ಹಾಸನ

ಗೌಡರ ವಿರುದ್ಧ ಅಭ್ಯರ್ಥಿ 'ಕೈ'ಬಿಡಿ

Published On :

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ವಿರುದ್ಧ ಹಾಸನ ಲೋಕಸಭಾ ಕ್ಷೇತ್ರದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸದಂತೆ ಹಿರಿಯ ಕಾಂಗ್ರೆಸ್ ಮುಖಂಡ ಸಿ.ಕೆ.ಜಾಫರ್ ಷರೀಫ್ ಹೈಕಮಾಂಡ್‌ಗೆ ಪತ್ರ ಬರೆದಿದ್ದಾರೆ.
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಈ ಪತ್ರ ಕಳುಹಿಸಿದ್ದು, ದೇವೇಗೌಡರ ಹಿರಿತನಕ್ಕೆ ಬೆಲೆ ನೀಡುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ದೇವೇಗೌಡರು ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದಾರೆ. ಹಾಸನದಲ್ಲಿ ಅವರ ಪರವಾಗಿಯೇ ಜನಾದೇಶವಿದೆ. ಹೀಗಾಗಿ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ಸಂಬಂಧ ತಾವು ಹೈಕಮಾಂಡ್‌ಗೆ ಪತ್ರ ಬರೆದಿರುವುದು ನಿಜ ಎಂದು ವಿದ್ಯುನ್ಮಾನ ಮಾಧ್ಯಮ ಪ್ರತಿನಿಧಿಗಳಿಗೆ ಷರೀಫ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಷರೀಫ್ ಸಿದ್ಧತೆ ನಡೆಸಿದ್ದಾರೆ. ಮಾತ್ರವಲ್ಲ ದೇವೇಗೌಡರ ಜತೆ ಅವರು ದೀರ್ಘಕಾಲದ ರಾಜಕೀಯ ಸ್ನೇಹ ಹೊಂದಿದ್ದಾರೆ.
ಪರಮೇಶ್ವರ್ ಪರ ವಾದ: ಇದರ ಜತೆಗೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರ ಪರವಾಗಿಯೂ ಜಾಫರ್ ಷರೀಫ್ ಮಾತನಾಡಿದ್ದಾರೆ.  ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬರುವುದರ ಹಿಂದೆ ಪರಮೇಶ್ವರ್ ಕೊಡುಗೆ ಇದೆ. ಲೋಕಸಭಾ ಚುನಾವಣೆ ನಂತರ ದಲಿತ ಸಮುದಾಯಕ್ಕೆ ಸೇರಿದ ಪರಮೇಶ್ವರ ಅವರನ್ನು ಉಪಮುಖ್ಯಮಂತ್ರಿಯಾಗಿ ನೇಮಕ ಮಾಡಬೇಕು. ಇದಕ್ಕೆ ಅವರು ಸೂಕ್ತ ಹಾಗೂ ಅರ್ಹ ವ್ಯಕ್ತಿ ಎಂದು ಹೇಳಿದ್ದಾರೆ.
ಸಿಎಂ ಭೇಟಿ: ಇದಾದ ನಂತರ ಕಾಂಗ್ರೆಸ್ ಮುಖಂಡ ಸಿ.ಎಂ.ಇಬ್ರಾಹಿಂ ಅವರ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವ ಷರೀಫ್, ಅಮಾನತ್ ಕೋ-ಆಪರೇಟಿವ್ ಬ್ಯಾಂಕ್‌ನ್ನು ರಾಷ್ಟ್ರೀಕೃತ ಬ್ಯಾಂಕ್ ಜತೆ ವಿಲೀನಗೊಳಿಸದಂತೆ ಮನವಿ ಮಾಡಿದ್ದಾರೆ.
ಶಿವಮೊಗ್ಗಕ್ಕೆ ಕಸರತ್ತು: ಈ ನಡುವೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿಚಾರದಲ್ಲೂ ಕಾಂಗ್ರೆಸ್ ಇಕ್ಕಟ್ಟಿಗೆ ಸಿಲುಕಿದೆ. ಕಾಗೋಡು ತಿಮ್ಮಪ್ಪನವರನ್ನು ಕಣಕ್ಕಿಳಿಸಲು ಭಾರಿ ಪ್ರಯತ್ನ ನಡೆಯುತ್ತಿದೆ. ಆದರೆ ಅವರು ನಿರಾಕರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೇ ಕಾಗೋಡು ಮನವೊಲಿಸುವ ಜವಾಬ್ದಾರಿ ನೀಡಲಾಗಿದೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.