ಹಾಸನ

ನಾನಾ ಬೇಡಿಕೆ ಈಡೇರಿಕೆಗೆ ಅಂಚೆ ನೌಕರರ ಪ್ರತಿಭಟನೆ

Published On :

ಹಾಸನ: ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಂಚೆ ನೌಕರರು ಬುಧವಾರ ಕಚೇರಿಯನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ನಗರದ ಮುಖ್ಯ ಕಚೇರಿಯ ಮುಂದೆ ಬೆಳಗ್ಗೆಯಿಂದ ಸಂಜೆವರೆಗೆ ಧರಣಿ ನಡೆಸಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.
ಗುತ್ತಿಗೆ ಆಧಾರದಲ್ಲಿ ತೆಗೆದುಕೊಂಡಿರುವಂತಹ ಗ್ರಾಮೀಣ ಅಂಚೆ ನೌಕರರನ್ನು ಖಾಯಂಗೊಳಿಸುವಂತೆ ಆಗ್ರಹಿಸಿದ ಪ್ರತಿಭಟನಾಕಾರರು, ಈ ಹಿಂದೆಯೂ ಹಲವು ಬಾರಿ ಪ್ರತಿಭಟನೆ ನಡೆಸಿದರೂ ಈವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಕ್ಕೆ ಬರುವ ಸರ್ಕಾರಗಳು ಕೇವಲ ಭರವಸೆಗಳನ್ನು ನೀಡುತ್ತವೆಯೇ ಹೊರತು ಅದನ್ನು ಕಾರ್ಯರೂಪಕ್ಕೆ ತರುತ್ತಿಲ್ಲ. ಇದರಿಂದ ನೌಕರರ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ಉದ್ಯೋಗದಲ್ಲಿ ಭದ್ರತೆ ಇಲ್ಲದಂತಾಗಿದೆ. ಈ ಬಗ್ಗೆ ಸರ್ಕಾರ ತಲೆಕೆಡಿಸಿಕೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಖಾಸಗೀಕರಣ ಬೇಡ: ಜೊತೆಗೆ ಅಂಚೆ ಇಲಾಖೆಯನ್ನು ಖಾಸಗೀಕರಣಕ್ಕೆ ಸರ್ಕಾರಗಳು ಮುಂದಾಗಿವೆ. ಇದರಿಂದ ಇಲಾಖೆ ಸಾಕಷ್ಟು ತೊಂದರೆಗೊಳಗಾಗಲಿದೆ. ಖಾಸಗೀಕರಣಕ್ಕೆ ಅಂಚೆ ಇಲಾಖೆಯನ್ನು ನೀಡುವುದರಿಂದ ಇಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಮತ್ತು ಕೆಲ ಖಾಯಂ ನೌಕರರ ಉದ್ಯೋಗಕ್ಕೆ ಕುತ್ತು ಬರಲಿದೆ. ಖಾಸಗೀಕರಣದಿಂದ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚಾಗಿರುವುದರಿಂದ ಯಾವುದೇ ಕಾರಣಕ್ಕೂ ಅಂಚೆ ಇಲಾಖೆಯನ್ನು ಖಾಸಗೀಕರಣ ಮಾಡಬಾರದು ಎಂದು ಒತ್ತಾಯಿಸಿದರು.
ಕೆಲಸಕ್ಕೆ ತಕ್ಕ ವೇತನವಿಲ್ಲ: 7ನೇ ವೇತನ ಆಯೋಗದ ವ್ಯಾಪ್ತಿಗೆ ಇಲಾಖಾ ನೌಕರರೊಂದಿಗೆ ಗ್ರಾಮೀಣ ಅಂಚೆ ನೌಕರರನ್ನು ಸೇರಿಸಬೇಕು ಎಂದು ಹಲವು ಬಾರಿ ಒತ್ತಾಯಿಸಿದ್ದರು. ಈ ಬಗ್ಗೆ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ. ನೌಕರರ ತಾವು ಮಾಡುವಂತಹ ಕೆಲಸಕ್ಕೆ ತಕ್ಕದಾದ ವೇತನ ಲಭ್ಯವಾಗದ ಕಾರಣ ಸಂಕಷ್ಟಕ್ಕೆ ಈಡಾಗಿದ್ದಾರೆ. ಕೆಲಸಕ್ಕೆ ತಕ್ಕಂತೆ ವೇತನ ಸಿಗದ ಕಾರಣ ನೌಕರರ ಕುಟುಂಬಗಳು ಜೀವನ ನಿರ್ವಹಣೆಗೆ ಸಾಧ್ಯವಾಗುತ್ತಿಲ್ಲ ಎಂದು ಅಲವತ್ತುಕೊಂಡರು.
ದೂರು: ಗ್ರಾಮೀಣ ಅಂಚೆ ನೌಕರರು ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಿದ್ದರೂ ಸಹ ಸರ್ಕಾರ ಇವರತ್ತ ಗಮನ ಹರಿಸಿಲ್ಲ. ಶೇ.10 ಡಿಎ ಮೂಲ ವೇತನದೊಂದಿಗೆ ಇಲಾಖೆ ನೌಕರರೊಂದಿಗೆ ಗ್ರಾಮೀಣ ನೌಕರರಿಗೂ ವೀಲಿನಗೊಳಿಸುವಂತೆ ಒತ್ತಾಯವಿದ್ದರೂ ಸಹ ಈ ಬಗ್ಗೆ ಕ್ರಮಗಳು ನಡೆದಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.
ಎಚ್ಚರಿಕೆ: ಕೂಡಲೇ ಸರ್ಕಾರ ನೌಕರರ ಬೇಡಿಕೆಗಳನ್ನು ಈಡೇರಿಸುತ್ತಿದ್ದರೆ ಈ ವಿರುದ್ಧ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಎಐಪಿಇಯ ತಾರಾನಾಥ್, ಎನ್‌ಯುಪಿಇ ಉಮೇಶ್, ಬಿಡಿಇಯು ನ ನಾಗೇಶ್, ಜಿಡಿಎಸ್‌ಎನ್‌ಎಫ್‌ಇ ಪುರುಷೋತ್ತಮ್, ಕುಮಾರ್, ವೇಣುಗೋಪಾಲ್, ಎಚ್.ಕೆ. ಸತ್ಯನ್, ಕಲ್ಲೇಶ್, ಯಾಸ್ಮಿನ್ ತಾಜ್ ಹಾಗೂ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.