ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕಾಣೆ
ಕ.ಪ್ರ. ವಾರ್ತೆ ಹಾಸನ ಜೂ 16
ಜಿಲ್ಲೆಯ ಸಮಸ್ಯೆಗಳಿಗೆ ಸ್ಪಂಧಿಸದ ಹಾಗೂ ಸಂಪರ್ಕಕ್ಕೆ ಸಿಗದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಕಾಣಿಯಾಗಿದ್ದಾರೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ದೂರು ನೀಡುವುದಾಗಿ ಶಾಸಕ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಿಲ್ಲೆಯ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಜಿಲ್ಲೆಯ ಶಾಸಕರನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಕಳೆದ 3 ಮೂರು ತಿಂಗಳಿನಿಂದ ಉಸ್ತುವಾರಿ ಕಾರ್ಯದರ್ಶಿಗಳು ದೂರವಾಣಿ ಸಂಪರ್ಕಕ್ಕೂ ಸಿಗುತ್ತಿಲ್ಲ ಎಂದು ಆರೋಪಿಸಿದರು.
ಅಧಿಕಾರಿಯ ಬೇಜವಾಬ್ದಾರಿ: ಜಿಲ್ಲೆಯಲ್ಲಿ ಸರಿಯಾಗಿ ವಿದ್ಯುತ್ ನೀಡುತ್ತಿಲ್ಲ. ದಿನದಲ್ಲಿ 2 ತಾಸು ಮಾತ್ರ ವಿದ್ಯುತ್ ನೀಡುತ್ತಿದ್ದಾರೆ. ಜಿಲ್ಲೆಯಲ್ಲಿ ಉದ್ಬವಿಸಿರುವ ವಿದ್ಯುತ್ ಸಮಸ್ಯೆ ಪರಿಹರಿಸುವಂತೆ ತಿಳಿಸಲು ದೂರವಾಣಿ ಕರೆ ಮಾಡಿದರೆ, ಕರೆಯನ್ನು ಸ್ವೀಕರಿಸದೆ ಬೇಜಾವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕುಮಾರನಾಯ್ಕ ವಿರುದ್ಧ ಅವರು ಕಿಡಿಕಾರಿದರು.
ಜಿಲ್ಲೆಗೆ ಆಗಾಗ ಭೇಟಿ ನೀಡುವ ಕುಮಾರ ನಾಯ್ಕ ಸಮಸ್ಯೆಗಳ ಕುರಿತು ಚರ್ಚಿಸುವರೇ ಅಥವಾ ಬಿರಿಯಾನಿ ತಿಂದು ವಾಪಸ್ ಹೋಗುತ್ತಾರೋ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದ ರೇವಣ್ಣ, ಅಧಿಕಾರಿಗಳ ಈ ವರ್ತನೆ ಗಮನಿಸಿದರೆ ರಾಜ್ಯ ಸರ್ಕಾರಕ್ಕೆ ಅಧಿಕಾರಿಗಳ ಮೇಲೆ ಹಿಡಿತ ಇಲ್ಲ ಎಂಬುದು ಸಾಬೀತಾಗುತ್ತದೆ. ಕೂಡಲೇ ಉಸ್ತುವಾರಿ ಕಾರ್ಯದರ್ಶಿಗೆ ಮುಖ್ಯಮಂತ್ರಿಗಳು ಆದೇಶ ನೀಡಿ ಜನರ ಸಮಸ್ಯೆಗೆ ಸ್ಪಂದಿಸಲು ತಿಳಿಸಬೇಕು ಎಂದು ಆಗ್ರಹಿಸಿದರು.
ರಸ್ತೆ ಕಾಮಗಾರಿ ಸ್ಥಗಿತ: ಹಾಸನ-ದುದ್ದ ರಸ್ತೆ ಅಭಿವೃದ್ಧಿ ಕಾಮಗಾರಿ ಸ್ಥಗಿತಗೊಂಡು 2 ವರ್ಷ ಕಳೆದಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಮತ್ತು ಅಧಿಕಾರಿಗಳು ಸ್ಥಳ ಪರಿಶೀಲನೆ ನಡಸಿ 15 ದಿನದಲ್ಲಿ ಕಾಮಗಾರಿ ಆರಂಭಿಸುವ ಭರವಸೆ ನೀಡಿದ್ದರು. ಹಾಸನ-ಅರಕಲಗೂಡು ರಸ್ತೆ ಕೂಡ ಅದೋಗತಿಯಲ್ಲಿದ್ದು, ಎರಡೂ ರಸ್ತೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆ ನಡೆಸಲಾಗುವುದು. ಅದಕ್ಕೆ ಸ್ಪಂಧಿಸದಿದ್ದರೆ ಉಗ್ರ ಹೋರಾಟ ಕೈಗೊಳ್ಳಲಾಗುತ್ತದೆ ಎಂದರು.
ಸಿಇಟಿ ರದ್ದಿಗೆ ಆಗ್ರಹ: ವೃತ್ತಿ ಶಿಕ್ಷಣ ಕೋರ್ಸ್ ಗಳಿಗೆ ನಡೆಸುವ ಸಿಇಟಿ ಪರೀಕ್ಷೆಯೂ ಅವೈಜ್ಞಾನಿಕವಾಗಿದ್ದು, ಕೂಡಲೇ ರದ್ದುಪಡಿಸಿ ದ್ವಿತೀಯ ಪಿಯುಸಿಯ ಅಂಕ ಆಧರಿಸಿ ಸೀಟು ಹಂಚಿಕೆ ಮಾಡಬೇಕು ಎಂದು ಶಾಸಕ ಎಚ್.ಡಿ.ರೇವಣ್ಣ ಆಗ್ರಸಿದರು. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸರ್ಕಾರಿ ಶಾಲೆಯಲ್ಲಿ ಓದಿ ವೃತ್ತಿ ಶಿಕ್ಷಣ ಕೋರ್ಸ್ಗಳಲ್ಲಿ ಸ್ಪರ್ಧಿಸಲು ಸಾಧ್ಯವಾಗುತ್ತಿಲ್ಲ. ಸಿಇಟಿಗೆ ಬೇಕಾದ ತರಬೇತಿ ಪಡೆಯದ ಕಾರಣ ಗ್ರಾಮೀಣ ವಿದ್ಯಾರ್ಥಿಗಳು ಮೆಡಿಕಲ್ ಮತ್ತು ಎಂಜಿನಿಯರಿಂಗ್ ಸೀಟಿನಿಂದ ವಂಚಿತರಾಗುತ್ತಿದ್ದಾರೆ ಎಂದರು.
ಒಡೆದು ಆಳುವ ನೀತಿ: Ú ಪರಿಶಿಷ್ಟ ಜಾತಿ ಮತ್ತು ಪಂಗಡದ ಹಾಲು ಉತ್ಪಾದಕರಿಗೆ ಮಾತ್ರ ಹೆಚ್ಚುವರಿಯಾಗಿ ರು. 2 ಸಹಾಯಧನ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿರುವ ಬಗ್ಗೆ ನಾನೇನೂ ಪ್ರತಿಕ್ರಿಯೆ ನೀಡುವುದಿಲ್ಲ. ಜಾತಿ-ಜಾತಿಗಳನ್ನು ಒಡೆದು ಆಡಳಿತ ನಡೆಸುವುದರಿಂದ ಏನು ಪ್ರಯೋಜನ ಆಗುವುದಿಲ್ಲ. ಪ್ರೋತ್ಸಾಹ ಧನದ ಬದಲಾಗಿ ಎಲ್ಲ ಬಡ ಕುಟುಂಬದ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಬೇಕು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

