ಹಾಸನ

ಆರ್ಟಿಐ ಉಪಯೋಗ ಪಡೆದುಕೊಳ್ಳಿ

Published On :

ಹಾಸನ: ಆಡಳಿತದಲ್ಲಿ ಪಾರದರ್ಶಕತೆ ತರಲು ಸರ್ಕಾರವು ಮಾಹಿತಿ ಹಕ್ಕು ಕಾಯಿದೆ ಜಾರಿಗೆ ತಂದಿರುವುದರಿಂದ ಜನಸಾಮಾನ್ಯರು ಇದರ ಉಪಯೋಗ ಪಡೆದುಕೊಳ್ಳಬೇಕೆಂದು ಹಾಸನದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಸಿ.ಚಿದಾನಂದ್ ತಿಳಿಸಿದರು.  
ಕೇಂದ್ರ ಕ್ಷೇತ್ರ ಪ್ರಚಾರ ನಿರ್ದೇಶನಾಲಯ, ವಾರ್ತಾ ಇಲಾಖೆ, ಶ್ರೀಗಂಧ ಸೇವಾ ಸಂಸ್ಥೆ, ಶಿಶು ಅಭಿವೃದ್ಧಿ ಯೋಜನೆ, ಗಂಜಿಗೆರೆ ಗ್ರಾಪಂ ಆಶ್ರಯದಲ್ಲಿ ಗುರುವಾರ ಆಲೂರು ತಾಲೂಕಿನ ಕ್ಯಾತನಹಳ್ಳಿ ಕಾಲೊನಿಯ ಸರ್ಕಾರಿ ಶಾಲಾ ಅವರಣದಲ್ಲಿ ಏರ್ಪಡಿಸಿದ್ದ ಮಾಹಿತಿ ಹಕ್ಕು ಕಾಯಿದೆ ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಾಹಿತಿ ಹಕ್ಕು ಕಾಯಿದೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಹಾಗೂ ಅವುಗಳ ಅಧೀನದಲ್ಲಿ ಬರುವ ಎಲ್ಲ ಕಾರ್ಯಾಲಯಗಳು ಇದರ ವ್ಯಾಪ್ತಿಗೆ ಬರುತ್ತವೆ. ಜನಸಾಮಾನ್ಯರು ತಮಗೆ ಬೇಕಾದ ಮಾಹಿತಿಗಳನ್ನು ಇಲಾಖೆಗಳ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಂದ ಅರ್ಜಿಯನ್ನು ಸಲ್ಲಿಸಿ ಪಡೆದುಕೊಳ್ಳಬಹುದು ಎಂದರು.  
ಜಿಲ್ಲಾ ಶಿಕ್ಷಣಾಧಿಕಾರಿ ಡಿ.ಟಿ.ಪುಟ್ಟರಾಜು ಮಾತನಾಡಿ, ಇಲಾಖೆಗಳು ಮಾಹಿತಿ ಹಕ್ಕು ಕರ್ತವ್ಯ ಹಾಗೂ ಜವಾಬ್ದಾರಿ ತಿಳಿಸುವ ಪ್ರಯತ್ನವನ್ನು ಮಾಡುತ್ತಿದೆ. ಈ ಕಾಯಿದೆಯಡಿ ಅರ್ಜಿದಾರನು ಸಂಬಂಧಪಟ್ಟ ಮಾಹಿತಿಯನ್ನು ಸಂಬಂಧಪಟ್ಟ ಇಲಾಖೆಗೆ ಅರ್ಜಿ ಕೊಟ್ಟ 30 ದಿನಗಳೊಳಗೆ ಸಂಬಂಧ ಪಟ್ಟ ಇಲಾಖಾ ಅಧಿಕಾರಿಗಳು ಮಾಹಿತಿಯನ್ನು ನೀಡಬೇಕು. ಇಲ್ಲದಿದ್ದಲ್ಲಿ ದಿನವೊಂದಕ್ಕೆ 250ರಂತೆ ದಂಡ ವಿಧಿಸುವ ಅಧಿಕಾರ ಈ ಕಾಯಿದೆಯಡಿಯಲ್ಲಿ ಇರುತ್ತದೆ. ಮಾಹಿತಿ ಹಕ್ಕು ಕಾಯಿದೆ ಇದನ್ನು ತಿಳಿದುಕೊಳ್ಳುವುದು ನಮ್ಮ ಹಕ್ಕು ಹಾಗೂ ಜವಾಬ್ದಾರಿ ಎಂದರು.
ಗಂಜಿಗೆರೆ ಗ್ರಾಪಂ ಅಧ್ಯಕ್ಷ ಪರಮೇಶ್ ವಹಿಸಿದ್ದರು. ಕ್ಷೇತ್ರ ಪ್ರಚಾರ ಸಹಾಯಕ ಪ್ರಕಾಶ್ ಕಾರ್ಯಕ್ರಮದ ಉದ್ದೇಶ ಕುರಿತು ತಿಳಿಸಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎ.ಟಿ.ಮಲ್ಲೇಶ್, ಸರ್ವಶಿಕ್ಷಾ ಅಭಿಯಾನದ ಉಪಸಂಯೋಜನಾಧಿಕಾರಿ ಫಣೀಶ್, ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಉಪಸಂಯೋಜನಾಧಿಕಾರಿ ಬಲರಾಮ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಫೀರ್ಸಾಹೇಬ್ ಇದ್ದರು.
ಶಿಶು ಅಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ದುಗ್ಗಮ್ಮ ಸ್ವಾಗತಿಸಿದರು. ಶಾಲಾ ಶಿಕ್ಷಕಿ ವೀಣಾ ಕಾರ್ಯಕ್ರಮ ಸಂಯೋಜಿಸಿದರು. ಅಂಗನವಾಡಿ ಕಾರ್ಯಕರ್ತೆ ಸುಜಾತ ವಂದಿಸಿದರು. ಇದೇ ಸಂದರ್ಭದಲ್ಲಿ ಮಹಿಳೆಯರಿಗೆ ನಾನಾ ಸ್ಫರ್ಧೆ ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.