ಹಾಸನ

ಅತ್ಯಾಚಾರ ತಡೆಗೆ ಆಗ್ರಹ

Published On :

ಹಾಸನ: ಮಹಿಳೆಯರ ಮೇಲಿನ ಅತ್ಯಾಚಾರ ಮತ್ತು ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟಬೇಕು ಹಾಗೂ ಬಗರ್‌ಹುಕುಂ ಸಾಗುವಳಿಯನ್ನು ಸಕ್ರಮಗೊಳಿಸುವಂತೆ ಆಗ್ರಹಿಸಿ ಮಾದಿಗ ದಂಡೋರ ಸಮಿತಿ ಮತ್ತು ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರು ನಗರದ ಹೇಮಾವತಿ ಪ್ರತಿಮೆಯಿಂದ ಮೆರವಣಿಗೆ ಪ್ರಾರಂಭಿಸಿ ಉತ್ತರಪ್ರದೇಶದಲ್ಲಿ ಈಚೆಗೆ ನಡೆದಿದ್ದ ದಲಿತ ಯುವತಿಯರ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ನೀಡುವಲ್ಲಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ವಿಫಲರಾಗಿದ್ದಾರೆ ಎಂದು ಆರೋಪಿಸಿ ನಗರದ ಎನ್.ಆರ್.ವೃತ್ತದಲ್ಲಿ ಅಖಿಲೇಶ್ ಅವರ ಪ್ರತಿಕೃತಿ ದಹಿಸಿ  ರಸ್ತೆ ತಡೆ ನಡೆಸಿದರು. ನಂತರ ಪ್ರತಿಭಟನಕಾರರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗೆ ಮನವಿ ನೀಡಿದರು.
ಸರ್ಕಾರದ ಬೇಜವಾಬ್ದಾರಿ: ಉತ್ತರ ಪ್ರದೇಶ ಸೇರಿದಂತೆ ದೇಶದಾದ್ಯಂತ ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ. ಮಹಿಳೆಯರಿಗೆ ರಕ್ಷಣೆ ನೀಡಿ, ದೌರ್ಜನ್ಯಕ್ಕೊಳಗಾದ ಮಹಿಳೆಯರ ಪರ ಮತ್ತು ದಲಿತರ ಪರ ನಿಲ್ಲಬೇಕಾಗಿದ್ದ ಉತ್ತರ ಪ್ರದೇಶದ ಸರ್ಕಾರ ಹಾಗೂ ಜನಪ್ರತಿನಿಧಿಗಳು ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಉತ್ತರ ಪ್ರದೇಶದಲ್ಲಿ ಇಬ್ಬರು ದಲಿತ ಯುವತಿಯರನ್ನು ಅತ್ಯಾಚಾರ ಎಸಗಿ ಅವರನ್ನು ಕೊಲೆ ಮಾಡಿದ್ದರೂ ಇದುವರೆಗೂ ಆರೋಪಿಗಳಿಗೆ ಶಿಕ್ಷೆಯಾಗಿಲ್ಲ. ಹಾಗಾಗಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಕೂಡಲೇ ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿ, ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ನಿಹಾಲ್ ಚಂದ್ ಮೆಘಾವಾಲ್ ಬಿಜೆಪಿ ಸರ್ಕಾರದಲ್ಲಿ ಮಂತ್ರಿಯಾಗಿರುವುದು ದೇಶದ ದೊಡ್ಡ ದುರಂತ ಎಂದು ಆರೋಪಿಸಿದರು.
ಬಗರ್‌ಹುಕುಂ ಸಕ್ರಮಕ್ಕೆ ಆಗ್ರಹ: ಹೊಳೆನರಸೀಪುರ ತಾಲೂಕಿನ ತೆವಡಹಳ್ಳಿ ಸರ್ವೆ ನಂ.71 ಮತ್ತು 73ರಲ್ಲಿ, ಸುಣ್ಣಕಲ್ಲು ಹೊಸೂರು ಸರ್ವೆ ನಂ.8, 12 ಮತ್ತು 16 ಮತ್ತು ಮಲ್ಲಪ್ಪನಹಳ್ಳಿ ಸರ್ವೆ ನಂ.21 ರಲ್ಲಿ ಸುಮಾರು 100ಕ್ಕೂ ಹೆಚ್ಚು ರೈತರು ಸುಮಾರು 35 ವರ್ಷಗಳಿಂದ ಸಾಗುವಳಿ ಭೂಮಿಯಲ್ಲಿ ಕೃಷಿ ಮಾಡುತ್ತಿದ್ದು, ಇನ್ನು ಕೆಲವರು ಇದೇ ಜಾಗದಲ್ಲಿ ಮನೆ ನಿರ್ಮಿಸಿಕೊಂಡು ವಾಸಿಸುತ್ತಿದ್ದಾರೆ. ಆದರೇ ಅರಣ್ಯ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಈ ಭೂಮಿಯನ್ನು ಸರ್ವೇನಡೆಸಿ ಭೂಮಿಯನ್ನು ಬಿಟ್ಟುಕೊಡುವಂತೆ ನೋಟಿಸ್ ನೀಡಿದ್ದಾರೆ ಎಂದು ಆರೋಪಿಸಿದರು.
ಈ ಮೂರು ಗ್ರಾಮಗಳ ಬಗರ್‌ಹುಕುಂ ಸಾಗುವಳಿದಾರರಲ್ಲಿ ದಲಿತರು ಹಾಗೂ ಹಿಂದುಳಿದ ವರ್ಗಗಳ ಸಮುದಾಯದವರೆ ಹೆಚ್ಚಾಗಿರುವುದುರಿಂದ ರಾಜ್ಯ ಸರ್ಕಾರ ಕೂಡಲೇ ಮಧ್ಯೆ ಪ್ರವೇಶಿಸಿ ಬಗರ್‌ಹುಕುಂ ಸಾಗುವಳಿಯನ್ನು ಸಕ್ರಮಗೊಳಿಸಿ ರೈತರು ಕೃಷಿ ಚಟುವಟಿಕೆ ಮಾಡಲು ಅನುಕೂಲ ಮಾಡಿಕೊಡಬೇಕು ಎಂದರು.
ಪ್ರತಿಭಟನೆಯಲ್ಲಿ ಮಾದಿಗ ದಂಡೋರ ಸಮಿತಿ ಜಿಲ್ಲಾ ಅಧ್ಯಕ್ಷ ವಿಜಯ್ ಕುಮಾರ್, ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಧರ್ಮೇಶ್, ಜಿಲ್ಲಾ ಸಂಚಾಲಕ ನವೀನ್ ಕುಮಾರ್, ಪೃಥ್ವಿ, ಕೆಪಿಆರ್‌ಎಸ್‌ಟಿ ಜಿಲ್ಲಾ ಸಂಚಾಲಕ ಎಚ್.ಆರ್.ನವೀನ್ ಕುಮಾರ್, ಟಿ.ಎಂ.ಮಂಜುನಾಥ್, ಪ್ರಕಾಶ್, ಮಾಂತಪ್ಪ ಹಾಗೂ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.