ಮೊರಾರ್ಜಿ ದೇಸಾಯಿ, ರಾಣಿ ಚನ್ನಮ್ಮ ಶಾಲೆಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಹಾಸನ: ರಾಜ್ಯ ಸರ್ಕಾರವು ಸ್ಥಾಪಿಸಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ 6ನೇ ತರಗತಿಯಿಂದ 10ನೇ ತರಗತಿಯವರೆಗೆ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗಳಲ್ಲಿ 6 ರಿಂದ 12ನೇ ತರಗತಿಯವರೆಗೆ ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು 2014-15ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪ್ರವೇಶ ಪರೀಕ್ಷೆಗೆ ಅರ್ಜಿ ವಿತರಣೆ ಫೆ. 3ರಿಂದ ಪ್ರಾರಂಭವಾಗುತ್ತಿದ್ದು, ಸಂಬಂಧಪಟ್ಟ ವಸತಿ ಶಾಲಾ ಪ್ರವೇಶ ಪರೀಕ್ಷಾ ಅರ್ಜಿ ಸ್ವೀಕೃತಿ ಕೇಂದ್ರದ ಪ್ರಾಂಶುಪಾಲರಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಫೆ. 24 ಕಡೇ ದಿನ. ಪ್ರವೇಶ ಪರೀಕ್ಷೆ ಮಾ. 23ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿದೆ.
ಉಚಿತ ವಿದ್ಯಾಭ್ಯಾಸ, ಪರಿಕರ: ಪಟ್ಟಿಯನ್ನು ಏ. 7ರಂದು ಪ್ರಕಟಿಸಲಾಗುವುದು. ಪ್ರತಿಭಾನ್ವಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಈ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರೆ ಸಾಮಗ್ರಿಗಳನ್ನು ನೀಡುವುದರ ಜೊತೆಗೆ ಉತ್ತಮವಾದ ವಿದ್ಯಾಭ್ಯಾಸ ನೀಡಲಾಗುತ್ತಿದೆ.
ಆದಾಯ ಮಿತಿ: ಈ ಶಾಲೆಗಳಲ್ಲಿ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಅಂದರೆ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗ ಮತ್ತು ಅಲ್ಪ ಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರವೇಶ ಲಭ್ಯವಿದೆ. ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯಮಿತಿ 2 ಲಕ್ಷ ರು., ಪರಿಶಿಷ್ಟ ವರ್ಗದವರಿಗೆ 2 ಲಕ್ಷ ರು. ಹಾಗೂ ಹಿಂದುಳಿದ ವರ್ಗದ ಪ್ರವರ್ಗ-1 ರವರಿಗೆ 1,00,000 ರು., ಪ್ರವರ್ಗ- 2ಎ, 2ಬಿ, 3ಎ ಮತ್ತು 3ಬಿ ಅವರಿಗೆ 44,500 ರು. ಆದಾಯ ಮಿತಿ ಇದೆ.
ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಶೇ.50 ಸೀಟುಗಳು ವಿದ್ಯಾರ್ಥಿನಿಯರಿಗೆ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ಬಾಲಕಿಯರ ವಸತಿ ಶಾಲೆಗಳಲ್ಲಿ ಶೇ.100 ರಷ್ಟು ವಿದ್ಯಾರ್ಥಿನಿಯರಿಗೆ ಸೀಟುಗಳು ಲಭ್ಯವಿವೆ. ಒಮ್ಮೆ ಈ ವಸತಿ ಶಾಲೆಗಳಿಗೆ ವಿದ್ಯಾರ್ಥಿ ಸೇರಿದಲ್ಲಿ 12ನೇ ತರಗತಿವರೆಗೆ ಉಚಿತವಾಗಿ ವಿದ್ಯಾಭ್ಯಾಸ ಮಾಡಬಹುದಾಗಿದೆ.
ಮೇಲ್ಕಂಡ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗಳಲ್ಲಿ 2014-15ನೇ ಸಾಲಿನಲ್ಲಿ 6ನೇ ತರಗತಿಗೆ 50 ವಿದ್ಯಾರ್ಥಿಗಳನ್ನು ಮಾತ್ರ ಸೇರಿಸಿಕೊಳ್ಳಲಾಗುವುದು. ಪ್ರಸ್ತುತ ಕರ್ನಾಟಕದ ಯಾವುದೇ ಶಾಲೆಯಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮತ್ತು ಈಗಾಗಲೇ ಮಾಡಿರುವ ಅರ್ಹ ವಿದ್ಯಾರ್ಥಿಗಳು ಈ ಬಗ್ಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಬಗ್ಗೆ 23ನೇ ಮಾರ್ಚ್ 2014 ರಂದು ತಾಲ್ಲೂಕು ಜಿಲ್ಲಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುವುದು.
ಅರ್ಜಿ ಸಿಗುವ ಸ್ಥಳ
ಪರೀಕ್ಷೆಗೆ ಬೇಕಾದ ಅರ್ಜಿಗಳು ಜಿಲ್ಲೆಯ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳ ಕಚೇರಿ, ತಾಲ್ಲೂಕಿನ ಸಮಾಜ ಕಲ್ಯಾಣ ಅಧಿಕಾರಿಗಳ ಕಚೇರಿ, ತಾಲೂಕಿನ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿಗಳ ಕಚೇರಿ, ತಾಲ್ಲೂಕಿನ ಮೊರಾರ್ಜಿ ದೇಸಾಯಿ ಮತ್ತು ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ವಸತಿ ಶಾಲೆಗಳಲ್ಲಿ ಲಭ್ಯವಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

