ಪೌರ ಕಾರ್ಮಿಕರ ಅನಿರ್ದಿಷ್ಟ ಧರಣಿ
ಹಾಸನ: ತಮ್ಮ ನಾನಾ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಪೌರ ಕಾರ್ಮಿಕರು ಸಿಐಟಿಯು ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಪ್ರಾರಂಭಿಸಿದರು.
ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟ ಕಾರ್ಮಿಕರು ಎನ್.ಆರ್. ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬಂದು ಧರಣಿ ಆರಂಭಿಸಿದರು. ಗುತ್ತಿಗೆ ಕಾರ್ಮಿಕ ಪದ್ಧತಿ ರದ್ದುಗೊಳಿಸಿ, ಗುತ್ತಿಗೆ ಕಾರ್ಮಿಕರನ್ನು ಕಾಯಂಗೊಳಿಸಸಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಂತೆ ಹಾಗೂ ರಾಜ್ಯ ಬಜೆಟ್ನಲ್ಲಿ ಅದಕ್ಕೆ ಹಣ ಮೀಸಲಿರುಸುವಂತೆ ಆಗ್ರಹಿಸಿದರು.
ಹಕ್ಕುಗಳ ರಕ್ಷಣೆಗಾಗಿ ಹೋರಾಟ: ಇದೇ ಸಂದರ್ಭದಲ್ಲಿ ಕಾರ್ಮಿಕರು ಮುಖಂಡರು ಮಾತನಾಡಿ, ರಾಜ್ಯದ ಎಲ್ಲಾ ನಗರ ಪಾಲಿಕೆ, ನಗರ ಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್ಗಳಲ್ಲಿ ಕಳೆದ 10-15 ವರ್ಷಗಳಿಂದ ಸಾವಿರಾರು ಜನರು ನೈರ್ಮಲ್ಯ, ಸ್ವಚ್ಛ, ಲೋಡರ್, ಯುಜಿಡಿ ಕಾರ್ಮಿಕರು, ವಾಟರ್ ಮ್ಯಾನ್, ಡ್ರೈವರ್, ಎಲೆಕ್ಟ್ರಿಷಿಯನ್ ಕಚೇರಿ ಸಹಾಯಕರಾಗಿ, ಕಂಪ್ಯೂಟರ್ ಆಪರೇಟರ್ಗಳಾಗಿ ದಿನಗೂಲಿ, ಗುತ್ತಿಗೆ ಹಾಗೂ ಹೊರಗುತ್ತಿಗೆ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ಈ ಕಾರ್ಮಿಕರಿಲ್ಲದೆ ನಗರ ಸ್ಥಳೀಯ ಸಂಸ್ಥೆಗಳ ಕೆಲಸಗಳು ನಡೆಯುವುದಿಲ್ಲ. ಆದರೆ ಈ ಕಾರ್ಮಿಕರಿಗೆ ಉದ್ಯೋಗ ಭದ್ರತೆಯಿಲ್ಲದೆ, ಕಾರ್ಮಿಕ ಕಾನೂನುಗಳ ಪ್ರಯೋಜನವಿಲ್ಲದೆ. ಸಾಮಾಜಿಕ ಭದ್ರತೆಗಳಿಲ್ಲದೆ ಅತೀವ ಸಂಕಷ್ಟಮಯ ಜೀವನ ನಡೆಸುತ್ತಿದ್ದಾರೆ. ಇಂತಹ ಕಾರ್ಮಿಕರನ್ನು ಸಿಐಟಿಯು ನೇತೃತ್ವದಲ್ಲಿ ರಾಜ್ಯಾದ್ಯಂತ ಸಂಘಟಿಸಿ ಅವರ ಹಕ್ಕುಗಳ ರಕ್ಷಣೆಗಾಗಿ ಸಂಘಟಿತ ಹೋರಾಟ ನಡೆಸಲಾಗುತ್ತಿದೆ ಎಂದು ಹೇಳಿದರು.
ಆಕ್ರೋಶ: ಇದುವರೆವಿಗೂ ಇಂತಹ ಕಾರ್ಮಿಕರ ಕಲ್ಯಾಣಕ್ಕಾಗಲೀ, ಸಾಮಾಜಿಕ ಭದ್ರತೆಗಾಗಲೀ ಸರ್ಕಾರ ಯಾವುದೇ ಕಾರ್ಯಕ್ರಮ ಹಾಕಿಕೊಂಡಿಲ್ಲ. ನಾಗರಿಕ ಸಮಾಜದಲ್ಲಿ ಅತ್ಯಂತ ಕೆಳಹಂತದ ಕೆಲಸ ಮಾಡಿ ನಾಗರಿಕ ಸೇವೆ ಸಲ್ಲಿಸಿ, ಅತಿ ಕನಿಷ್ಟ ಮಟ್ಟದ ಜೀವನ ಸಾಗಿಸುತ್ತಿರುವ ಇವರ ಬಗ್ಗೆ ಸರ್ಕಾರಕ್ಕೆ ಕಾಳಜಿಯಿಲ್ಲ. ದಲಿತ ಹಾಗೂ ಹಿಂದುಳಿದ ಜಾತಿಗಳಿಗೆ ಸೇರಿರುವ ಇವರ ಏಳಿಗೆಗೆ ಸರ್ಕಾರ ಗಮನ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್, ಖಜಾಂಚಿ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಪ್ರಕಾಶ್, ಅರವಿಂದ್ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

