ಮಕ್ಕಳ, ಮಹಿಳೆಯರ ರಕ್ಷಣೆ ಅಧಿಕಾರಿಗಳ ಹೊಣೆ
ಕ.ಪ್ರ. ವಾರ್ತೆ, ಹಾಸನ, ಜೂ 27
ಪ್ರತಿಯೊಂದು ಹಂತದಲ್ಲಿಯೂ ಗಂಡು- ಹೆಣ್ಣಿನ ಮಧ್ಯೆ ತಾರತಮ್ಯ ಮಾಡುವುದನ್ನು ಕಂಡುಬರುತ್ತಿದೆ. ಈ ನಿಟ್ಟಿನಲ್ಲಿ ಮಹಿಳೆಯರು ಮತ್ತು ಮಕ್ಕಳ ಸಾಗಾಟಕ್ಕೆ ಕಾರಣವೇನು ಎಂಬುದನ್ನು ನಮ್ಮನ್ನು ನಾವು ಪ್ರಶ್ನೆ ಮಾಡಿಕೊಳ್ಳಬೇಕು, ಜೊತೆಗೆ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ಮುಂದಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಪ್ರಾಧಿಕಾರದ ಅಧ್ಯಕ್ಷ ಆರ್.ಜೆ.ಸತೀಶ್ ಸಿಂಗ್ ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಹಾಗೂ ಜಿಲ್ಲಾ ವಕೀಲರ ಸಂಘಗಳ ಸಂಯುಕ್ತಾಶ್ರಯದಲ್ಲಿ ನಗರದ ಹಾಸನಾಂಬ ಕಲಾಭವನದಲ್ಲಿ ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಹಾಗೂ ಅವರ ರಕ್ಷಣೆ ಅನುಷ್ಠಾನಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಏರ್ಪಡಿಸಿದ್ದ ಕಾನೂನು ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪುನರ್ವಸತಿ ಕಲ್ಪಿಸಿ: ಹೊಟೇಲ್, ಗ್ಯಾರೇಜ್ಗಳಲ್ಲಿ ಬೀದಿ ಬದಿಲ್ಲಿ ಮಕ್ಕಳು ಕೆಲಸ ಮಾಡುವುದನ್ನು ಗಮನಿಸುತ್ತೇವೆ. ಅವರ ಬಗ್ಗೆ ಕಾಳಜಿವಹಿಸಿ ಪುನರ್ವಸತಿ ಕಲ್ಪಿಸಲು ನಿಗಾವಹಿಸಬೇಕಿದೆ ಎಂದು ಅವರು ತಿಳಿಸಿದರು. ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ, ಸಿಜೆಎಂ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸರಸ್ವತಿ ಕೋಸಂದರ್ ಪ್ರಾಸ್ತಾವಿಕ ನುಡಿಗಳನ್ನಾಡಿ, ಮಹಿಳೆ ಮತ್ತು ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ತಡೆಯುವುದು ಸರ್ಕಾರದ ಕರ್ತವ್ಯವಾಗಿದ್ದು, ಇದಕ್ಕೆ ಸಂಬಂಧಿಸಿದ ಕಾನೂನುಗಳ ಸಮರ್ಪಕ ಅನುಷ್ಠಾನವಾಗದಿದ್ದರೆ ಇವುಗಳ ಇರುವಿಕೆಯೇ ವಿಫಲವಾದಂತೆ ಎಂದರು.
ಜಿಲ್ಲಾಧಿಕಾರಿ ವಿ.ಅನ್ಬುಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ, ಸಮಾಜದಲ್ಲಿರುವ ಬಾಲ್ಯ ವಿವಾಹ, ಬಾಲಕಾರ್ಮಿಕ ಪದ್ಧತಿ, ಮಹಿಳಾ ದೌರ್ಜನ್ಯ ಮಹಿಳೆ ಮತ್ತು ಮಕ್ಕಳ ಸಾಗಾಟ, ಲೈಂಗಿಕ ಕಿರುಕುಳ ಕುರಿತ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಅಧಿಕಾರಿಗಳು ತಮ್ಮ ತಮ್ಮ ಜವಾಬ್ದಾರಿ ಅರಿತು ಕಾಳಜಿವಹಿಸಿ ಕೆಲಸ ಮಾಡಬೇಕಾಗಿದೆ ಎಂದರು.
ಎಲ್ಲರ ಜವಾಬ್ಧಾರಿ: ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಉಪೇಂದ್ರ ಪ್ರತಾಪ್ ಸಿಂಗ್ ಮಾತನಾಡಿ ಸಮಾಜದಲ್ಲಿ ಮಹಿಳೆ ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಯುವಲ್ಲಿ ಎಲ್ಲರ ಜವಾಬ್ದಾರಿ ಇದ್ದು, ಈ ನಿಟ್ಟಿನಲ್ಲಿ ಎಲ್ಲಾ ಇಲಾಖೆ ಮತ್ತು ಸ್ವಯಂ ಸೇವಾ ಸಂಸ್ಥೆಗಳು ಕೈಜೊಡಿಸುವಂತೆ ಮನವಿ ಮಾಡಿದರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ದೇವರಾಜೇಗೌಡ ಮಾತನಾಡಿ ಸುಶಿಕ್ಷಿತರು ಹೆಚ್ಚಾದಂತೆ ಅನ್ಯಾಯಾ ಅಕ್ರಮ, ಅಪರಾದ ಹೆಚ್ಚಾಗುತ್ತಿದೆ ಕಾನೂನಿನಡಿ ಶಿಕ್ಷೆಯಾಗುತ್ತದೆ ಎಂದು ತಿಳಿವಳಿಕೆ ಇದ್ದರೂ ಇಂತಹ ಕೃತ್ಯಗಳು ದಿನ ನಿತ್ಯ ನಡೆಯುತ್ತಿವೆ ಎಂದರು.
ದುಷ್ಪರಿಣಾಮ: ಅಪರ ಪೊಲೀಸ್ ವರಿಷ್ಠಾಧಿಕಾರಿ ಜೆ.ಕೆ. ರಶ್ಮಿ ಮಾತನಾಡಿ, ದೌರ್ಜನ್ಯ ತಡೆಯುವಲ್ಲಿ ತಂದೆ ತಾಯಿಗಳ ಪಾತ್ರವು ಇರುತ್ತದೆ ಗಂಡು ಹೆಣ್ಣಿನ ನಡುವಿನ ಅನುಪಾತದಲ್ಲಿ ವ್ಯತ್ಯಾಸ ಕಾಣುತ್ತಿದ್ದೇವೆ ಇದು ಕೂಡ ಸಾಮಾಜದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದ್ದೇಶಕ ಎಚ್.ಸಿ.ಚಿದಾನಂದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶ್ಯಾಮಲಾದೇವಿ, ವಿ.ಗೀತಾ ಪ್ರಸೂತಿ ತಜ್ಞೆ ಡಾ.ಭಾರತಿ ರಾಜಶೇಖರ್ ಉಪಾನ್ಯಾಸ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

