ಹಾಸನ

ರಸ್ತೆ ರಿಪೇರಿ ಮಾಡ್ಸೋಕೆ ಆಗ್ದವರು ಜಿಲ್ಲೆಯ ಅಭಿವೃದ್ಧಿ ಮಾಡ್ತಾರೇನ್ರೀ?

Published On :

ಹಾಸನ: ತಮ್ಮನ್ನು ವಿಧಾನಸಭೆಗೆ ಆಯ್ಕೆ ಮಾಡಿದ ಅರಕಲಗೂಡು ಕ್ಷೇತ್ರದ ರಸ್ತೆಗಳನ್ನೇ ಅಭಿವೃದ್ಧಿಪಡಿಸಲು ಸಾಧ್ಯವಾಗದವರಿಂದ ಹಾಸನ ಜಿಲ್ಲೆ ಅಭಿವೃದ್ಧಿ ಸಾಧ್ಯನಾ?
ಹೀಗಂತ ಪ್ರಶ್ನಿಸಿದ್ದು ಜೆಡಿಎಸ್ ಮುಖಂಡರು. ಈ ಪ್ರಶ್ನೆಗಳಿಗೆ ಗುರಿಯಾಗಿದ್ದು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಎ. ಮಂಜು.
ಇದು ನಡೆದಿದ್ದು ಬುಧವಾರ ನಡೆದ ಸುದ್ದಿಗೋಷ್ಠಿ. ಆಗ, ಅಲ್ಲಿ ಮಂಜು ಇರಲಿಲ್ಲ. ಆದರೆ, ಜೆಡಿಎಸ್ ಮುಖಂಡರು ಮಾತ್ರ ಟೀಕಾಸ್ತ್ರಗಳನ್ನು ಪ್ರಯೋಗಿಸುತ್ತಲೇ ಇದ್ದರು.
ಮೊದಲಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತೊ.ಚ. ಅನಂತ ಸುಬ್ಬರಾಯ, ಚನ್ನವೀರಪ್ಪ, ಅರಕಲಗೂಡಿನ ರಸ್ತೆಗಳು ಹದಗೆಟ್ಟು ಸಾಕಷ್ಟು ವರ್ಷಗಳು ಕಳೆದಿವೆ. ಈ ಬಗ್ಗೆ ನಮ್ಮ ಪಕ್ಷದ ಮುಖಂಡರು ವಿಧಾನಸಭೆ ಅಧಿವೇಶನದಲ್ಲಿ ಧ್ವನಿ ಎತ್ತಿದರೂ ಸರ್ಕಾರ ಸ್ಪಂದಿಸಿಲ್ಲ. ಈ ಬಗ್ಗೆ ಆ ಕ್ಷೇತ್ರದ ಕಾಂಗ್ರೆಸ್ ಶಾಸಕ ಮಂಜು ಸಹ ತಲೆ ಕೆಡಿಸಿಕೊಂಡಿಲ್ಲ. ಇಂಥ ಶಾಸಕರು ನಾಳೆ ಜಿಲ್ಲೆಯ ಪ್ರತಿನಿಧಿಯಾಗಿ ಸಂಸತ್ ಪ್ರವೇಶಿಸಿದರೆ, ಇವರಿಂದ ಜಿಲ್ಲೆ ಅಭಿವೃದ್ಧಿಯಾಗುತ್ತಾ ಎಂದು ಪ್ರಶ್ನಿಸಿದರು.
ಕಣ್ಣಿಗೆ ಕಾಣಿಸುತ್ತಿಲ್ಲವೇ?: ಕಾಂಗ್ರೆಸ್ ಮುಖಂಡರು ಚುನಾವಣೆ ವೇಳೆ ಅಭಿವೃದ್ಧಿ ಮಾತನಾಡುತ್ತಾರೆ. ಸುಖಾ ಸುಮ್ಮನೆ ಕೇವಲ ದೇವೇಗೌಡರು ಹಾಗೂ ಅವರ ಕುಟುಂಬದ ಬಗ್ಗೆ ಮಾತನಾಡುತ್ತಿದ್ದಾರೆ. ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಕುಟುಂಬ ರಾಜಕಾರಣದ ಬಗ್ಗೆ ಮಾತ್ರ ಅವರು ಕಣ್ಣಿಗೆ ಕಾಣಿಸುತ್ತಿಲ್ಲ ಎಂದು ಕಿಡಿಕಾರಿದರು.
ಟಿಕೆಟ್ ಕೊಡ್ಲಿ: ಮೋಟಮ್ಮ ಮತ್ತು ಆರೋಗ್ಯ ಸಚಿವ ಯು.ಟಿ.ಖಾದರ್ ಅವರು ಇತ್ತೀಚೆಗೆ ಜೆಡಿಎಸ್ ವಿರುದ್ಧ ಮಾಡಿದ್ದ ಟೀಕೆಗಳ ಬಗ್ಗೆ ಮುಖಂಡರು ಪ್ರತಿಕ್ರಿಯಿಸಿದ್ದಾರೆ.  ದೇವೇಗೌಡರು ಹಾಸನದಲ್ಲಿ ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ಕೊಡಲಿ ನೋಡೋಣ ಎಂದು ಯು.ಟಿ. ಖಾದರ್ ಅವರು ಹೇಳಿದ್ದಾರೆ. ದೇವೇಗೌಡರು ಜಿಲ್ಲೆಯಲ್ಲಿ ಮುಸ್ಲಿಂ ಬಾಂಧವರಿಗೆ ನಾನಾ ಹುದ್ದೆಗಳನ್ನು ನೀಡಿದ್ದಾರೆ. ಅಲ್ಲದೆ, ಅವರಿಗೆ ವಿಶೇಷವಾದ ಸ್ಥಾನ ಮಾನಗಳನ್ನು ನೀಡಿದ್ದಾರೆ ಎಂದರು. ಅದೆಲ್ಲವನ್ನೂ ಕಾಂಗ್ರೆಸ್ ಮುಖಂಡರಿಗೆ ತಿಳಿಸಬೇಕಾದ ಅವಶ್ಯಕತೆ ಇಲ್ಲ ಎಂದು ಖಾರವಾಗಿ ನುಡಿದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಶ್ರೀವಿದ್ಯಾ, ಉಪಾಧ್ಯಕ್ಷ ಇರ್ಷಾದ್ ಪಾಷ, ತಾಲೂಕು ಜೆಡಿಎಸ್ ಅಧ್ಯಕ್ಷ ಎಸ್. ದೇವೇಗೌಡ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.