ವಿದ್ಯುತ್ ಇಲಾಖೆ ನಿರ್ಲಕ್ಷ್ಯಕ್ಕೆ ರೈತ ಬಲಿ
ಬೇಲೂರು: ವಿದ್ಯುತ್ ಇಲಾಖೆಯ ನಿರ್ಲಕ್ಷ್ಯದಿಂದ ರೈತನೋರ್ವ ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದ್ದು, ಇದರಿಂದ ಆಕ್ರೋಶಗೊಂಡ ಜನರು ವಿದ್ಯುತ್ ಇಲಾಖೆ ಮುಂದೆ ಶವವಿಟ್ಟು ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ಸಂಜೆ ನಡೆದಿದೆ.
ತಾಲೂಕಿನ ಅರೇಹಳ್ಳಿ ಹೋಬಳಿಯ ಮಲಸಾವರಗ್ರಾಮದ ವ್ಯಾಪ್ತಿಯ ಗುರಗೆಹಳ್ಳಿಯಲ್ಲಿ ಗದ್ದೆಗೆ ಶುಂಠಿ ಹಾಕಿದ್ದ ಜುಲ್ಫಿಕರ್ ಆಲಿ (42) ಎಂಬವರೇ ಸಾವನ್ನಪ್ಪಿದ ದುರ್ದೈವಿ. ಜುಲ್ಫಿಕರ್ ಅಲಿ ಶುಂಠಿಯನ್ನು ಹದ ಮಾಡಲು ಹೋದ ಸಂದರ್ಭದಲ್ಲಿ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಗದ್ದೆಯ ಸುತ್ತಮುತ್ತ ವಿದ್ಯುತ್ ತಂತಿ ನೇತಾಡುತ್ತಿದ್ದು, ಇದನ್ನು ಸರಿಪಡಿಸುವಂತೆ ವಿದ್ಯುತ್ ಇಲಾಖೆಯವರಿಗೆ ತಿಳಿಸಿದ್ದರೂ, ಸರಿಪಡಿಸದ ಕಾರಣ ಈ ಸಾವಿಗೆ ವಿದ್ಯುತ್ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಮೃತನ ಕುಟುಂಬದವರು ಹಾಗೂ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ಅಧಿಕಾರಿಗಳೇ ಹೊಣೆ: ಅರೇಹಳ್ಳಿ ವಿದ್ಯುತ್ ಕಚೇರಿಯ ಅಧಿಕಾರಿಗಳು ಇಲ್ಲಿ ವಿದ್ಯುತ್ ತಂತಿ ತುಂಡಾಗಿರುವ ಬಗ್ಗೆ ಸುಮಾರು 6 ತಿಂಗಳ ಹಿಂದೆಯೇ ತಿಳಿಸಲಾಗಿತ್ತು. ಕೂಡಲೇ ತುಂಡಾಗಿರುವ ತಂತಿಯನ್ನು ಸರಿಪಡಿಸುವಂತೆ ಮನವಿ ಮಾಡಿದರೂ ಅಧಿಕಾರಿಗಳು ಇದರತ್ತ ಗಮನ ಹರಿಸದೆ ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ. ಅಧಿಕಾರಿಗಳ ಬೇಜವಾಬ್ದಾರಿಯಿಂದ ಜುಲ್ಫಿಕರ್ ಅಲಿ ಅವರು ಮೃತಪಟ್ಟಿದ್ದಾರೆ. ಇದಕ್ಕೆ ವಿದ್ಯುತ್ ಇಲಾಖೆ ಅಧಿಕಾರಿಗಳು ನೇರ ಹೊಣೆ ಎಂದು ಕಿಡಿಕಾರಿದರು.
ಇನ್ನಾದರೂ ಕ್ರಮಕೈಗೊಳ್ಳಿ: ಇದೇ ರೀತಿ ಗ್ರಾಮದ ಸುತ್ತುಮುತ್ತ ವಿದ್ಯುತ್ ತಂತಿಗಳು ಕೆಳಮಟ್ಟದಲ್ಲಿ ಇದ್ದು, ಇದರಿಂದ ಎತ್ತರವಾದ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ.
ವಿದ್ಯುತ್ ತಂತಿಗಳನ್ನು ಮೇಲಕ್ಕೆ ಏರಿಸುವಂತೆ ತಿಳಿಸಲಾಗಿದೆ. ಆದರೂ ಅಧಿಕಾರಿಗಳು ಸಾರ್ವಜನಿಕ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಇನ್ನಾದರೂ ಅಧಿಕಾರಿಗಳು ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಇನ್ನೂ ಹೆಚ್ಚಿನ ಅನಾಹುತಗಳು ಸಂಭವಿಸಲಿವೆ ಎಂದು ದೂರಿದರು.
ಪಟ್ಟು: ಕೂಡಲೇ ವಿದ್ಯುತ್ ಇಲಾಖೆಯವರು ಬಂದು ಪರಿಹಾರ ಒದಗಿಸಬೇಕು. ಅಲ್ಲಿಯವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪ್ರತಿಭಟನಕಾರರು ಪಟ್ಟು ಹಿಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

