ಜೈಲುಗಳ ಆಧುನೀಕರಣ: ಜಾರ್ಜ್
ಕ.ಪ್ರ.ವಾರ್ತೆ ಹಾಸನ ಜೂ.9
ರಾಜ್ಯಾದ್ಯಂತ ನಗರ, ತಾಲೂಕು ಕೇಂದ್ರಗಳಲ್ಲಿ ಇರುವ ಜೈಲುಗಳನ್ನು ಆಧುನೀಕರಣಗೊಳಿಸಲು ರಾಜ್ಯ ಸರ್ಕಾರ ತುರ್ತು ಕ್ರಮ ತೆಗೆದುಕೊಳ್ಳುತ್ತಿದ್ದು, ಮೊದಲ ಹಂತವಾಗಿ ಜೈಲುಗಳಲ್ಲಿ ಕೊರತೆ ಇರುವ ಜೈಲರ್ ಮತ್ತಿತರ ಸಿಬ್ಬಂದಿ ನೇಮಕಾತಿಗೆ ನಿರ್ಧರಿಸಿದೆ ಎಂದು ಗೃಹ ಸಚಿವ ಕೆ.ಜೆ. ಜಾರ್ಜ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬಹುತೇಕ ಜೈಲುಗಳು ಕಿರಿದಾಗಿದ್ದು, ಅಲ್ಲಿ ಅಗತ್ಯಕ್ಕಿಂತ ಹೆಚ್ಚು ಕೈದಿಗಳು ಇದ್ದಾರೆ. ಅಲ್ಲದೇ ನ್ಯಾಯಾಲಯಕ್ಕೆ ವಿಚಾರಣೆಗಳಿಗೆ ಕರೆದುಕೊಂಡು ಹೋಗಲು ಬೇಕಾದ ಸಿಬ್ಬಂದಿ ಕೊರತೆ ಇದೆ. ಇದರಿಂದ ಜೈಲಿನಲ್ಲಿ ಅಕ್ರಮ ಚಟುವಟಿಕೆಗಳು ನಡೆಯುವ ಸಾಧ್ಯತೆ ಇವೆ. ಆದ್ದರಿಂದ ಸರ್ಕಾರ ಆದ್ಯತೆ ಮೇರೆಗೆ ಜೈಲುಗಳನ್ನು ಆಧುನೀಕರಣಗೊಳಿಸಲಾಗುತ್ತಿದೆ ಎಂದರು.
ಪರಪ್ಪನ ಅಗ್ರಹಾರ ಜೈಲಿನಲ್ಲಿ 2 ಸಾವಿರ ಕೈದಿಗಳಿಗೆ ಮಾತ್ರ ಅವಕಾಶವಿದೆ. ಆದರೆ, 5,500 ಮಂದಿ ಇದ್ದಾರೆ ಎಂಬುದು ನಿಜ. ಎಲ್ಲಾ ಜೈಲುಗಳ ಸ್ಥಿತಿಯೂ ಆದೇ ಆಗಿದ್ದು ಸಿಬ್ಬಂದಿ ಕೊರತೆಯೂ ಇದೆ. ಇಂಥ ಪರಿಸ್ಥಿತಿ ಮುಂದುವರಿದರೆ ಜೈಲುಗಳಲ್ಲಿ ಆಗುವ ದುರ್ಘಟನೆಗಳು, ಭ್ರಷ್ಟಾಚಾರಗಳನ್ನು ತಡೆಯುವುದು ಕಷ್ಟವಾಗುತ್ತಿದೆ. ಆದ್ದರಿಂದ ಜೈಲುಗಳಲ್ಲಿ ಸಿಸಿ ಟಿವಿ ಕ್ಯಾಮರಾ, ಎತ್ತರ ಗೋಡೆ ನಿರ್ಮಾಣದ ಜತೆ ಕೈದಿಗಳ ಚಲನವಲನಗಳನ್ನು ಗಮನಿಸಲು ಬೇಕಾದ ಯಂತ್ರಗಳನ್ನು ಅಳವಡಿಸಲಾಗುತ್ತಿದೆ ಎಂದು ಹೇಳಿದರು.
4 - 5 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನೇಮಕಾತಿ ನಡೆದಿಲ್ಲ. ಈಗ 22,000 ಎಲ್ಲಾ ಹಂತದ ಸಿಬ್ಬಂದಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಈಗಾಗಲೇ 8 ಸಾವಿರ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳು ರಾಜ್ಯದಲ್ಲಿ ಮಾತ್ರವೇ ಅಲ್ಲ, ಇಡೀ ದೇಶದಲ್ಲಿ ಹೆಚ್ಚಾಗುತ್ತಿವೆ. ಇದು ವಿಷಾಧನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪೊಲೀಸ್ ಠಾಣೆಗಳಲ್ಲಿ ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಬಂದರೆ ಕೂಡಲೇ ಕೇಸು ದಾಖಲು ಮಾಡಿಕೊಂಡು ಸೂಕ್ತರೀತಿಯಲ್ಲಿ ತನಿಖೆ ನಡೆಸುವಂತೆ ಆದೇಶಿಸಲಾಗಿದೆ ಎಂದು ಸಚಿವರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

