ಹಾಸನ

ಸಮರ್ಪಕ ಕುಡಿಯುವ ನೀರಿಗೆ ಗ್ರಾಮಸ್ಥರ ಆಗ್ರಹ

Published On :

ಕನ್ನಡಪ್ರಭ ವಾರ್ತೆ ಹಾಸನ ಜೂ 4
ಸಮರ್ಪಕ ಕುಡಿಯುವ ನೀರು ಒದಗಿಸುವಂತೆ ಆಗ್ರಹಿಸಿ ಹಾಸನ ತಾಲೂಕಿನ ಕೆ. ಆಲದಹಳ್ಳಿ ಗ್ರಾಮದ ಗ್ರಾಮಸ್ಥರು ಬುಧವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನಕಾರರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ವಿ. ಅನ್ಬುಕುಮಾರ್‌ಗೆ ಮನವಿ ನೀಡಿದರು. ನಂತರ ಶಾಸಕ ಎಚ್.ಡಿ.ರೇವಣ್ಣ ಅವರಿಗೆ ಮನವಿ ನೀಡಿ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದರು.
ಕುಡಿಯುವ ನೀರಿಗೆ ಗ್ರಾಮದಲ್ಲಿ ಅನೇಕ ದಿನಗಳಿಂದ ಸಮಸ್ಯೆ ಉಂಟಾಗಿದ್ದು, ಗ್ರಾಮದ ಮಹಿಳೆಯರು ಕುಡಿಯುವ ನೀರಿಗಾಗಿ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಕುಡಿಯುವ ನೀರನ್ನು ತರಲು ಸುಮಾರು ಒಂದೆರಡು ಕಿ.ಮೀ ನಷ್ಟು ದೂರ ಕ್ರಮಿಸಬೇಕು. ಗ್ರಾಮದಲ್ಲಿ ನೀರಿನ ಮೂಲ ಇಲ್ಲದ ಕಾರಣ ನೀರಿಗೆ ಹಾಹಾಕಾರ ಉಂಟಾಗಿದೆ ಎಂದು ಆಕ್ರೋಶ ವ್ಯಕ್ತಪಿಡಿಸಿದರು.
ಇದಲ್ಲದೆ ಗ್ರಾಮದ ಟ್ರಾನ್ ಫಾರ್ಮರ್ ಕೂಡ ಸುಟ್ಟು ಹೊಗಿರುವುದರಿಂದ ನೀರಿಗೆ ಸಮಸ್ಯೆ ಉಂಟಾಗಿದೆ. ದಿನ ನಿತ್ಯ ಕುಡಿಯುವ ನೀರಿಗೆ ಪರಿತಪಿಸುವ  ಸ್ಥಿತಿ ಉಂಟಾಗಿದೆ. ಸಮಸ್ಯೆ ಬಗೆಹರಿಸುವಂತೆ ಸ್ಥಳೀಯ ಮಡೆನೂರು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಈಗಾಗಲೇ ಅನೇಕ ಬಾರಿ ಲಿಖಿತ ರೂಪದಲ್ಲಿ ದೂರು ನೀಡಿದ್ದರು, ಇದುವರೆಗೂ ಕ್ರಮ ಕೈಗೊಂಡಿಲ್ಲ. ಜಿಲ್ಲಾಧಿಕಾರಿಗಳು ಸಮಸ್ಯೆ ಬಗೆಹರಿಸಬೇಕು ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಟ್ರಾನ್ಸ್‌ಫಾರ್ಮರ್ ಹಾಕಲು ಸೂಚನೆ ನೀಡಬೇಕು ಎಂದು ಒತ್ತಾಯಿಸಿದರು.
ಗ್ರಾಮದಲ್ಲಿ ನೀರಿಗೆ ಬದಲಿ ವ್ಯವಸ್ಥೆ ಇಲ್ಲವಾಗಿರುವುದರಿಂದ ಕಳೆದ 6 ತಿಂಗಳಿಂದ ನೀರಿಗೆ ಹಾಹಾಕಾರ ಉಂಟಾಗಿದೆ. ತಮ್ಮ ಜಮೀನಿನಲ್ಲಿ ಬೋರ್ ಹೊಂದಿರುವವರು ನೀರು ಕೊಡುವುದಿಲ್ಲ. ಅಷ್ಟೇ ಅಲ್ಲದೆ ಗ್ರಾಮದಲ್ಲಿ ಒಂದೂ ಬೋರ್‌ವೆಲ್ ಕೂಡ ಇಲ್ಲ. ಇದರಿಂದ ನೀರಿಗೆ ಪರದಾಡುವಂತಾಗಿದೆ. ಇರುವಂತಹ ವಾಟರ್ ಟ್ಯಾಂಕ್‌ನ್ನು ಸರಿಯಾಗಿ ನಿರ್ವಹಣೆ ಮಾಡದ ಕಾರಣ ಅದು ಶಿಥಿಲಾವಸ್ಥೆ ತಲುಪಿದೆ ಎಂದು ಆರೋಪಿಸಿದರು.
ಗ್ರಾಮದಲ್ಲಿ ಟ್ರಾನ್ಸ್‌ಫಾರ್ಮರ್ ಸುಟ್ಟು ಹೋಗಿರುವುದರಿಂದ ಕುಡಿಯುವ ನೀರು ಲಭ್ಯವಾಗುತ್ತಿಲ್ಲ. ಮಡೆನೂರು ಗ್ರಾಮ ಪಂಚಾಯಿತಿಗೆ ಸೇರಿದಂತಹ ಗ್ರಾಮದ ಗ್ರಾಮಸ್ಥರು ಹಲವು ಬಾರಿ ಪಂಚಾಯಿತಿಗೆ ಹೋಗಿ  ದೂರು ನೀಡಿದರೂ ಸಹ ಪ್ರಯೋಜನವಾಗಿಲ್ಲ. ನಮ್ಮಿಂದ ಮತ ಪಡೆದಂತಹ ಜನಪ್ರತಿನಿಧಿಗಳು ಗ್ರಾಮದ ಸಮಸ್ಯೆಗಳನ್ನು ಆಲಿಸುತ್ತಿಲ್ಲ. ಇದರಿಂದ ಗ್ರಾಮಸ್ಥರ ಗೋಳು ಕೇಳುವವರಿಲ್ಲದಂತಾಗಿದೆ ಎಂದು ಅಲವತ್ತುಕೊಂಡದರು. ಆದ್ದರಿಂದ ಕೂಡಲೆ ಗ್ರಾಮದಲ್ಲಿ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಪಟ್ಟು ಹಿಡಿದರು. ಪ್ರತಿಭಟನೆಯಲ್ಲಿ ಗ್ರಾಮಸ್ಥರಾದ ಸತೀಶ್, ಕೆಂಪೇಗೌಡ, ನಾಗೇಶ್, ಗಣೇಶ್, ರಾಘವೇಂದ್ರ, ರತ್ನಮ್ಮ, ರೆಣುಕಮ್ಮ, ನಂಜಮ್ಮ, ಮಂಜು, ರಾಜು, ನಳಿನಾ ಹಾಗೂ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.