ರಸ್ತೆ ದುರಸ್ತಿಗೆ ವಿದ್ಯಾರ್ಥಿಗಳ ಆಗ್ರಹ
ಕನ್ನಡಪ್ರಭ ವಾರ್ತೆ , ಹಾಸನ , ಜು.22
ಹಾಸನ-ತಿಪಟೂರು ರಸ್ತೆ ಹದಗೆಟ್ಟಿದ್ದು, ಕೂಡಲೇ ದುರಸ್ತಿ ಪಡಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರು ನಗರದ ಜಿಲ್ಲಾಧಿಕಾರಿ ಕಚೇರಿಗೆ ಬಂದು ಕೆಲ ಸಮಯ ಧರಣಿ ನಡೆಸಿ ಜಿಲ್ಲಾಧಿಕಾರಿಗೆ ಮನವಿ ನೀಡಿದರು.
ಹಾಸನ-ತಿಪಟೂರು ರಸ್ತೆ ಮಧ್ಯದಲ್ಲಿ ಇತ್ತೀಚೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಹೆರಗು ಕೆರೆಗೆ ಉರುಳಿ ಬಿದ್ದಿದ್ದು, ಇದರಿಂದ ಹಲವಾರು ಮಂದಿ ಗಾಯಗೊಂಡಿದ್ದರು. ಈ ಭಾಗದಲ್ಲಿ ರಸ್ತೆ ಹದಗೆಟ್ಟಿರುವುದರಿಂದ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ಈ ಬಗ್ಗೆ ಜನಪ್ರತಿನಿಧಿಗಳಾಗಲೀ, ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸದೇ ನಿರ್ಲಕ್ಷ್ಯ ತಾಳಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜನಪ್ರತಿನಿಧಿಗಳು ನಾಪತ್ತೆ: ಜನಪ್ರತಿನಿಧಿಗಳು ಈ ಭಾಗದ ಸಮಸ್ಯೆ ಕೇಳಲು ಈವರೆಗೂ ಬಂದಿಲ್ಲ. ಈ ಭಾಗದ ಜನರ ಜೀವನ ಅಸ್ತವ್ಯಸ್ತವಾಗಿದೆ. ದಿನನಿತ್ಯ ಈ ರಸ್ತೆಯಲ್ಲಿ ಓಡಾಡುವಂತಹ ವಿದ್ಯಾರ್ಥಿಗಳು ಹಾಗೂ ಜನರು ತಮ್ಮ ಜೀವವನ್ನು ಕೈಲಿಟ್ಟುಕೊಂಡು ತಿರುಗಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.
ತಕ್ಷಣ ಅಧಿಕಾರಿಗಳು ಸಮಸ್ಯೆಯನ್ನು ಅರಿತು ಹೆರಗು ಕೆರೆ ಮೇಲಿನ ರಸ್ತೆಯನ್ನು ಅಗಲೀಕರಣ ಮಾಡಿ ರಸ್ತೆ ಮಾಡಬೇಕು. ಹಾಸನದಿಂದ ತಿಪಟೂರಿಗೆ ಹೋಗುವ ರಸ್ತೆ ಸಂಪೂರ್ಣ ಹಾಳಾಗಿದ್ದು, ಈ ಕಾಮಗಾರಿ ನಿಂತು ವರ್ಷಗಳೇ ಕಳೆದಿದೆ. ಕೂಡಲೇ ರಸ್ತೆ ಕಾಮಗಾರಿ ಪ್ರಾರಂಭಿಸಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತೆ ಜಿಲ್ಲಾಡಳಿತಕ್ಕೆ ಮನವಿ ನೀಡಿದರು.
ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳಾದ ಎ.ಆರ್.ಶಿವರಾಮ್, ಎಸ್.ಶಿವು, ಸುಪ್ರಿತ್ ಎಸ್.ಗೌಡ, ವಿನುತಾ, ಮಧು, ಎಚ್.ಎನ್.ಗಿರೀಶ್ ಹಾಗೂ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

