ಹಾಸನ

ನೀರಿನ ಸಮಸ್ಯೆ: ಕಾಂಗ್ರೆಸ್ ಪ್ರತಿಭಟನೆ

Published On :

ಕ.ಪ್ರ.ವಾರ್ತೆ  ಅರಸೀಕೆರೆ  ಮಾ. 17
ಪಟ್ಟಣದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರದ ಪರಿಸ್ಥಿತಿ ಎದುರಾಗಿದ್ದರೂ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಪುರಸಭಾ ಮುಖ್ಯಾಧಿಕಾರಿ ಸತ್ಯನಾರಾಯಣ ನಿರ್ಲಕ್ಷ್ಯ ತೋರಿರುವುದನ್ನು ಪ್ರತಿಭಟಿಸಿ ಕಾಂಗ್ರೆಸ್ ಸದಸ್ಯರು ಪುರಸಭೆ ಕಚೇರಿ ಬಂದ್ ಮಾಡಿ ಧರಣಿ ನಡೆಸಿದ ಪ್ರಸಂಗ ಸೋಮವಾರ ನಡೆಯಿತು.
ಕಳೆದ ಮಾ. 4ರಂದು ಪುರಸಭಾ ಸಾಮಾನ್ಯ ಸಭೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅಗತ್ಯವಿರುವೆಡೆ ಕೊಳೆ ಬಾವಿ ಕೊರೆಯಿಸಲು ರು. 10 ಲಕ್ಷ ಕಾಯ್ದಿರಿಸಲಾಗಿದ್ದರೂ ಮುಖ್ಯಾಧಿಕಾರಿಗಳು ಕೊಳವೆ ಬಾವಿ ಕೊರೆಸಲು ಮುಂದಾಗದೆ ನಾಗರಿಕರು ಕುಡಿಯುವ ನೀರಿಗಾಗಿ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಸದಸ್ಯರು ಸಾರ್ವಜನಿಕರಿಂದ ನಿಂದನೆಗೆ ಒಳಗಾಗಬೇಕಾಗಿದ್ದರೂ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಮುಖ್ಯಾದಿಕಾರಿಗಳು ಸ್ಪಂದಿಸದ ಕಾರಣ ಕಾಂಗ್ರೆಸ್ ಸದಸ್ಯರು ಧರಣಿ ನಡೆಸಿದರು.
ಮನವಿ ಮಾಡಲಾಗಿತ್ತು: ಈ ಸಂದರ್ಭದಲ್ಲಿ ಹಿರಿಯ ಸದಸ್ಯ ವಿದ್ಯಾಧರ್ ಮಾತನಾಡಿ, ಪಟ್ಟಣದ ಕೆಲ ವಾರ್ಡ್‌ಗಳಲ್ಲಿ ಅಸಮರ್ಪಕ ನೀರು ಪೂರೈಕೆಯಿಂದಾಗಿ ಜನರು ಪರಿತಪಿಸುವ ಸ್ಥಿತಿ ನಿರ್ಮಾಣಗೊಂಡಿದೆ. ಮಾ. 4ರಂದು ಪುರಸಭಾ ಮುಖ್ಯಾಧಿಕಾರಿಗಳನ್ನು ಭೇಟಿ ಮಾಡಿ ಅಗತ್ಯವಿರುವ ವಾರ್ಡ್‌ಗಳಲ್ಲಿ ಕೊಳವೆ ಬಾವಿ ಕೊರೆಯಿಸುವಂತೆ ಮನವಿ ಮಾಡಲಾಗಿತ್ತು.
ಆಗ್ರಹ: ಈ ಸಂಬಂಧ ಹಣ ಕೂಡ ನಿಗದಿಪಡಿಸಿ ಸಮಸ್ಯೆ ಬಗೆಹರಿಸುವುದಾಗಿ ಮುಖ್ಯಾಧಿಕಾರಿಗಳು ಭರವಸೆ ನೀಡಿದ್ದರು. ಪರಿಸ್ಥಿತಿ ವಿಕೋಪಕ್ಕೆ ಹೋಗುವ ಹಂತದಲ್ಲಿಯೂ ಸಮಸ್ಯೆಯತ್ತ ಗಮನ ಹರಿಸದಿರುವುದು ದುರದೃಷ್ಟಕರ ಸಂಗತಿಯಾಗಿದೆ. ನೀರು ಪೂರೈಕೆ ಮಾಡಲು ಅಗತ್ಯವಿರುವ ಕ್ರಮವನ್ನು ಕೂಡಲೇ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಅಡ್ಡಿಯಾದ ನೀತಿ ಸಂಹಿತೆ: ಧರಣಿ ಸುದ್ಧಿ ತಿಳಿದು ಸ್ಥಳಕ್ಕಾಗಮಿಸಿದ ತಹಸೀಲ್ದಾರ್ ನಟರಾಜ್ ಮಾತನಾಡಿ, ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಪ್ರತಿಭಟನೆ, ಧರಣಿಯಂತಹ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತಿಲ್ಲ. ಹಾಗಾಗಿ, ಕೂಡಲೇ ಸ್ಥಳದಿಂದ ತೆರಳುವಂತೆ ಧರಣಿ ನಿರತರಿಗೆ ಸೂಚಿಸಿದರು.
ಇದರಿಂದ ಮತ್ತಷ್ಟು ರೊಚ್ಚಿಗೆದ್ದ ಸದಸ್ಯರು ತಮ್ಮನ್ನು ಜೈಲಿಗೆ ಕಳುಹಿಸಿದರೂ ಸರಿ ಸಮಸ್ಯೆ ಬಗೆಹರಿಯುವವರೆಗೆ ಸ್ಥಳದಿಂದ ಕದಲುವುದಿಲ್ಲವೆಂದು ಬಿಗಿಪಟ್ಟು ಹಿಡಿದರು. ಸಮಸ್ಯೆಯ ಗಂಭೀರತೆ ಅರಿತ ತಹಸೀಲ್ದಾರ್ ಕಂದಾಯ ಉಪವಿಭಾಗಾಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಚರ್ಚೆ ನಡೆಸಿ 3 ದಿನಗಳಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ ನಂತರ ಧರಣಿ ಹಿಂತೆಗೆದುಕೊಂಡರು.
ಈ ಸಂದರ್ಭದಲ್ಲಿ ಕಾಂಗ್ರೆಸ್‌ನ ಚುನಾಯಿತ ಪುರಸಭೆ ಸದಸ್ಯರು ಹಾಗೂ ನಾಮನಿರ್ದೇಶಿತ ಸದಸ್ಯರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.