮವಾರ ನಡೆಯಿತು.
ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉಪೇಂದ್ರ ಪ್ರತಾಪ್ ಸಿಂಗ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಪೊಲೀಸ್ ಇಲಾಖೆಯ ಮೇಲೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಭಯವಿದೆ. ಇಂತಹ ಹೋಗಲಾಡಿಸುವ ಮೂಲಕ ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕರ ನಡುವಿನ ಬಾಂಧವ್ಯವನ್ನು ವೃದ್ಧಿಸಬೇಕು ಎಂದು ಹೇಳಿದರು.
ಉಪಯೋಗ ಆಗಲಿದೆ: ಇತ್ತೀಚೆಗೆ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕ ಜೀವನದಲ್ಲಿ ಪೊಲೀಸ್ ಸೇವೆ ಅತ್ಯವಶ್ಯಕವಾಗಿದೆ. ಜಿಲ್ಲಾ ಪೊಲೀಸ್ ಇಲಾಖೆಯು ಹೊಸ ಹೊಸ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದರಿಂದ ಜಿಲ್ಲೆಯಲ್ಲಿ ಸಾಕಷ್ಟು ಅಪರಾಧ ಪ್ರಕರಣಗಳು ಕಡಿಮೆಯಾಗುತ್ತಿವೆ. ಯುವತಿಯರ ಆತ್ಮ ರಕ್ಷಣೆಗೆ ತರಬೇತಿ ನೀಡುತ್ತಿರುವುದು, ನಾಗರಿಕ ಬಂದೂಕು ತರಬೇತಿ ಹಾಗೂ ದೂರು ಪೆಟ್ಟಿಗೆಗಳನ್ನು ಅಳವಡಿಸುತ್ತಿರುವುದರಿಂದ ಸಾರ್ವಜನಿಕರಿಗೆ ಸಾಕಷ್ಟು ಉಪಯೋಗ ಆಗಲಿದೆ ಎಂದರು.
ಇಲಾಖೆಗೆ ಸಹಕಾರ: ಜಿಲ್ಲಾಧಿಕಾರಿ ವಿ. ಅನ್ಬುಕುಮಾರ್ ಮಾತನಾಡಿ, ಯಾವುದೇ ದೇಶ ಅಭಿವೃದ್ಧಿಯಾಗಬೇಕಾದರೆ ಅದಕ್ಕೆ ಕಾನೂನು ಅತ್ಯವಶ್ಯಕ. ಆದ್ದರಿಂದ ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕರ ನಡುವಿನ ಬಾಂಧವ್ಯವನ್ನು ಹೆಚ್ಚಿಸಬೇಕು ಮತ್ತು ಇಲಾಖೆಯ ಮೇಲೆ ಸಾರ್ವಜನಿಕರಲ್ಲಿ ಇರುವಂತಹ ಭಯದ ವಾತಾವರಣವನ್ನು ಹೊಗಲಾಡಿಸಬೇಕು. ಜನರ ಮನೆ ಬಾಗಿಲಿಗೆ ಸೇವೆಯನ್ನು ಒದಗಿಸುವಂತಹ ಕೆಲಸವನ್ನು ಪೊಲೀಸ್ ಇಲಾಖೆ ಮಾಡುತ್ತಿದೆ ಎಂದು ಹೇಳಿದರು.
ಜಿಲ್ಲಾ ಪೊಲೀಸ್ ಇಲಾಖೆಯು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಕಳವು ಪ್ರಕರಣಗಳನ್ನು ಕಡಿಮೆ ಅವಧಿಯಲ್ಲಿ ಹೆಚ್ಚು ಪತ್ತೆ ಹಚ್ಚಿ ವಾರಸುದಾರರಿಗೆ ನೀಡುವಂತಹ ಕಾರ್ಯವನ್ನು ನಿರ್ವಹಿಸುತ್ತಿದೆ.
ದೂರು ಪೆಟ್ಟಿಗೆಯು ಇಲಾಖೆಗೆ ಸವಾಲಾಗಿದೆ ಎಂದ ಅವರು, ಜಿಲ್ಲೆಯಲ್ಲಿ ನಡೆಯುವಂತಹ ಅಕ್ರಮ ಚಟುವಟಿಕೆಗಳ ಶಮನಕ್ಕೆ ಜಿಲ್ಲಾಡಳಿತ ಸದಾ ಜಿಲ್ಲಾ ಪೊಲೀಸ್ ಇಲಾಖೆಗೆ ಸಹಕಾರ ನೀಡಲಿದೆ ಎಂದು ಹೇಳಿದರು.
ಪ್ರಥಮ ಸ್ಥಾನ ಪಡೆದಿದೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣನವರ್ ಮಾತನಾಡಿ, ಸಾರ್ವಜನಿಕರಲ್ಲಿ ಪೊಲೀಸ್ ಇಲಾಖೆಯ ಮೇಲೆ ಇರುವಂತ ಭಯದ ವಾತಾವರಣವನ್ನು ಶಮನ ಮಾಡುವಂತಹ ಪ್ರಯತ್ನವನ್ನು ಮಾಡಲಾಗುತ್ತಿದೆ. ಪೊಲೀಸ್ ಠಾಣೆಗೆ ತೊಂದರೆ ಎಂದು ಬರುವಂತಹರಿಗೆ ಅತೀ ಕಡಿಮೆ ಅವಧಿಯಲ್ಲಿ ಸೇವೆ ಸಲ್ಲಿಸುವಂತ ಕಾರ್ಯವನ್ನು ನಡೆಸಲಾಗುತ್ತದೆ.
ಕಳುವಾದಂತಹ ವಸ್ತುಗಳನ್ನು ಅತಿ ಕಡಿಮೆ ಅವಧಿಯಲ್ಲಿ ಪತ್ತೆ ಹಚ್ಚಿ ವಾರಸುದಾರರಿಗೆ ವಾಪಸ್ ಹಿಂದಿರುಗಿಸುವುದು ಸವಾಲಿನ ವಿಷಯವಾಗಿದೆ. ಆದರೆ ಜಿಲ್ಲೆಯಲ್ಲಿ ನಮ್ಮ ಇಲಾಖೆಯ ಹೆಚ್ಚು ಕಳವು ವಸ್ತುಗಳನ್ನು ಪತ್ತೆ ಹಚ್ಚುವ ಮೂಲಕ ಮೈಸೂರು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದರು.
ಅರಿವು ಮೂಡಿಸುವ ಕಾರ್ಯಕ್ರಮ: ಹಾಸನ ನಗರದಲ್ಲಿ 15 ಸಿಸಿ ಕ್ಯಾಮೆರಾಗಳನ್ನು ಅಳವಡಿಸಿದ್ದು, ಇನ್ನು 12 ಕ್ಯಾಮೆರಾಗಳನ್ನು ಕೂಡಲೇ ನಗರದಲ್ಲಿ ಅಳವಡಿಸುವ ಮೂಲಕ ಅಪರಾಧ, ಅಕ್ರಮ ಚಟುವಟಿಕೆಗಳು, ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮಕೈಗೊಳ್ಳಲಾಗುತ್ತದೆ. ಇಲಾಖೆಯು ಕೇವಲ ಬಂದು ಬಸ್ ವ್ಯವಸ್ಥೆ ಮಾಡುವುದು, ಕಳ್ಳರನ್ನು ಹಿಡಿಯುವುದಷ್ಟೇ ಅಲ್ಲದೆ ಜನರಿಗೆ ಅರಿವು ಮೂಡಿಸುವಂತಹ ಕಾರ್ಯವನ್ನು ನಡೆಸಲಾಗುತ್ತದೆ ಎಂದು ಹೇಳಿದರು.
ವಿಸ್ತರಣೆ: ಇತ್ತೀಚೆಗೆ ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳು, ಚುಡಾಯಿಸುವಂತಹ ಪ್ರಕರಣಗಳು ಬಗ್ಗೆ ದೂರು ಬರುತ್ತಿರುವುದರಿಂದ ಮಹಿಳೆಯರು ಆತ್ಮ ರಕ್ಷಣೆಗಾಗಿ ಸ್ವ-ಆತ್ಮ ರಕ್ಷಣಾ ತರಬೇತಿ ಕಾರ್ಯಕ್ರಮ ನಡೆಸಲಾಗುತ್ತಿದೆ. 100 ಪಿಯುಸಿ ಮತ್ತು ಪದವಿ ಕಾಲೇಜು ವಿದ್ಯಾರ್ಥಿನಿಯರಿಗೆ ಏಳು ದಿನಗಳ ಕಾಲ ತರಬೇತಿ ನೀಡಲಾಗುತ್ತದೆ. ಮುಂದಿನ ದಿನಗಳಲ್ಲಿ ಈ ಕಾರ್ಯಕ್ರಮವನ್ನು ತಾಲೂಕು ಕೇಂದ್ರಗಳಿಗೆ ವಿಸ್ತರಿಸಲಾಗುತ್ತದೆ ಎಂದರು.
ನಾಗರೀಕರ ಆತ್ಮ ರಕ್ಷಣೆಗಾಗಿ ಬಂದೂಕು ಲೈಸನ್ಸ್ ಪಡೆಯುವವರಿಗೋಸ್ಕರ ಈ ಬಂದೂಕು ತರಬೇತಿಯನ್ನು ನೀಡಲಾಗುತ್ತಿದೆ. ಇದರಿಂದ ನಾಗರೀಕರಿಗೆ ತಮ್ಮ ಆತ್ಮ ರಕ್ಷಣೆ ಮಾಡಿಕೊಳ್ಳಲು ಸಹಾಯಕವಾಗಲಿದೆ.
ಈ ತರಬೇತಿಯಲ್ಲಿ 150 ನಾಗರಿಕರು ಪಾಲ್ಗೊಳ್ಳಲಿದ್ದಾರೆ ಎಂದ ಅವರು, ದೂರು ಪೆಟ್ಟಿಗೆಯನ್ನುತಾಲೂಕು ಕೇಂದ್ರಗಳಿಗೆ ವಿಸ್ತರಿಸಲಾಗುತ್ತಿದೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಚುಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರೆ ಅದನ್ನು ತಡೆಯಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಶ್ಮಿ ಹಾಗೂ ಇತರರು ಇದ್ದರು.


ಇತ್ತೀಚೆಗೆ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕ ಜೀವನದಲ್ಲಿ ಪೊಲೀಸ್ ಸೇವೆ ಅತ್ಯವಶ್ಯಕವಾಗಿದೆ. ಜಿಲ್ಲಾ ಪೊಲೀಸ್ ಇಲಾಖೆಯು ಹೊಸ ಹೊಸ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದರಿಂದ ಜಿಲ್ಲೆಯಲ್ಲಿ ಸಾಕಷ್ಟು ಅಪರಾಧ ಪ್ರಕರಣಗಳು ಕಡಿಮೆಯಾಗುತ್ತಿವೆ. ಯುವತಿಯರ ಆತ್ಮ ರಕ್ಷಣೆಗೆ ತರಬೇತಿ ನೀಡುತ್ತಿರುವುದು, ನಾಗರಿಕ ಬಂದೂಕು ತರಬೇತಿ ಹಾಗೂ ದೂರು ಪೆಟ್ಟಿಗೆಗಳನ್ನು ಅಳವಡಿಸುತ್ತಿರುವುದರಿಂದ ಸಾರ್ವಜನಿಕರಿಗೆ ಸಾಕಷ್ಟು ಉಪಯೋಗ ಆಗಲಿದೆ
ಟಿ  ಉಪೇಂದ್ರ ಪ್ರತಾಪ್ ಸಿಂಗ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ


ಪೊಲೀಸ್ ಠಾಣೆಗೆ ಸಿಸಿ ಕ್ಯಾಮೆರಾ ಸೌಲಭ್ಯ


ಪೊಲೀಸ್ ಠಾಣೆಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸುವಂತಹ ಪ್ರಯತ್ನಕ್ಕೆ ಇಲಾಖೆಯು ಮುಂದಾಗಿದೆ. ಈಗಾಗಲೇ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸುವಂತೆ ಕಾರ್ಯ ನಡೆಸಲಾಗುತ್ತದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣನವರ್ ತಿಳಿಸಿದರು.  ಮಟ್ಕಾ, ಜೂಜಾಟ ಸೇರಿದಂತೆ ಅಕ್ರಮ ಚಟುವಟಿಕೆ ನಡೆಸುವವರ ವಿರುದ್ಧ ಗೂಂಡಾ ಕಾಯ್ದೆ ಹಾಗೂ ಗಡಿಪಾರು ಮಾಡುವಂತಹ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಚನ್ನಣ್ಣನವರ್ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.