ಹಾಸನ

ಅತಿಥಿ ಉಪನ್ಯಾಸಕರ ಬಂಧನ ಖಂಡಿಸಿ ಎಸ್‌ಎಫ್‌ಐ ಪ್ರತಿಭಟನೆ

Published On :

ಕ.ಪ್ರ. ವಾರ್ತೆ  ಹಾಸನ  ಜ. 31
ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗಾಗಿ ಮತ್ತು ಪದವಿ ಕಾಲೇಜುಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರು ನಗರದ ಸರ್ಕಾರಿ ಕಲಾ ಕಾಲೇಜಿನ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಅತಿಥಿ ಉಪನ್ಯಾಸಕರ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪ್ರತಿಭಟನಾ ನಿರತ 1 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು, ಎಸ್‌ಎಫ್‌ಐ, ಡಿವೈಎಫ್‌ಐ ಮುಖಂಡರನ್ನು ಬಂಧಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡನೀಯವಾಗಿದೆ ಎಂದರು.
ಆಕ್ರೋಶ: ರಾಜ್ಯ ಸರ್ಕಾರದ 350 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 4 ಲಕ್ಷ ಬಡ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ನೆರವಾಗುತ್ತಿರುವ 10,650 ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ರಾಜ್ಯಸರ್ಕಾರ ಕಡೆಗಣಿಸಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಬಗೆಹರಿಸುವುದಾಗಿ ನೀಡಿದ್ದ ಭರವಸೆ ಹುಸಿಯಾಗಿದೆ. ಪ್ರಸಕ್ತ ಶೈಕ್ಷಣಿಕ ವರ್ಷ ಮುಗಿಯುವ ಹಂತದಲ್ಲಿ ಇದ್ದರೂ ಬೇಡಿಕೆಗಳನ್ನು ಈಡೇರಿಸುವ ಬದಲಿಗೆ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಈಗಿರುವ ಎಲ್ಲಾ ಅತಿಥಿ ಉಪನ್ಯಾಸಕರನ್ನು ಕೈ ಬಿಡುವ ಹುನ್ನಾರ ನಡೆಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಡ ವಿದ್ಯಾರ್ಥಿಗಳ ಪರ ಹೋರಾಟ: 10-15 ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದವರು ಈಗ ಬೀದಿಗೆ ಬೀಳುವಂತಾಗಿದ್ದು, ಹೀಗಾಗಿ ಅನ್ಯ ಮಾರ್ಗವಿಲ್ಲದೆ ಹೋರಾಟ ಮಾಡುವಂತಾಗಿದೆ. ನಾಡಿನ ಚಿಂತಕರು ವಿದ್ಯಾರ್ಥಿ, ಪೋಷಕರು ಕೂಡ ಅತಿಥಿ ಉಪನ್ಯಾಸಕರ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ  ಹೋರಾಟ ಕೇವಲ ಅತಿಥಿ ಉಪನ್ಯಾಸಕರ ವೇತನ ಅಥವಾ ಉದ್ಯೋಗ ಭತ್ರತೆಗೆ ಮಾತ್ರ ಸೀಮಿತವಾದದ್ದಲ್ಲ. ಬದಲಿಗೆ ಉನ್ನತ ಶಿಕ್ಷಣವನ್ನು ಸಾಮಾನ್ಯ ಬಡ ವಿದ್ಯಾರ್ಥಿಗಳಿಗೆ ಉಳಿಸುವ ಹೋರಾಟವಾಗಿದೆ ಎಂದರು.
ಒತ್ತಾಯ: ಅತಿಥಿ ಉಪನ್ಯಾಸಕರ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಮುಷ್ಕರ ನಡೆಸುತ್ತಿದ್ದು, ಇದರಿಂದಾಗಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪಾಠ ಪ್ರವಚನಗಳಿಗೆ ತೀವ್ರ ತೊಂದರೆಯಾಗಿದೆ, ಆದ್ದರಿಂದ ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಕೂಡಲೇ ಈಡೇರಿಸುವುದರ ಜೊತೆಗೆ ಅವರುಗಳ ಸೇವೆಯನ್ನು ಕಾಯಂಗೊಳಿಸುವಂತೆ ಒತ್ತಾಯಿಸಿದರು.
ಎಚ್ಚರಿಕೆ: ಪ್ರಸ್ತುತ ಕಾಲೇಜಿನಲ್ಲಿ ಖಾಯಂ ಉಪನ್ಯಾಸಕರುಗಳಿಗಿಂತ ಅತಿಥಿ ಉಪನ್ಯಾಸಕರುಗಳೇ ಅಧಿಕವಾಗಿರುವುದರಿಂದ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆ ಉಂಟಾಗಿದೆ.  ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಯನ್ನು ಪರಿಗಣಿಸಿ ಸರ್ಕಾರ ತುರ್ತು ಕ್ರಮಕೈಗೊಳ್ಳುವಂತೆ ಆಗ್ರಹಪಡಿಸಿದ ಅವರು, ಪ್ರಸ್ತುತ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸುವ ಮೂಲಕ ವಿದ್ಯಾರ್ಥಿಗಳ ಭವಿಷದತ್ತ ಗಮನ ಹರಿಸಬೇಕು. ಸರ್ಕಾರ ತಕ್ಷಣ ಕ್ರಮಕೈಗೊಳ್ಳದೆ ಹೋದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಎಂ.ಜಿ. ಪೃಥ್ವಿ, ಜಿಲ್ಲಾ ಮುಖಂಡ ಎಚ್.ಇ. ಅನ್ಷಾದ್, ಜಿಲ್ಲಾ ಸಹ ಕಾರ್ಯದರ್ಶಿ ಎಂ.ಜಿ. ಪ್ರದೀಪ್ ಕುಮಾರ್, ಜಿಲ್ಲಾ ಕಾರ್ಯದರ್ಶಿ ಕೆ.ಎಸ್. ಮಂಜುನಾಥ್, ತಾಲೂಕು ಕಾರ್ಯದರ್ಶಿ ಅಯ್ಯಪ್ಪರಾಜು, ತಾಲೂಕು ಅಧ್ಯಕ್ಷೆ ಎನ್.ಡಿ. ಧನಲಕ್ಷ್ಮಿ, ನಸ್ರತ್, ಎಚ್.ಐ. ಅಸ್ಲಾಂ ಹಾಗೂ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.