ನಿಷ್ಪಕ್ಷಪಾತ ಚುನಾವಣೆಗೆ ಎಲ್ಲರೂ ಸಹಕರಿಸಿ
ಹಾಸನ: ಹದಿನಾರನೇ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ 9 ಹಂತಗಳ ವೇಳಾ ಪಟ್ಟಿ ಪ್ರಕಟವಾಗಿದೆ. ಕರ್ನಾಟಕದಲ್ಲಿ ಏ. 17ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಮಾದರಿ ನೀತಿ ಸಂಹಿತೆ ಬುಧವಾರದಿಂದಲೇ ಜಾರಿಗೆ ಬಂದಿದೆ.
ಚುನಾವಣಾ ಘೋಷಣೆ ಹಿನ್ನಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಹಾಸನ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ವಿ. ಅನ್ಬುಕುಮಾರ್ ಚುನಾವಣಾ ಕರ್ತವ್ಯದಲ್ಲಿ ತೊಡಗುವ ಅಧಿಕಾರಿಗಳ ಸಭೆ ನಡೆಸಿ ಹಲವು ಸಲಹೆ ಸೂಚನೆಗಳನ್ನು ನೀಡಿದರು.
ಯಾವುದೇ ಗೊಂದಲವಿಲ್ಲದಂತೆ, ಶಾಂತಿಯುತವಾಗಿ ಮತ್ತು ನ್ಯಾಯಸಮ್ಮತವಾಗಿ ಚುನಾವಣೆ ನಡೆಸಲು ಎಲ್ಲರ ಸಹಕಾರ ಪರಿಶ್ರಮ ಅಗತ್ಯವಿದೆ ಎಂದು ಅವರು ಮನವಿ ಮಾಡಿದರು.
ಸಿಸಿ ಟಿವಿ: ಭಾರತ ಚುನಾವಣಾ ಪ್ರಕ್ರಿಯೆ ಅತ್ಯಂತ ಮಹತ್ತರ ಮತ್ತು ಜವಾಬ್ದಾರಿಯುತವಾಗಿದೆ. ಯಾವುದೇ ಲೋಪಗಳಿಗೂ ಅವಕಾಶವಿಲ್ಲದಂತೆ ಚುನಾವಣೆ ನಡೆಸಲು ಜಿಲ್ಲಾಡಳಿತದೊಂದಿಗೆ ಕೈಜೋಡಿಸುವಂತೆ ಅಧಿಕಾರಿಗಳಿಗೆ ತಿಳಿಸಿ, ಅಬಕಾರಿ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಜಿಲ್ಲೆಯಲ್ಲಿರುವ ಎರಡು ಕೆಎಚ್ಬಿಸಿಎಲ್ ಮಳಿಗೆಗಳಿಗೆ ನಾಳೆ ಸಂಜೆಯೊಳಗಾಗಿ ಸಿಸಿ ಟಿವಿ ಅಳವಡಿಸುವಂತೆ ಮತ್ತು ಮದ್ಯ ಎತ್ತುವಳಿಗೆ ಆಗಮಿಸುವ ಪ್ರತಿಯೊಂದು ವಾಹನಗಳ ಬಗ್ಗೆ ವಿಶೇಷ ಗಮನ ಹರಿಸುವಂತೆ ಅವರು ಸೂಚನೆ ನೀಡಿದರು.
ನೇಮಕ: ಹಾಸನ ಲೋಕಸಭೆ ಕ್ಷೇತ್ರವು ಜಿಲ್ಲೆಯ 8 ತಾಲ್ಲೂಕುಗಳಲ್ಲಿನ 7 ವಿಧಾನಸಬಾ ಕ್ಷೇತ್ರಗಳು ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕಡೂರು ಸೇರಿದಂತೆ 8 ವಿಧಾನ ಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಈ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸಲು ಅಪರ ಜಿಲ್ಲಾಧಿಕಾರಿ ಡಾ. ಗೋಪಾಲ ಕೃಷ್ಣ, ಹಾಸನ ಉಪ ವಿಭಾಗಾಧಿಕಾರಿ ಶರತ್, ಸಕಲೇಶಪುರ ಉಪ ವಿಭಾಗಾಧಿಕಾರಿ ಮಧುಕೇಶ್ವರ್, ವಿಶೇಷ ಭೂಸ್ವಾಧೀನಾಧಿಕಾರಿ ಸುರೇಶ್, ತೋಟಗಾರಿಕಾ ಉಪ ನಿರ್ದೇಶಕ ಶಕೀಲ್ ಅಹಮದ್. ಡಿಆರ್ಸಿ ಎಸ್. ಕುಮಾರಸ್ವಾಮಿ, ಹಿಂದುಳಿದ ವರ್ಗಗಳು ಮತ್ತು ಅಲ್ಪ ಸಂಖ್ಯಾತರ ಅಭಿವೃದ್ಧಿ ಅಧಿಕಾರಿ ಜಗದೀಶ್, ಜಿಲ್ಲಾ ಕೇಂದ್ರದ ಜಂಟಿ ನಿರ್ದೇಶಕ ಸಜ್ಜನ್ ಮೂರ್ತಿ ಸೇರಿದಂತೆ 9 ಮಂದಿ ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ಇವರಿಗೆ ನೆರವಾಗಲು ಪ್ರತಿ ಸಹಾಯಕ ಚುನಾವಣಾಧಿಕಾರಿಗೆ ಒಬ್ಬರಂತೆ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಅವರು ಮಾದರಿ ನೀತಿ ಸಂಹಿತೆ ಜಾರಿ ಬಗ್ಗೆ ವಿಶೇಷ ಗಮನ ಹರಿಸುವರು. ಇದಲ್ಲದೆ ಇವರೊಂದಿಗೆ ಆಯಾಯ ತಾಲೂಕು ತಹಸೀಲ್ದಾರರು ಸಂಪೂರ್ಣ ನೆರವಾಗಲಿದ್ದಾರೆ ಎಂದು ಅನ್ಬುಕುಮಾರ್ ಮಾಹಿತಿ ನೀಡಿದರು.
ಎಚ್ಚರಿಕೆ: ವೈನ್ಸ್ಟೋರ್ಗಳಲ್ಲಿ ಸಗಟು ಮದ್ಯ ಮಾರಾಟ ನಡೆಯುವ ಬಗ್ಗೆ ಕಟ್ಟೆಚ್ಚರ ವಹಿಸಬೇಕು. ಗ್ರಾಮಾಂತರ ಪ್ರದೇಶಗಳಲ್ಲಿ ವಾಹನ, ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಅಕ್ರಮ ಮದ್ಯ ಮಾರಾಟ, ಸಾಗಾಟದಲ್ಲಿ ತೊಡಗುವ ವೈನ್ಸ್ಟೋರ್ಸ್ಗಳ ಪರವಾನಗಿಯನ್ನು ರದ್ದು ಮಾಡಲಾಗುವುದು, ಅಲ್ಲದೆ ಸೂಕ್ತ ರೀತಿಯಲ್ಲಿ ನಿಗಾವಹಿಸದ ಅಬಕಾರಿ ಅಧಿಕಾರಿಗಳ ಮೇಲೂ ಕ್ರಮ ಜರುಗಿಸಲಾಗುವುದು ಎಂದು ಚುನಾವಣಾಧಿಕಾರಿ ಅನ್ಬುಕುಮಾರ್ ಎಚ್ಚರಿಕೆ ನೀಡಿದರು.
ಎಲ್ಲಾ ವೈನ್ಸ್ಟೋರ್ಸ್, ಬಾರ್ ಮತ್ತು ರೆಸ್ಟೋರೆಂಟ್ಗಳಿಗೆ ಪ್ರತಿ ದಿನ ಅಥವಾ ಎರೆಡು ದಿನಗಳಿಗೆ ಒಮ್ಮೆಯಾದರೂ ಭೇಟಿ ನೀಡಿ ಪರಿಶೀಲಿಸಬೇಕು. ದೈನಂದಿನ ಮಾರಾಟದಲ್ಲಿ ಶೇ. 30ರಷ್ಟು ಹಠಾತ್ ಏರಿಕೆ ಕಂಡು ಬರುವ ವೈನ್ಸ್ಟೋರ್ಗಳ ಬಗ್ಗೆ ವಿಶೇಷ ಗಮನಹರಿಸಬೇಕು ಎಂದರು.
ಹೆಲ್ಪ್ಲೈನ್: ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಅನುಕೂಲಕ್ಕಾಗಿ ಮಾಹಿತಿ ಪಡೆಯಲು ಹಾಗೂ ದೂರು ಸಲ್ಲಿಸಲು ಜಿಲ್ಲಾ ಚುನಾವಣಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿಗಳನ್ನು ಸ್ಥಾಪಿಸಲಾಗಿದೆ. 08172-265028, 08172-261111 - ಸಂಖ್ಯೆಗಳಿಗೆ ಸಂಪರ್ಕಿಸಬಹುದಾಗಿದೆ.
ಚೆಕ್ಪೋಸ್ಟ್: ಜಿಲ್ಲೆಯ ಕೆಲವೆಡೆ ಚೆಕ್ಪೋಸ್ಟ್ಗಳನ್ನು ಸ್ಥಾಪಿಸಲು ಚಿಂತನೆ ನಡೆಸಿರುವುದಾಗಿ ತಿಳಿಸಿದ ಜಿಲ್ಲಾಧಿಕಾರಿ, ಯಾವ ಯಾವ ಸ್ಥಳಗಳಲ್ಲಿ ಹೊಸದಾಗಿ ಚೆಕ್ಪೋಸ್ಟ್ ಗಳನ್ನು ಸ್ಥಾಪಿಸಬೇಕು ಎಂಬುದನ್ನು ಆರ್ಟಿಒ ಹಾಗೂ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದು ಕ್ರಮವಹಿಸಲಾಗುವುದು ಎಂದು ಅವರು ತಿಳಿಸಿದರು.
ಚುನಾವಣೆ ಮುಗಿಯುವವರೆಗೆ ಚುನಾವಣಾ ಕರ್ತವ್ಯದಲ್ಲಿ ತೊಡಗುವ ಅಧಿಕಾರಿಗಳು ಮಾದರಿ ನೀತಿ ಸಂಹಿತೆ ಬಗ್ಗೆ ಸಂಪೂರ್ಣ ಅರಿತು ಅದರಂತೆ ಅನುಸರಿಸಬೇಕು. ಕರ್ತವ್ಯ ಲೋಪವೆಸಗುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಂದು ಅವರು ಸೂಚ್ಯವಾಗಿ ತಿಳಿಸಿದರು.
ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ರವಿ.ಡಿ ಚನ್ನಣ್ಣವರ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಯು.ಪಿ.ಸಿಂಗ್ ನಾನಾ ಇಲಾಖಾ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಬ್ಯಾನರ್, ಬಂಟಿಂಗ್ಸ್ ತೆರವಿಗೆ ಸೂಚನೆ
ಮಾದರಿ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ನಗರ, ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಹಾಕಲಾಗಿರುವ ಎಲ್ಲಾ ರಾಜಕೀಯ ಪಕ್ಷಗಳ, ಮುಖಂಡರ ಬ್ಯಾನರ್, ಬಂಟಿಂಗ್ಸ್, ಕಟೌಟ್ಗಳನ್ನು ಕೂಡಲೇ ತೆರವುಗೊಳಿಸುವಂತೆ ಅವರು ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

