ಖಾತ್ರಿ ಯೋಜನೆ ಸಮಗ್ರ ಅನುಷ್ಠಾನ ಆಗಲಿ
ಕನ್ನಡಪ್ರಭ ವಾರ್ತೆ, ಅರಸೀಕೆರೆ, ಜ. 31
ಮಹಾತ್ಮಾ ಗಾಂಧೀಜಿ ಕಂಡ ಗ್ರಾಮರಾಜ್ಯ, ರಾಮರಾಜ್ಯದ ಕನಸು ನನಸಾಗಿ ಗ್ರಾಮಗಳು ಅಭಿವೃದ್ಧಿ ಪಥದತ್ತ ಸಾಗಬೇಕಾದರೆ ಕೇಂದ್ರ ಸರ್ಕಾರದ ಮಹಾತ್ವಕಾಂಕ್ಷೆಯ ಯೋಜನೆಯಾದ ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಸಮಗ್ರವಾಗಿ ಅನುಷ್ಠಾನಕ್ಕೆ ತರಬೇಕೆಂದು ತಾಪಂ ಅಧ್ಯಕ್ಷ ಎಚ್.ಟಿ. ಶಿವಮೂರ್ತಿ ತಿಳಿಸಿದರು.
ತಾಲೂಕು ಪಂಚಾಯ್ತಿ ಆವರಣದಲ್ಲಿ ಏರ್ಪಡಿಸಲಾಗಿದ್ದ ವೈಯಕ್ತಿಕ ಕಾಮಗಾರಿ ಫಲಾನುಭವಿಗಳಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಪ್ರಾರಂಭ ಪತ್ರ ನೀಡುವ ಅಭಿಯಾನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಾನಾ ಬಗೆಯ ಕಾಮಗಾರಿ: ಗ್ರಾಮೀಣ ಭಾಗದಲ್ಲಿ ದುಡಿಯುವ ಕೈಗಳಿಗೆ ಕೆಲಸ ನೀಡಬೇಕು ಎನ್ನುವ ಉದ್ದೇಶದಿಂದ ಇಂತಹ ಮಹತ್ವಾಕಾಂಕ್ಷಿ ಯೋಜನೆ ಜಾರಿಗೊಳಿಸಲಾಗುತ್ತಿದೆ. ಸರ್ಕಾರದ ವಿವಿಧ ಇಲಾಖೆಗಳ ವತಿಯಿಂದ ಲಭ್ಯವಿರುವ ಸೌಲಭ್ಯಗಳನ್ನು ಪಡೆದು ಬದುಕು ಹಸನು ಮಾಡಿಕೊಳ್ಳಬೇಕು. ನಮ್ಮ ಹೊಲ, ನಮ್ಮ ರಸ್ತೆ, ಚೆಕ್ ಡ್ಯಾಂ ನಿರ್ಮಾಣ, ಬದು ನಿರ್ಮಾಣ ಸೇರಿದಂತೆ ನಾನಾ ಬಗೆಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಯೋಜನೆಯಲ್ಲಿ ಅವಕಾಶವಿದೆ ಎಂದರು.
ಉತ್ತಮ ಬೆಳವಣಿಗೆ: ಜಿಪಂ ಉಪಾಧ್ಯಕ್ಷ ಬಿಳಿಚೌಡಯ್ಯ ಮಾತನಾಡಿ, ಅವರು ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳನ್ನು ಗುರುತಿಸಿ, ಕಾಮಗಾರಿ ಆರಂಭಿಸಲು ಅನುಮತಿ ನೀಡಬೇಕು. ಇದುವರೆಗೂ ಸಾಮೂಹಿಕ ಕಾಮಗಾರಿಗಳಿಗೆ ಅವಕಾಶ ಕಲ್ಪಿಸಲಾಗಿತ್ತು. ಇದೀಗ ಯೋಜನೆಯಲ್ಲಿ ವೈಯಕ್ತಿಕವಾಗಿ ಅನುಷ್ಠಾನಗೊಳಿಸಲು ಮುಂದಾಗಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಅಭಿಪ್ರಾಯಪಟ್ಟರು.
ಸಲಹೆ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷೆಯ ಯೋಜನೆಯ ಸದ್ಭಳಕೆ ಮಾಡಿಕೊಂಡು ಜಮೀನಿನಲ್ಲಿ ಅಗತ್ಯವಿರುವ ಕೆಲಸಗಳನ್ನು ಮಾಡಿಕೊಳ್ಳಬೇಕು. ಆ ಮೂಲಕ ಕುಟುಂಬದ ಉದ್ಧಾರದೊಂದಿಗೆ ಗಾಂಧೀಜಿ ಕಂಡ ಕನಸು ನನಸುಗೊಳ್ಳಲು ಸಾಧ್ಯವಾಗುತ್ತದೆ. ಫಲಾನುಭವಿಗಳ ಆಯ್ಕೆಯಲ್ಲಿ ಹಿನ್ನೆಡೆಯಾಗಿದ್ದರೆ ಅಧಿಕಾರಿಗಳು ಕೂಡಲೇ ಇತ್ತ ಗಮನ ಹರಿಸಿ ಅರ್ಹರನ್ನು ಪರಿಗಣಿಸಬೇಕೆಂದು ಸಲಹೆ ನೀಡಿದರು.
ಕಾಮಗಾರಿ ಮಾಡಲು ಅವಕಾಶವಿಲ್ಲ: ನೋಡಲ್ ಅಧಿಕಾರಿ ಬೆಟ್ಟಸ್ವಾಮಿಗೌಡ ಮಾತನಾಡಿ, ತಾಲೂಕಿನ 45 ಗ್ರಾಪಂ ವ್ಯಾಪ್ತಿಯಲ್ಲಿ 33967 ಜಾಬ್‌ಕಾರ್ಡ್ ವಿತರಿಸಲಾಗಿದ್ದು, ಅವರ ಕುಟುಂಬದ ಸದಸ್ಯರು ಸೇರಿ 1.20 ಲಕ್ಷ ಮಂದಿ ಸದಸ್ಯತ್ವ ಪಡೆದಿದ್ದಾರೆ. ಸರ್ಕಾರದ ಆದೇಶದಂತೆ 174 ರೂ ಕೂಲಿ ನಿಗದಿಪಡಿಸಿದ್ದು ರೈತರ ಕೃಷಿ ಚಟುವಟಿಕೆಗಳಿಲ್ಲದ ದಿನಗಳನ್ನು ಪರಿಗಣಿಸಿ 100 ದಿನ ಕಾಮಗಾರಿ ಕೆಲಸ ನೀಡಲಾಗುವುದು. ಈ ಅವಧಿಯಲ್ಲಿ ದನದ ಕೊಟ್ಟಿಗೆ ನಿರ್ಮಾಣ, ರೇಷ್ಮೆ ಕೊಠಡಿ, ಸಾವಯವ ಗೊಬ್ಬರ ನಿರ್ಮಾಣ ಕೊಠಡಿ ಸೇರಿದಂತೆ ನಾನಾ ಬಗೆಯ ಕಾಮಗಾರಿಗಳಿಗೆ ಸರ್ಕಾರ ಅನುದಾನ ಒದಗಿಸಲಾಗುತ್ತಿದೆ ಎಂದ ಅವರು ಯಾವುದೇ ಕಾರಣಕ್ಕೂ ಯಂತ್ರೋಪಕರಣಗಳನ್ನು ಬಳಸಿ ಕಾಮಗಾರಿ ಮಾಡಲು ಅವಕಾಶವಿಲ್ಲ ಎಂದು ತಿಳಿಸಿದರು.
ಇದೇ ವೇಳೆ ಮಹಾತ್ಮ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅಗಲಿದ ಚೇತನಕ್ಕೆ ಗೌರವ ಸಲ್ಲಿಸಲಾಯಿತು.
ಸಭೆಯಲ್ಲಿ ತಾಪಂ ಕಾರ್ಯನಿರ್ವಹಣಾಧಿಕಾರಿ ಟಿ.ಎನ್. ಮೂರ್ತಿ, ಕೃಷಿ ಇಲಾಖೆಯ ಕೆಂಪಚೌಡಪ್ಪ, ಎ.ಇ.ಇ.ಶೇಖರಪ್ಪ ಸೇರಿದಂತೆ ನಾನಾ ಇಲಾಖೆಯ ಅಧಿಕಾರಿಗಳು, ತಾಪಂ ಸದಸ್ಯರು, ಗ್ರಾಪಂ ಅಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ರೈತ ಪ್ರತಿನಿಧಿಗಳು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

