'ಕಾನೂನು ಉಲ್ಲಂಘನೆ ಶಿಕ್ಷಾರ್ಹ ಅಪರಾಧ'
ಹೊಳೆನರಸೀಪುರ: ಕಾನೂನಿನ ಉಲ್ಲಂಘನೆಯ ಪ್ರಕರಣಗಳು ಅವಿದ್ಯಾವಂತರಿಗಿಂತಲೂ, ವಿದ್ಯಾವಂತರು ಮತ್ತು ಪ್ರಜ್ಞಾವಂತ ನಾಗರಿಕ ಸಮಾಜದಿಂದಲೇ ಹೆಚ್ಚಾಗಿ ನಡೆಯುತ್ತಿರುವುದು ನಿಜಕ್ಕೂ ವಿಷಾದದ ಸಂಗತಿಯಾಗಿದೆಯಾದರೂ ಕಾನೂನಿನ ಉಲ್ಲಂಘನೆ ಶಿಕ್ಷಾರ್ಹಅಪರಾಧವಾಗಿದೆ ಎಂದು ಇಲ್ಲಿನ ನಗರ ಠಾಣೆಯ ಪಿಎಸ್ಸೈ ಶಿವಕುಮಾರ್ ತಿಳಿಸಿದರು.
ಅವರು ಸೋಮವಾರದಂದು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದ ಯುವ ವೇದಿಕೆಯ ಆಶ್ರಯದಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿದ್ದ ಸ್ವಾಮಿ ವಿವೇಕಾನಂದ ಜಯಂತಿ ಮತ್ತು ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದಡಿಯಲ್ಲಿ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಹಾಗೂ ಅವರ ಸಾಮಾಜಿಕ ಜವಾವ್ದಾರಿಗಳ ಕುರಿತು ಮಾತನಾಡಿದ ಅವರು, ಇತ್ತಿಚಿನ ದಿನಗಳಲ್ಲಿ ಸಂಚಾರಿ ನಿಯಮಗಳ ಉಲ್ಲಂಘನೆಯಿಂದಾಗಿ ಅಪಘಾತಗಳ ಪ್ರಕರಣಗಳು ಹೆಚ್ಚುತ್ತಿವೆ ಎಂದರು.
ಪ್ರತಿಯೊಬ್ಬ ವಾಹನ ಸವಾರರೂ ನಮ್ಮ ಜೀವ ನಮ್ಮ ಕೈಯಲ್ಲಿ ಎಂಬ ಅಂಶವನ್ನು ಮನಸ್ಸಿನಲ್ಲಿಟ್ಟು ವಾಹನ ಚಾಲನೆ ಮಾಡಿದಲ್ಲಿ ಅಪಘಾತ ಪ್ರಕರಣಗಳನ್ನು ಸಾಕಷ್ಟು ಕಡಿಮೆಗೊಳಿಸಲು ಅವಕಾಶಗಳಿವೆ ಎಂದ ಅವರು, ವಾಹನ ಚಾಲನೆಯ ಸಂದರ್ಭದಲ್ಲಿ ಮೊಬೈಲ್ ಬಳಕೆ ಬೇಡ ಮತ್ತು ವಾಹನ ಚಾಲನೆಯ ಸಂದರ್ಭದಲ್ಲಿ ನಿಮ್ಮ ವಾಹನಕ್ಕೆ ಸಂಬಂಧಿಸಿದ ದಾಖಲಾತಿಗಳು ಹಾಗೂ ವಾಹನ ಚಾಲನಾ ಪರವಾನಗಿಯನ್ನು ಕಡ್ಡಾಯವಾಗಿ ಜೊತೆಗಿಟ್ಟುಕೊಂಡಿರುವುದು ಸೂಕ್ತ ಎಂದು ಹೇಳಿದರು.
ವಿದ್ಯಾರ್ಥಿಗಳಿಗೆ ಕರೆ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾದ ಡಾ.ಟಿ.ಎಸ್. ಲಕ್ಷ್ಮೀಕಾಂತ್ ಮಾತನಾಡಿ, ನಮ್ಮಲ್ಲಿನ ಸಣ್ಣ- ಪುಟ್ಟ ತಪ್ಪುಗಳನ್ನು ತಿದ್ದಿಕೊಂಡು ತಾಳ್ಮೆ ಮತ್ತು ವಿವೇಕದಿಂದ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿದಲ್ಲಿ ಅಮೂಲ್ಯ ಜೀವಗಳ ರಕ್ಷಣೆ ಸಾಧ್ಯ ಎಂದ ಅವರು, ಅಪಘಾತ ಪ್ರಕರಣಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮೃತರಾಗುತ್ತಿರುವವರು ಯುವಕರು ಮತ್ತು ಮಧ್ಯಮ ವಯಸ್ಸಿನವರೇ ಹೆಚ್ಚಿದ್ದು, ಮದ್ಯಪಾನ ಮಾಡಿ ಯಾವುದೇ ಸಂದರ್ಭದಲ್ಲೂ ವಾಹನ ಚಲಾಯಿಸದಿರುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾಲೇಜಿನ ಪ್ರಥಮ ದರ್ಜೆ ಸಹಾಯಕರಾದ ಕೃಷ್ಣಾನಾಯಕ್ ಹಾಗೂ ಸ್ವಾಮಿ ವಿವೇಕಾನಂದ ಯುವ ವೇದಿಕೆಯ ಅಧ್ಯಕ್ಷ ರೆಹಮಾನ್ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ.ಎಂ.ಬಿ. ಇರ್ಷಾದ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಶಾಂತ, ವೇದಿಕೆಯ ಗೌರವಾಧ್ಯಕ್ಷ ಪ್ರದೀಪ್ ಕುಮಾರ್, ಎಚ್.ಸಿ.ಎನ್. ಚಂದ್ರು, ವಿವೇಕ ಜಾಗೃತ ಬಳಗದ ಅಧ್ಯಕ್ಷರಾದ ಕಮಲಾಕ್ಷ ಹಾಗೂ ಸದಸ್ಯರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

