ಹಾಸನ

ಮತದಾನ ಪ್ರತಿಯೊಬ್ಬರ ಕರ್ತವ್ಯ: ನ್ಯಾ. ಸರಸ್ವತಿ ಕೊಸಂದರ್

Published On :

ಅರಸೀಕೆರೆ: ಮತದಾನ ಪ್ರತಿಯೊಬ್ಬ ಪ್ರಜೆಯ ಪ್ರಮುಖ ಕರ್ತವ್ಯವಾಗಿದ್ದು ಅದನ್ನು ಚಲಾಯಿಸುವ ಮೂಲಕ ದೇಶದ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಬೇಕೆಂದು ಜೆಎಂಎಫ್ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶೆ ಸರಸ್ವತಿ ವಿ. ಕೊಸಂದರ್ ತಿಳಿಸಿದರು.
ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಏರ್ಪಡಿಸಲಾಗಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮತದಾನ ಕಡ್ಡಾಯ ಮಾಡದಿರುವುದರಿಂದ ಅನೇಕರು ಮತದಾನದಿಂದ ಹಿಂದೆ ಉಳಿಯುತ್ತಿರುವುದು ವಿಷಾದನೀಯ. ಪ್ರಜಾಪ್ರಭುತ್ವದಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪ್ರಜೆಗಳಾಗಿ ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳನ್ನು ಎತ್ತಿ ಹಿಡಿಯಲು ನಿರ್ಭೀತರಾಗಿ ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರಣೆಗಳ ದಾಕ್ಷಿಣ್ಯದಿಂದ ಪ್ರಭಾವಿತರಾಗದೆ, ಯಾವುದೇ ಆಮಿಷಕ್ಕೆ ಒಳಗಾಗದೆ ಹಕ್ಕನ್ನು ಚಲಾಯಿಸಬೇಕು ಎಂದರು.
ಕೋಡಿಮಠ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಎಚ್.ಎನ್.ಮಲ್ಲಿಕಾರ್ಜುನ ಸ್ವಾಮಿ ಮಾತನಾಡಿ, ಮತದಾರರಿಗೆ ಆಸೆ ಆಮಿಷಗಳನ್ನು ಒಡ್ಡುವ ರಾಜಕಾರಣಿಗಳನ್ನು ತಡೆಯುವುದು ಸಾಧ್ಯವಿಲ್ಲವಾದರೂ ಮತದಾರರಲ್ಲಿ ಆತ್ಮಗೌರವ, ಸಮಯಪ್ರಜ್ಞೆ ಮೂಡಿಸುವ ಮೂಲಕ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಂತೆ ಜಾಗೃತಿ ಮೂಡಿಸಬಹುದೆಂದರು. ತಹಸೀಲ್ದಾರ್ ಕೇಶವಮೂರ್ತಿ ಮಾತನಾಡಿ, 18 ವರ್ಷ ತುಂಬಿದ ಯುವ ಜನತೆಯನ್ನು ಮತದಾರರ ಪಟ್ಟಿಗೆ ಸೇರಿಸಿಕೊಳ್ಳುವ ಆಂದೋಲನದೊಂದಿಗೆ ಪ್ರಥಮ ದರ್ಜೆ ಕಾಲೇಜುಗಳಿಗೆ ಭೇಟಿ ನೀಡಿ ಮತದಾರರ ಪಟ್ಟಿಗೆ ಸೇರದೇ ಇರುವ ಬಾಲಕ-ಬಾಲಕಿಯರನ್ನು ಸೇರ್ಪಡೆ ಮಾಡಲು ಅಲ್ಲಿನ ಪ್ರಾಧ್ಯಾಪಕರ ಸಹಕಾರದಿಂದ 3.16 ಲಕ್ಷ ಜನಸಂಖ್ಯೆಯ ಈ ತಾಲೂಕಿನಲ್ಲಿ 2 ಲಕ್ಷಕ್ಕೂ ಹೆಚ್ಚು ಜನರನ್ನು ಮತದಾನದ ಪಟ್ಟಿಗೆ ಸೇರಿಸಲಾಗಿದೆ. ಇದು ಎಲ್ಲರ ಸಹಕಾರದಿಂದ ಸಾಧ್ಯವಾಗಿದೆ ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜ್ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು. ತಾಪಂ ಇಓ ಟಿ.ಎನ್.ಮೂರ್ತಿ ಇನ್ನಿತರ ಅಧಿಕಾರಿಗಳು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.