ಹಳೇ ಬಸ್ನಿಲ್ದಾಣದಲ್ಲಿ ಬಸ್ ನಿಲ್ಲಿಸಲು ಕರವೇ ಆಗ್ರಹ
ಸಕಲೇಶಪುರ: ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿ ಗ್ರಾಮೀಣ ಸಾರಿಗೆ ಬಸ್ಗಳು ನಿಂತು ಹೊರಡುವ ವ್ಯವಸ್ಥೆ ಮಾಡಿಕೊಡುವಂತೆ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಮಾಗೇರಿ ಸುರೇಶ್ ಗೌಡ ಒತ್ತಾಯಿಸಿದ್ದಾರೆ.
ಸಕಲೇಶಪುರ ಪಟ್ಟಣ ತಾಲೂಕು ಕೇಂದ್ರವಾಗಿದ್ದು, ಹಳೇಬಸ್ ನಿಲ್ದಾಣ ಸುತ್ತಮುತ್ತಲಿನ ಸರ್ಕಾರಿ ಕಚೇರಿಗಳಿಗೆ, ವಾಣಿಜ್ಯ ವಹಿವಾಟುಗಳ ಅಂಗಡಿ ಮುಂಗಟ್ಟುಗಳು, ಬ್ಯಾಂಕುಗಳು, ತಾಲೂಕು ಕಚೇರಿ, ಅಂಚೆ ಕಚೇರಿ, ಸರ್ಕಾರಿ ಆಸ್ಪತ್ರೆಗಳಿವೆ. ಉಪನೋಂದಣಾಧಿಕಾರಿಗಳ ಕಚೇರಿ ಹಾಗೂ ಪತ್ರ ಬರಹಗಾರರೂ ಸೇರಿದಂತೆ ಸಾರ್ವಜನಿಕ ಸೌಲಭ್ಯಗಳೂ ಸಮೀಪದಲ್ಲಿಯೇ ದೊರಕುತ್ತವೆ.
ಆದರೆ ಹೊಸ ಬಸ್ ನಿಲ್ದಾಣ ಸಕಲೇಶಪುರ ಪಟ್ಟಣದಲ್ಲಿ ಹಳೇ ಬಸ್ ನಿಲ್ದಾಣದಿಂದ ಸುಮಾರು 2 ಕಿ.ಮೀ. ಅಂತರದಲ್ಲಿದೆ. ಏಕಾಏಕಿ ಹಳೇಬಸ್ ನಿಲ್ದಾಣದಲ್ಲಿ ಕೆಎಸ್ಆರ್ಟಿಸಿ ಬಸ್ಗಳ ನಿಲುಗಡೆ ರದ್ದುಪಡಿಸಿರುವುದರಿಂದ, ಪ್ರತಿದಿನ ಸರ್ಕಾರಿ ಕೆಲಸ ನಿಮಿತ್ತ ಹಾಗೂ ಇತರೆ ವ್ಯವಹಾರಗಳ ನಿಮಿತ್ತ ಆಗಮಿಸುವ ಗ್ರಾಮೀಣ ಭಾಗದ ಸಾರ್ವಜನಿಕರು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಅಧಿಕಾರಿ ವರ್ಗಕ್ಕೆ ಹಿಡಿಶಾಪ ಹಾಕುವಂತಾಗಿದೆ.
ಸಕಲೇಶಪುರ ತಾಲೂಕು 50 ಕಿ.ಮೀ. ವ್ಯಾಪ್ತಿ ಹೊಂದಿದ್ದು, ಕುಗ್ರಾಮಗಳಿಂದಲೂ ಬರುವ ಸಾರ್ವಜನಿಕರು ಆಟೋ ಬಾಡಿಗೆ 30 ರು.ನಿಂದ 60 ರು.ಗಳ ಆರ್ಥಿಕ ಹೊರೆ ಅನುಭವಿಸುವಂತಾಗಿದೆ. ಎಸ್ಬಿಎಂ ಬ್ಯಾಂಕ್ ಮುಂಭಾಗದಲ್ಲಿ ತಾತ್ಕಾಲಿಕ ಬಸ್ ನಿಲುಗಡೆ ವ್ಯವಸ್ಥೆ ಕಲ್ಪಿಸಿದ್ದರೂ ಈ ಸ್ಥಳದಲ್ಲಿ ಯಾವುದೇ ಮೂಲಭೂತ ಸೌಲಭ್ಯಗಳಿಲ್ಲ. ಪ್ರಯಾಣಿಕರು ಬಿಸಿಲು, ಮಳೆ, ಗಾಳಿ, ಚಳಿ ಎನ್ನದೆ ಸುರಕ್ಷತೆಯಿಲ್ಲದೆ, ರಸ್ತೆ ಬದಿಯಲ್ಲಿ ನಿಂತು ಬಸ್ಸಿಗಾಗಿ ಕಾಯಬೇಕಾಗಿದೆ ಎಂದು ದೂರಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಬಸ್ಸುಗಳ ನಿಲುಗಡೆಗೆ ಅವಕಾಶ ಕಲ್ಪಿಸಿರುವುದರಿಂದ ವಾಹನದಟ್ಟಣೆಯಾಗಿ ಈ ರಸ್ತೆಯಲ್ಲಿ ಬೈಕ್ ಚಾಲನೆ ಮಾಡುತ್ತಿದ್ದ ಮಂಗಳೂರಿನ ಯುವಕ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ. ತಾಲೂಕಿನ ಜನತೆ ಅನುಭವಿಸುತ್ತಿರುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು, ಕರಾರಸಾಸಂಸ್ಥೆ, ಪುರಸಭೆ, ಲೋಕೋಪಯೋಗಿ ಇಲಾಖೆ, ತಾಲೂಕು ಆಡಳಿತ ಹಾಗೂ ಜಿಲ್ಲಾಡಳಿತ ಸೇರಿದಂತೆ ಸಂಘಸಂಸ್ಥೆಗಳನ್ನು ಒಳಗೊಂಡ ಒಂದು ಸಮಿತಿ ರಚಿಸಿ, ಚರ್ಚಿಸಿ, ಸಮಸ್ಯೆ ಪರಿಹಾರಕ್ಕೆ ಮುಂದಾಗಬೇಕಾಗಿದೆ ಎಂದು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

