ಸಮರ್ಪಕ ನೀರಿಗಾಗಿ ಗ್ರಾಮಸ್ಥರ ಆಗ್ರಹ
ಹಾಸನ: ಸಮರ್ಪಕ ಕುಡಿಯುವ ನೀರನ್ನು ಒದಗಿಸುವಂತೆ ಆಗ್ರಹಿಸಿ ಅರಸೀಕೆರೆ ತಾಲೂಕಿನ ಚಿಕ್ಕಲಿಂಗನಹಳ್ಳಿ ಗ್ರಾಮಸ್ಥರು ಗುರುವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮನವಿ ನೀಡಿದರು.
ಅರಸೀಕೆರೆ ತಾಲೂಕಿನ ಜಾವಗಲ್ ಹೋಬಳಿಯ ಅರಕೆರೆ ಗ್ರಾಮ ಪಂಚಾಯ್ತಿಗೆ ಸೇರಿದ ಚಿಕ್ಕಲಿಂಗನಹಳ್ಳಿ ಗ್ರಾಮದಲ್ಲಿ ಸುಮಾರು 75 ಮನೆಗಳಿದ್ದು, ಸುಮಾರು 320 ಮಂದಿ ವಾಸ ಮಾಡುತ್ತಿದ್ದಾರೆ. ಇಲ್ಲಿ ಸಮುಮಾರು 3 ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದ್ದು, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಈವರೆಗೂ ಯಾವುದೇ ಕಾರ್ಯಗಳನ್ನು ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನೀರಿಗಾಗಿ ಹಾಹಾಕಾರ: ಸುಮಾರು 3 ತಿಂಗಳಿನಿಂದ ಚಿಕ್ಕಲಿಂಗನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಈ ಬಗ್ಗೆ ಅರೆಕೆರೆ ಗ್ರಾಮ ಪಂಚಾಯ್ತಿಗೆ ದೂರು ನೀಡಲಾಗಿದ್ದರೂ ಇದುವರೆಗೂ ಯಾವ ಪ್ರಯೋಜನವಾಗಿಲ್ಲ ಎಂದು ದೂರಿದ ಅವರು, ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದ್ದು, ಜನ ಜಾನುವಾರುಗಳು ಕುಡಿಯುವ ನೀರಿಗಾಗಿ ಹಾಹಾಕಾರ ಪಡುವಂತಾಗಿದೆ ಎಂದು ಅಲವತ್ತುಕೊಂಡರು.
ಸಮಸ್ಯೆಯನ್ನು ತಾಲ್ಲೂಕು ಪಂಚಾಯ್ತಿ ಅಧಿಕಾರಿ ಗಮನಕ್ಕೂ ತರಲಾಗಿದ್ದರೂ ಈವರೆಗೂ ಯಾವುದೆ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಇತ್ತೀಚೆಗೆ ಕೊಳವೆ ಬಾವಿ ಕೊರೆಸಲಾಗಿದ್ದರೂ ನೀರು ಬರದಷ್ಟು ಅಂತರ್ಜಲ ಬತ್ತಿಹೋಗಿದೆ. ಆದ್ದರಿಂದ ಹೊಸದಾಗಿ ತಕ್ಷಣ ಮತ್ತೊಂದು ಕೊಳವೆ ಬಾವಿ ಕೊರೆಸಿ ನೀರಿನ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದರು.
ಕಳೆದ ಬಾರಿ ಜಿಲ್ಲಾಧಿಕಾರಿಗೆ ಮನವಿ ನೀಡಿದ ಪರಿಣಾಮ ಅವರು ಅರಸೀಕೆರೆ ಜಿಲ್ಲಾ ಪಂಚಾಯ್ತಿ ಅಧಿಕಾರಿಗಳಿಗೆ ಸೂಚಿಸಿದ್ದರು. ಕೂಡಲೇ ಬೋರ್ವೆಲ್ ಕೊರೆಯುವಂತೆ. ಆದರೆ, ಅಧಿಕಾರಿಗಳು ಜಿಲ್ಲಾಧಿಕಾರಿಗಳ ಮಾತಿಗೆ ಕವಡೆ ಕಾಸಿನ ಕಿಮ್ಮತ್ತನ್ನೂ ನೀಡದೆ ನಿರ್ಲಕ್ಷ್ಯ ತಾಳಿದಿದ್ದಾರೆ. ಇದರಿಂದ ಗ್ರಾಮಸದಲ್ಲಿ ಸಂಪೂರ್ಣವಾಗಿ ಕುಡಿಯುವ ನೀರಿಲ್ಲದೆ ಗ್ರಾಮಸ್ಥರು ಸಂಕಷ್ಟವನ್ನು ಎದುರಿಸುವಂತಾಗಿದೆ ಎಂದು ಆರೋಪಿಸಿದರು.
ಕೂಡಲೇ ನೀರನ್ನು ಒದಗಿಸದಿದ್ದರೆ ಜನರು ದಂಗೆ ಏಳುವುದರಲ್ಲಿ ಅನುಮಾನವಿಲ್ಲ ಎಂದರು. ಆದ್ದರಿಂದ ಕೂಡಲೇ ಗ್ರಾಮಕ್ಕೆ ಕುಡಿಯುವ ನೀರನ್ನು ಒದಗಿಸುವ ಮೂಲಕ ನೆಮ್ಮದಿಯಲ್ಲಿ ಜೀವನ ನಡೆಸಲು ಸಹಕರಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಚಿಕ್ಕಲಿಂಗನಹಳ್ಳಿ ಗ್ರಾಮಸ್ಥರಾದ ಜನಾರ್ಧನ್, ಸೀತಾ ರಾಮನಾಯಕ, ಮಂಜಪ್ಪ, ರಾಜೇಶ್, ಹೇಮಣ್ಣ, ರಾಮಚಂದ್ರಪ್ಪ, ನಿಂಗಯ್ಯ, ಭಾಗ್ಯಮ್ಮ, ಗಂಗಾಧರಯ್ಯ ಹಾಗೂ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

