ಹಾಸನ

ಶಾಲಾ- ಕಾಲೇಜುಗಳಲ್ಲಿ ಸಮುದಾಯ ಪೊಲೀಸಿಂಗ್ ರಚನೆ

Published On :

ಕನ್ನಡಪ್ರಭ ವಾರ್ತೆ, ಹಾಸನ, ಜು. 22
ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢ, ಪದವಿ ಪೂರ್ವ ಹಾಗೂ ಪದವಿ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರ ರಕ್ಷಣೆಗಾಗಿ ವಿದ್ಯಾರ್ಥಿಗಳ ಸಂಘ ಸ್ಥಾಪಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣನವರ್ ತಿಳಿಸಿದ್ದಾರೆ.
 ಇತ್ತೀಚಿನ ದಿನಗಳಲ್ಲಿ ಮಹಿಳೆ ಮತ್ತು ಮಕ್ಕಳ ಮೇಲೆ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿರುವುದರಿಂದ ಅವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮ ಹಾಗೂ ಅನುಸರಿಸಬೇಕಾದ ಮಾರ್ಗಸೂಚಿ ಕುರಿತಂತೆ ಪೊಲೀಸ್ ಇಲಾಖೆಯು ಇತರೆ ಇಲಾಖೆಗಳ ಸಹಯೋಗದೊಂದಿಗೆ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಮಾಡುತ್ತಿದೆ ಎಂದರು.
ಸಮುದಾಯ ಪೊಲೀಸಿಂಗ್:  ಈಗ ವಿದ್ಯಾರ್ಥಿಗಳಲ್ಲಿ ಈ ಕುರಿತು ಹೆಚ್ಚಿನ ಪ್ರಮಾಣದಲ್ಲಿ ಅರಿವು ಮೂಡಿಸಲು ಹಾಗೂ ಜವಾಬ್ದಾರಿಯನ್ನು ಮೈಗೂಡಿಸಲು ಎಲ್ಲಾ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರ ರಕ್ಷಣೆಗಾಗಿ ವಿದ್ಯಾರ್ಥಿಗಳ ಸಂಘವನ್ನು, ಸಮುದಾಯ ಪೊಲೀಸಿಂಗ್ ಮಾರ್ಗಸೂಚಿಗಳ
ಅಡಿಯಲ್ಲಿ ಸ್ಥಾಪಿಸಲಾಗುತ್ತದೆ ಎಂದು ಹೇಳಿದ್ದಾರೆ.
 ಈ ಸಂಘದಲ್ಲಿ ಶಾಲಾ ಮುಖ್ಯೋಪಾಧ್ಯಾಯರು, ಶಾಲಾ ಮುಖ್ಯೋಪಾಧ್ಯಾಯರಿಂದ ನೇಮಿಸಲ್ಪಟ್ಟ ಶಿಕ್ಷಕರು, ಶಾಲೆಯ ಒಬ್ಬ ಮಹಿಳಾ ಸಹ ಶಿಕ್ಷಕರು, ಶಾಲೆಯ ತಲಾ 5 ಜನ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ಸದಸ್ಯರು, ಸ್ಥಳೀಯ ಪೊಲೀಸ್ ಠಾಣೆಯ ಪಿಎಸ್‌ಐ, ಸ್ಥಳೀಯ ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿ ಅಧಿಕಾರಿ ಇರುತ್ತಾರೆ.
ಸಂಘದ ಕಾರ್ಯಗಳೇನು:  ಪ್ರತಿ ಗುರುವಾರ ಶಾಲೆಯಲ್ಲಿ ತೆರೆದ ಮನೆ ಕಾರ್ಯಕ್ರಮದಡಿಯಲ್ಲಿ ಕಾನೂನು ತಿಳಿವಳಿಕೆ ಹಾಗೂ ವಿವಿಧ ವಿಷಯಗಳ ಕುರಿತು ಪೊಲೀಸ್ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮ ಆಯೋಜಿಸುವುದು. ಪೋಲಿ ಹುಡುಗರು ಹೆಣ್ಣುಮಕ್ಕಳನ್ನು ಚುಡಾಯಿಸಿದ್ದೇ ಆದಲ್ಲಿ ಸ್ಥಳೀಯ ಠಾಣಾಧಿಕಾರಿಗಳಿಗೆ ತಿಳಿಸುವುದು. ತಿಂಗಳಿಗೊಮ್ಮೆ ಪೋಷಕರ ಹಾಗೂ ಮಕ್ಕಳ ಸಭೆ ಕರೆದು ಸ್ಥಳೀಯ ಪಿಎಸ್‌ಐ  ಸಮಕ್ಷಮದಲ್ಲಿ ಮಕ್ಕಳ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಂಡುಕೊಳ್ಳುವುದು ಎಂದು ಅವರು ವಿವರಿಸಿದರು.
ಪೊಲೀಸ್ ಜತೆ ಸಂಪರ್ಕ: ಸದರಿ ಸಂಘಕ್ಕೆ ಜಿಲ್ಲಾ ಪೊಲೀಸ್ ಕಚೇರಿಯ ಡಿ.ಸಿ.ಆರ್.ಬಿ. ಇನ್ಸ್‌ಪೆಕ್ಟರ್ ನೋಡಲ್ ಅಧಿಕಾರಿಯಾಗಿರುತ್ತಾರೆ. ಎಲ್ಲಾ ಶಾಲಾ ಮುಖ್ಯೋಪಾಧ್ಯಾಯರು ಇವರೊಂದಿಗೆ ಸತತ ಸಂಪರ್ಕದಲ್ಲಿದ್ದು ಸದರಿ ಸಂಘದ ಪ್ರಗತಿಯನ್ನು ತಿಳಿಸಬಹುದಾಗಿದೆ. ಅವರ ಮೊಬೈಲ್  ಸಂಖ್ಯೆ 9480804709 ಆಗಿರುತ್ತದೆ.
 ಈ ಕಾರ್ಯಕ್ರಮವನ್ನು ಪ್ರಾರಂಭಿಕ ಹಂತದಲ್ಲಿ ಹಾಸನ ನಗರದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಜಾರಿಗೆ ತರಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜುಗಳಲ್ಲಿ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.     
ಮಹಿಳೆಯರು ಸ್ವಯಂ ರಕ್ಷಣೆಗೆ ಮುಂದಾಗಬೇಕು
ಕನ್ನಡಪ್ರಭ ವಾರ್ತೆ, ಅರಸೀಕೆರೆ, ಜು. 22
 ಯುವತಿಯರು ಹಾಗೂ ಮಹಿಳೆಯರು ಅತ್ಯಾಚಾರ ಹಾಗೂ ದೌರ್ಜನ್ಯದಿಂದ ಪಾರಾಗಲು ಸ್ವಯಂ ರಕ್ಷಣೆಗೆ ಮುಂದಾಗಬೇಕೆಂದು ಡಿವೈಎಸ್ಪಿ ವಿ.ಜೆ. ಸಜೀತ್ ಸಲಹೆ ನೀಡಿದರು.
 ಪಟ್ಟಣದ ನಗರ ಪೊಲೀಸ್ ಠಾಣೆ ವತಿಯಿಂದ ಮಹಿಳಾ ಮತ್ತು ಮಕ್ಕಳ ಮೇಲಾಗುವ ದೌರ್ಜನ್ಯ ಹಾಗೂ ಅತ್ಯಾಚಾರ ತಡೆ ಕುರಿತಂತೆ ಗುರುಸಿದ್ದರಾಮೇಶ್ವರ ಸಮುದಾಯ ಭವನದ ಸಭಾಂಗಣದಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗಾಗಿ ಏರ್ಪಡಿಸಿದ್ದ ಜಾಗೃತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಂತಹ ಸಂದರ್ಭಗಳಲ್ಲಿ ಆತ್ಮಸ್ಥೈರ್ಯದೊಂದಿಗೆ ಪ್ರತಿದಾಳಿ ನಡೆಸಿ ತಮ್ಮ ರಕ್ಷಣೆ ಮಾಡಿಕೊಳ್ಳುವತ್ತ ಗಮನ ಹರಿಸಬೇಕೆಂದರು.
ಪೊಲೀಸರಿಗೆ ತಿಳಿಸಿ: ಮಹಿಳೆಯರು ಹಾಗೂ ಬಾಲಕೀಯರನ್ನು ಚುಡಾಯಿಸುವುದು, ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರಗಳನ್ನು ನೋಡುವಂತೆ ಬಲವಂತ ಮಾಡುವುದು, ಅನಗತ್ಯ ಕರೆ ಮಾಡುವುದು, ಇಂತಹ ಪ್ರವೃತ್ತಿ ಕಂಡಕೂಡಲೇ ಇಲಾಖೆಯ ಗಮನಕ್ಕೆ ಂದರೆ ಅಂತಹವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದೆಂದು ಹೇಳಿದರು.
 ವೃತ್ತ ನಿರೀಕ್ಷಕ ನಂದಕುಮಾರ್ ಮಾತನಾಡಿ ವಿದ್ಯಾರ್ಥಿಗಳು ಪ್ರೀತಿ-ಪ್ರೇಮದ ಬಲೆಯಲ್ಲಿ ಸಿಲುಕಿ ತಮ್ಮ ವಿದ್ಯಾರ್ಥಿ ಬದುಕನ್ನು ಹಾಳುಮಾಡಿಕೊಳ್ಳದೆ ಮುಂದಿನ ಗುರಿ ಸಾಧನೆಗಾಗಿ ಶ್ರಮಿಸಬೇಕು ಎಂದರು.
 ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಚಂಪಾವತಿ, ಪುರಸಭಾ ಸದಸ್ಯೆ ಅನ್ನಪೂರ್ಣ, ಪ್ರತಿಭಾ ಪ.ಪೂ.ಕಾಲೇಜು ಉಪನ್ಯಾಸಕ ಬಸವರಾಜ್ ಮಾತನಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.