ವಿದ್ಯೆಯ ಮಹತ್ವ ಅರಿತುಕೊಳ್ಳಲು ಕರೆ
ಅರಸೀಕೆರೆ: ವಿದ್ಯಾರ್ಥಿಗಳು ಶಿಕ್ಷಣದ ಮಹತ್ವ ಅರಿತು ಅಧ್ಯಾಪಕರ ಮಾರ್ಗದರ್ಶನದಂತೆ ನಡೆದರೆ ವಿದ್ಯಾರ್ಥಿ ಜೀವನದಲ್ಲಿ ಸಾಕಷ್ಟು ಪ್ರಗತಿ ಹೊಂದಲು ಸಾಧ್ಯವೆಂದು ಕಲ್ಗುಂಡಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಕೆ.ಎಸ್. ಸತೀಶ್ ತಿಳಿಸಿದರು.
ಕಣಕಟ್ಟೆಯ ಶ್ರೀ ವಿದ್ಯಾರಣ್ಯ ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ಕಲ್ಗುಂಡಿಯ ವಿದ್ಯಾರಣ್ಯ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕಿವಿಮಾತು: ಸರ್ಕಾರವು ಶಾಲಾ ಮಕ್ಕಳಿಗೆ ಅನ್ನ ಭಾಗ್ಯ, ಕ್ಷೀರ ಭಾಗ್ಯ, ಬೈಸಿಕಲ್, ಉಚಿತ ಸಮವಸ್ತ್ರ, ಪಠ್ಯ ಪುಸ್ತಕ ಮುಂತಾದ ಅಗತ್ಯ ಸೌಲಭ್ಯಗಳನ್ನು ಕೊಟ್ಟಿರುವ ಸಂದರ್ಭದಲ್ಲಿ ಚೆನ್ನಾಗಿ ಓದಿ ಶಾಲೆಗೆ ಮತ್ತು ತಂದೆ, ತಾಯಿಗಳಿಗೆ ಕೀರ್ತಿ ತರಬೇಕೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷ ಪರಮೇಶ್ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಆಂಗ್ಲ ಭಾಷೆಯ ವ್ಯಾಮೋಹ ತೊರೆದು ಕನ್ನಡ ಮಾಧ್ಯಮದಲ್ಲೇ ಅಭ್ಯಾಸ ಮಾಡಿ ಹೆಚ್ಚಿನ ಅಂಕ ಗಳಿಸಬಹುದೆಂದರು.
ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಪ್ರೊ. ಯು.ಆರ್.ರಾವ್, ರಸಾಯನಶಾಸ್ತ್ರ ವಿಜ್ಞಾನಿ ಪ್ರೊ. ಸಿ.ಎನ್.ಆರ್. ರಾವ್ ಮುಂತಾದ ಖ್ಯಾತನಾಮರು ಕನ್ನಡ ಮಾಧ್ಯಮದಲ್ಲೇ ಅಭ್ಯಸಿಸಿ ಅಂತಾರಾಷ್ಟ್ರೀಯ ಮನ್ನಣೆ ಗಳಿಸಿರುತ್ತಾರೆ. ಆದ್ದರಿಂದ ನಮ್ಮ ಮಾತೃಭಾಷೆಯ ಬಗ್ಗೆ ಯಾವುದೇ ಕೀಳರಿಮೆಯಿಲ್ಲದೇ ಚೆನ್ನಾಗಿ ಓದಿ ಹೆಚ್ಚಿನ ಅಂಕ ಗಳಿಸಬೇಕೆಂದರು.
ಫಲಿತಾಂಶ ನಿರೀಕ್ಷೆಯಲ್ಲಿ: ಅಧ್ಯಕ್ಷತೆ ವಹಿಸಿದ್ದ ಶ್ರೀ ವಿದ್ಯಾರಣ್ಯ ವಿದ್ಯಾ ಸಂಸ್ಥೆಯ ಗೌರವ ಕಾರ್ಯದರ್ಶಿ ಕೆ.ಎ.ನಾಗೇಶರಾವ್ ಮಾತನಾಡಿ, ಶ್ರದ್ಧಾವಾನ್ ಲಭತೇ ವಿದ್ಯಾ ಎಂಬಂತೆ ಶಾಲೆಯಲ್ಲಿ ಶಿಕ್ಷಕರು ಮಾಡು ಬೋಧನೆ ಮತ್ತು ಅವರು ನೀಡುವ ಸೂಚನೆಗಳನ್ನು ಶ್ರದ್ಧೆಯಿಂದ ಪಾಲಿಸಿದ್ದಲ್ಲಿ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಬಹುದೆಂದರು.
ನಮ್ಮ ಶಾಲೆ ಕಳೆದ ಎರಡು ವರ್ಷದಿಂದ ಸತತವಾಗಿ ಶೇ.100ರಷ್ಟು ಫಲಿತಾಂಶ ಪಡೆಯುತ್ತಿರುವುದರಿಂದ ಈ ಬಾರಿ ಹ್ಯಾಟ್ರಿಕ್ ಸಾಧನೆಯ ನಿರೀಕ್ಷೆಯಲ್ಲಿರುವುದಾಗಿ ತಿಳಿಸಿದರು.
ವೇದಿಕೆಯಲ್ಲಿ ಗ್ರಾಪಂ ಸದಸ್ಯ ರಮೇಶ್, ತಿಮ್ಮಪ್ಪ, ಮುಖ್ಯಶಿಕ್ಷಕ ಬಿ.ಆರ್. ಚಂದ್ರಶೇಖರಪ್ಪ , ನಾಗರಾಜ್, ಸೋಮಶೇಖರ್, ಶ್ರೀನಿವಾಸ, ಓಂಕಾರಮೂರ್ತಿ, ಓಬಳಾನಾಯ್ಕ ಇದ್ದರು. ವೇದಿಕೆಯ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಕಲ್ಗುಂಡಿ, ವಾಲೇಹಳ್ಳಿ, ಗೊಲ್ಲರಹಳ್ಳಿ ಮತ್ತು ನರಸೀಪುರ ಗ್ರಾಮಸ್ಥರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

