4ನೇ ದಿನಕ್ಕೆ ರೈತರ ಪ್ರತಿಭಟನೆ
ಕ.ಪ್ರ. ವಾರ್ತೆ ಅರಸೀಕೆರೆ ಫೆ 20
ತೀವ್ರ ಬರಗಾಲದಿಂದ ತತ್ತರಿಸಿರುವ ತಾಲೂಕಿನ ಕೆರೆಗಳಿಗೆ ನೀರು ಪೂರೈಕೆ ಸೇರಿ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಾಲೂಕು ರೈತ ಸಂಘ ಹಾಗೂ ಹಸಿರುಸೇನೆ ತಾಲೂಕು ಕಚೇರಿ ಆವರಣದಲ್ಲಿ ನಡೆಸುತ್ತಿರುವ ಆಹೋರಾತ್ರಿ ಧರಣಿ ಸತ್ಯಾಗ್ರಹ ಗುರುವಾರ 4ನೇ ದಿನಕ್ಕೆ ಕಾಲಿಟ್ಟಿದೆ.
ಪಟ್ಟಣದ ಆಟೋ ಚಾಲಕರ ಸಂಘದ ನೂರಾರು ಆಟೋ ಚಾಲಕರು ಹಾಗೂ ಮಾಲೀಕರು ಪ್ರತಿಭಟನಾ ಮೆರವಣಿಗೆ ನಡೆಸಿ ಧರಣಿಯಲ್ಲಿ ಪಾಲ್ಗೊಂಡು ರೈತರ ಹೋರಾಟಕ್ಕೆ ತಮ್ಮ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು.
ಪಟ್ಟಣದ ಪ್ರವಾಸಿ ಮಂದಿರದಿಂದ ರಾಷ್ಟ್ರೀಯ ಹೆದ್ದಾರಿಯ ಮೂಲಕ ಪ್ರತಿಭಟನಾ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಾಲೂಕು ಕಚೇರಿಗೆ ತೆರಳಿ ಧರಣಿ ನಡೆಸಿದ ಆಟೋ ಚಾಲಕರು ರೈತರ ಹೋರಾಟ ನ್ಯಾಯಪರವಾಗಿದ್ದು ಇದಕ್ಕೆ ಸರ್ಕಾರ ತಕ್ಷಣ ಸ್ಪಂದಿಸಬೇಕೆಂದು ಆಗ್ರಹಿಸಿದರು.
ಧರಣಿ ನಿರತರನ್ನು ಉದ್ದೇಶಿಸಿ ಮಾತನಾಡಿದ ಆಟೋ ಚಾಲಕರ ಸಂಘದ ಅಧ್ಯಕ್ಷ ಸಂಗಣ್ಣ, ರೈತರು ಆರ್ಥಿಕವಾಗಿ ಸಮೃದ್ಧವಾಗಿದ್ದರೆ ನಾಡು ಸಮೃದ್ಧವಾಗಿರುತ್ತದೆ. ನಾಡಿಗೆ ಬೆಳೆ ಬೆಳೆದು ಅನ್ನ ನೀಡುವ ರೈತ ಮಳೆಯ ಅಭಾವದಿಂದ ಕೆರೆ ಕಟ್ಟೆಗಳು ಬರಿದಾಗಿ ಬೆಳೆ ಕಳೆದುಕೊಂಡು ತೆಂಗಿನ ಮರಗಳು ನಾಶವಾಗಿ ಜನ ಜಾನುವಾರುಗಳಿಗೆ ಕುಡಿಯಲು ನೀರಿಲ್ಲದಂತಹ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿರುವ ಸಂದರ್ಭದಲ್ಲಿ ಸರ್ಕಾರ ಗಮನ ಹರಿಸಿ ರೈತರ ನೆರವಿಗೆ ಧಾವಿಸಬೇಕೆಂದು ಆಗ್ರಹಿಸಿದರು.
ರೈತರ ನ್ಯಾಯಯುತ ಹೋರಾಟಕ್ಕೆ ಸರ್ಕಾರ ಇದುವರೆಗೂ ಸ್ಪಂದಿಸದಿರುವುದು ಅಧಿಕಾರದ ಅಹಂ ಪ್ರದರ್ಶಿಸುವಂತಿದೆ. ಅಂತರ್ಜಲ ಕುಸಿತದಿಂದ ಕೊಳವೆ ಬಾವಿಗಳು ಸಂಪೂರ್ಣ ಬರಿದಾಗಿದ್ದು ಜನ ಜಾನುವಾರುಗಳು, ಹಕ್ಕಿ ಪಕ್ಷಿಗಳು ಕುಡಿಯಲು ನೀರು ದೊರೆಯದಂತಹ ಸ್ಥಿತಿ ನಿರ್ಮಾಣಗೊಂಡಿದೆ. ಇನ್ನಾದರೂ ರಾಜಕಾರಣಿಗಳು ಪಕ್ಷ ರಾಜಕಾರಣವನ್ನು ಮರೆತು ಜನರ ಜೀವ ಉಳಿಸಲು ತಾಲೂಕಿನ ಕೆರೆ ಕೆರೆಗಳಿಗೆ ನೀರು ಹರಿಸಲು ಮುಂದಾಗಬೇಕೆಂದು ಆಗ್ರಹಿಸಿದ ಅವರು 22 ಶನಿವಾರ ಕರೆ ನೀಡಿರುವ ಅರಸೀಕೆರೆ ಬಂದ್ಗೆ ಸಂಪೂರ್ಣ ಬೆಂಬಲವಿದೆ ಎಂದು ಘೋಷಿಸಿದರು.
ರೈತ ಸಂಘದ ಉಪಾಧ್ಯಕ್ಷ ಚಿಕ್ಕೂರು ಗಂಗಾಧರಮೂರ್ತಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಜನರಿಗೆ ಕುಡಿಯಲು ನೀರು ಸಿಗದಿದ್ದರೂ ಪ್ರತಿ ಹಳ್ಳಿಗೆ ನಾಲ್ಕೈದು ಅಕ್ರಮ ಮದ್ಯದ ಅಂಗಡಿಗಳನ್ನು ತೆರೆಯುವ ಮೂಲಕ ಜನರ ಸಮಸ್ಯೆ ಪರಿಹರಿಸಬೇಕಾದ ಸರ್ಕಾರ ಜನರನ್ನು ದಿವಾಳಿ ಮಾಡಲು ಹೊರಟಿದೆ. ಅಬಕಾರಿ ಇಲಾಖೆಯ ಅಧಿಕಾರಿಗಳೊಂದಿಗೆ ಪೊಲೀಸರು ಕೈ ಜೋಡಿಸಿದ್ದಾರೆ. ಆದ್ದರಿಂದಲೇ ಪ್ರತಿ ಹಳ್ಳಿಗಳಲ್ಲಿಯೂ ಮೂರ್ನಾಲ್ಕು ಅಕ್ರಮ ಮದ್ಯದಂಗಡಿಗಳು ಆರಂಭವಾಗಿವೆ. ನೀರು ಕೊಡಿ ಎಂದು ಕೇಳಿದರೆ ಮದ್ಯ ಕೊಡಲು ಹೊರಟಿದ್ದಾರೆ ಎಂದು ಲೇವಡಿ ಮಾಡಿದರು.
ಸಂಬಂಧಿಸಿದ ಅಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರು, ಇತ್ತ ಧಾವಿಸುವವರೆಗೂ ಪ್ರತಿಭಟನೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಶುಕ್ರವಾರದಿಂದ ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದು ಶನಿವಾರ ಅರಸೀಕೆರೆ ಬಂದ್ಗೆ ಕರೆ ನೀಡಲಾಗುವುದೆಂದು ಎಚ್ಚರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

