ಸಾರಿಗೆ ಸಂಸ್ಥೆ ವಿರುದ್ಧ ಬೀದಿಗಿಳಿದ ವಿದ್ಯಾರ್ಥಿಗಳು
ಹಾಸನ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕೆಲ ಸಿಬ್ಬಂದಿಗಳ ವರ್ತನೆಯನ್ನು ಖಂಡಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ನ ನೇತೃತ್ವದಲ್ಲಿ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರು ನಗರದ ಸಾರಿಗೆ ಸಂಸ್ಥೆಯ ವಿಭಾಗೀಯ ನಿರ್ಯತ್ರಣಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ವಿಭಾಗೀಯ ಸಂಚಾಲಕ ಶ್ರೀನಿವಾಸ್ ಅವರಿಗೆ ಮನವಿ ನೀಡಿದರು.
ತಾಲೂಕಿನ ಪುರದಮ್ಮ- ಯಲಗುಂದ- ಹಾಸನ ಮಾರ್ಗವಾಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಂಚರಿಸುತ್ತಿದ್ದು, ಈ ಮಾರ್ಗದಲ್ಲಿ ಪ್ರತಿನಿತ್ಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಸ್‌ಗಳನ್ನು ಅವಲಂಬಿಸಿದ್ದಾರೆ. ವಿದ್ಯಾರ್ಥಿಗಳು ಪ್ರತಿನಿತ್ಯ ಶಾಲಾ-ಕಾಲೇಜಿಗೆ ತೆರಳುವುದರಿಂದ ವಿದ್ಯಾರ್ಥಿಗಳು ಹೆಚ್ಚಿದ್ದಾರೆ. ಆದರೆ ಈ ಮಾರ್ಗದಲ್ಲಿ ಸಂಚರಿಸುವಂತಹ ಬಸ್‌ಗಳ ಚಾಲಕರು ಮತ್ತು ನಿರ್ವಾಹಕರು ವಿದ್ಯಾರ್ಥಿಗಳೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳಿಗೆ ತೊಂದರೆ: ವಿದ್ಯಾರ್ಥಿಗಳು ಶಾಲಾ- ಕಾಲೇಜುಗಳಿಗೆ ತೆರಳಲು ಬಸ್‌ಗಳನ್ನೇ ಅವಲಂಬಿಸಿರುವುದರಿಂದ ಬಸ್‌ನಿಲ್ಲಿಸುವಂತೆ ಕೈ ತೋರಿದರೆ ಚಾಲಕರು ಮನಸೋ ಇಚ್ಛೆ ವರ್ತಿಸುತ್ತಿದ್ದಾರೆ. ವಿದ್ಯಾರ್ಥಿಗಳು ಬಸ್ ಪಾಸ್‌ಗಳನ್ನು ಹೊಂದಿರುವುದರಿಂದ ಬಸ್‌ಗೆ ಹಣ ನೀಡಲ್ಲ ಎಂಬ ಕಾರಣಕ್ಕೆ ಚಾಲಕರು ಮತ್ತು ನಿರ್ವಾಹಕರು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಾರೆ. ಬಸ್‌ಗಳು ಖಾಲಿ ಇದ್ದರೂ ಬಸ್‌ಗಳನ್ನು ಸರಿಯಾಗಿ ನಿಲ್ಲಿಸದೇ ವಿದ್ಯಾರ್ಥಿಗಳಿಗೆ ತೊಂದರೆ ಉಂಟು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ವಿದ್ಯಾರ್ಥಿಗಳ ಬಗ್ಗೆ ಅಸಡ್ಡೆ: ಅಷ್ಟೇ ಅಲ್ಲದೆ ವಿದ್ಯಾರ್ಥಿಗಳು ಬಸ್ ನಿಲ್ದಾಣದಲ್ಲಿ ನಿಂತಿರುವುದನ್ನು ನೋಡಿದ ತಕ್ಷಣವೇ ಬಸ್‌ನ ಚಾಲಕರು ಬಸ್ ಅನ್ನು ದೂರದಲ್ಲಿ ನಿಲ್ಲಿಸಿ ಹೋಗಿಬಿಡುತ್ತಾರೆ.
ಶಾಲಾ-ಕಾಲೇಜುಗಳ ಸಮಯ ಆಗಿದ್ದರೂ ಬಸ್‌ಗಳನ್ನು ನಿಲ್ಲಿಸುವುದಿಲ್ಲ.
ಜೊತೆಗೆ ಬಸ್‌ಗಳು ಪ್ರಾಯಾಣಿಕರು ಇಲ್ಲದೆ ಖಾಲಿ ಇದ್ದರು ಸಹ ನಿರ್ವಾಕರು ಹಾಗೂ ಚಾಲಕರು ಇಬ್ಬರು ವಿದ್ಯಾರ್ಥಿಗಳನ್ನು ಬಸ್‌ಗೆ ಹತ್ತಿಸಿಕೊಳ್ಳಲು ಬಾಯಿಗೆ ಬಂದಂತೆ ಹರಡುತ್ತಾರೆ.
ವಿದ್ಯಾರ್ಥಿಗಳೆಂದರೆ ಸಿಬ್ಬಂದಿಗಳು ಅಸಡ್ಡಿ ರೀತಿಯಲ್ಲಿ ಕಾಣುತ್ತಿದ್ದಾರೆ ಎಂದು ದೂರಿದರು.
ವಿದ್ಯಾರ್ಥಿಗಳಿಗೆ ನಿಂದನೆ: ಯಲಗುಂದ ಮಾರ್ಗದಲ್ಲಿ ಶುಕ್ರವಾರ ಬೆಳಗ್ಗೆ ಹಾಸನದ ಎನ್‌ಡಿಆರ್‌ಕೆ ಮತ್ತು ಐಟಿಐ ವಿದ್ಯಾರ್ಥಿಗಳು ಬಸ್‌ಗಾಗಿ ಕಾದು ನಿಂತಿದ್ದಾಗ ಈ ಮಾರ್ಗವಾಗಿ ಬಂದಂತಹ ಬಸ್‌ನ ಚಾಲಕ ಮಹೇಶ್ ಮತ್ತು ನಿರ್ವಾಹಕ ಮೋಹನ್, ವಿದ್ಯಾರ್ಥಿಗಳನ್ನು ಬಸ್‌ಗೆ ಹತ್ತಿಸಿಕೊಳ್ಳಲು ಬಾಯಿಗೆ ಬಂದಂತೆ ಮಾತನಾಡಿದ್ದಾರೆ. ಬಸ್ ಖಾಲಿ ಇದ್ದರೂ ಬಸ್ ಹತ್ತಲು ಮುಂದಾದ ಸಂದರ್ಭದಲ್ಲಿ, ಸಾರಿಗೆ ಸಂಸ್ಥೆ ಸಿಬ್ಬಂದಿಗಳು ಅವಾಚ್ಯ ಶಬ್ದಗಳಿಂದ ವಿದ್ಯಾರ್ಥಿಗಳನ್ನು ನಿಂದಿಸಿದ್ದಾರೆ ಎಂದು ಅವರು ಕಿಡಿಕಾರಿದರು.
ಈ ಮಾರ್ಗದಲ್ಲಿ ಬಸ್‌ಗಳ ಸಂಖ್ಯೆ ಕಡಿಮೆ ಇದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬೆಳಗಿನ ವೇಳೆಯಲ್ಲಿ ಶಾಲಾ-ಕಾಲೇಜಿಗೆ ಹೋಗುವ ಸಮಯಕ್ಕೆ ಹೆಚ್ಚಿನ ಬಸ್‌ಗಳನ್ನು ಈ ಮಾರ್ಗದಲ್ಲಿ ಸಂಚರಿಸುವಂತೆ ಮಾಡಬೇಕು ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದರು.
ಕ್ರಮ ಕೈಗೊಳ್ಳುವುದಾಗಿ ಭರವಸೆ
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ಸಂಚಾಲಕ ಶ್ರೀನಿವಾಸ್ ಅವರು ಪ್ರತಿಭಟನಾ ಸ್ಥಳಕ್ಕೆ ಬಂದು ವಿದ್ಯಾರ್ಥಿಗಳಿಂದ ಮನವಿಯನ್ನು ಸ್ವೀಕರಿಸಿ ತನಿಖೆ ನಡೆಸಿ ಚಾಲಕ ಹಾಗೂ ನಿರ್ವಾಹಕರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು. ನಂತರ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ವಾಪಸ್ ಪಡೆದರು. ಪ್ರತಿಭಟನೆಯಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ನ್ ಮಹದೇವ್, ತಿಲಕ್, ಬಿಂದು, ವಿದ್ಯಾರ್ಥಿಗಳಾದ ಆನಂದ್, ಚೇತನ್ ಕುಮಾರ್, ಶರತ್, ಮಂಜುನಾಥ್, ನವೀನ್, ಸಾಗರ್, ಕುಮಾರ್, ಪ್ರವೀಣ್, ಮನೋಜ್ ಕುಮಾರ್, ಶ್ರೀಧರ್ ಹಾಗೂ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

