ಅರಸೀಕೆರೆ: 3991 ವಿದ್ಯಾರ್ಥಿಗಳು ಪರೀಕ್ಷೆಗೆ
ಕನ್ನಡಪ್ರಭ ವಾರ್ತೆ, ಅರಸೀಕೆರೆ. 27
ಮಾ.28 ರಿಂದ ಪ್ರಾರಂಭವಾಗಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಒಟ್ಟು 3991 ವಿದ್ಯಾರ್ಥಿಗಳಿದ್ದು ಆ ಪೈಕಿ 2095 ಗಂಡು ಮಕ್ಕಳು, 1896 ಹೆಣ್ಣು ಮಕ್ಕಳು ಪರೀಕ್ಷೆ ಬರೆಯಲಿದ್ದು ಇದಕ್ಕಾಗಿ ಒಟ್ಟು 19 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ. ನಟರಾಜು ಹೇಳಿದರು.
ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ಥಾಪಿಸಲಾದ ಪರೀಕ್ಷಾ ಕೇಂದ್ರದ ಪರಿವೀಕ್ಷಣೆ ನಡೆಸಿದ ಸಂದರ್ಭದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿ ಕಳೆದ ಶೈಕ್ಷಣಿಕ ವರ್ಷದಲ್ಲಿ ತಾಲೂಕು ವ್ಯಾಪ್ತಿಯಲ್ಲಿ 18 ಪರೀಕ್ಷಾ ಕೇಂದ್ರಗಳನ್ನು ಮಾತ್ರ ಸ್ಥಾಪಿಸಲಾಗಿತ್ತು. ಆದರೆ ಈ ವರ್ಷ ಕುರುವಂಕ ಗ್ರಾಮದಲ್ಲಿ 19 ನೇ ಕೇಂದ್ರ ಸ್ಥಾಪಿಸುವ ಮೂಲಕ ಕುರುವಂಕ, ಚಿಕ್ಕೂರು, ಚಿಕ್ಕಮ್ಮನಹಳ್ಳಿ, ರಂಗನಾಯಕನ ಕೊಪ್ಪಲು ಗ್ರಾಮದ ಮಕ್ಕಳಿಗೆ ಈ ನೂತನ ಕೇಂದ್ರದಿಂದ ಹೆಚ್ಚಿನ ಅನುಕೂಲ ಕಲ್ಪಿಸಲಾಗಿದೆ. ಎಲ್ಲಾ 19 ಕೇಂದ್ರಗಳಲ್ಲೂ ಮಕ್ಕಳಿಗೆ ಅಸನದ ವ್ಯವಸ್ಥೆ ಮಾಡಲಾಗಿದೆ. ಆದಕಾರಣ ವಿದ್ಯಾರ್ಥಿಗಳು ನೆಲದ ಮೇಲೆ ಕುಳಿತು ಪರೀಕ್ಷೆ ಬರೆಯುವ ಪರಿಸ್ಥಿತಿ ಎಲ್ಲಿಯೂ ಇಲ್ಲವೆಂದರು.
ಕುಡಿವ ನೀರಿನ ಸೌಲಭ್ಯ: ಪರೀಕ್ಷೆ ಬರೆಯವ ಎಲ್ಲಾ ವಿದ್ಯಾರ್ಥಿಗಳ ಅನುಕೂಲತೆಗೆ ಕುಡಿಯುವ ನೀರಿನ ಸೌಲಭ್ಯ, ಶೌಚಾಲಯ ವ್ಯವಸ್ಥೆಯನ್ನು ಮಾಡಲಾಗಿದೆ. ಪ್ರತಿಯೊಂದು ಕೇಂದ್ರಗಳಲ್ಲಿ ಆರೋಗ್ಯ ಇಲಾಖೆಯ ಎಎನ್ಎಂ ಗಳನ್ನು ನಿಯೋಜಿಸಿದ್ದು, ಕೆಲವೊಮ್ಮೆ ಅನಿರೀಕ್ಷಿತವಾಗಿ ಅಸ್ವಸ್ತಗೊಂಡ ವಿದ್ಯಾರ್ಥಿಗಳಿಗೆ ತುರ್ತು ಚಿಕಿತ್ಸೆಗೆ ಕೂಡ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು. ತಾಲೂಕಿನ ಬೆಳಗುಂಬ ಮತ್ತು ಅಗ್ಗುಂದ ಗ್ರಾಮಗಳ ಎರಡು
ಕೇಂದ್ರಗಳನ್ನು ಮಾತ್ರ ಸೂಕ್ಷ್ಮ ಕೇಂದ್ರಗಳು ಎಂದು ಗುರುತಿಸಲಾಗಿದೆ.
ಪೊಲೀಸ್ ರಕ್ಷಣೆ: ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಯಾವುದೇ ರೀತಿ ತೊಂದರೆ ಆಗದಂತೆ ಎಚ್ಚರಿಕೆ ವಹಿಸಿ ಸೂಕ್ತ ಪೊಲೀಸ್ ರಕ್ಷಣಾ ವ್ಯವಸ್ಥೆ ಕೈಗೊಂಡಿರುವ ಜಿಲ್ಲಾಡಳಿತ ಪರೀಕ್ಷಾ ಕೇಂದ್ರದಿಂದ ಸುಮಾರು 200 ಮೀಟರ್ ದೂರದವರೆಗೂ ನಿಷೇಧಾಜ್ಞೆಯನ್ನು ಜಾರಿಗೊಳಿಸಿದ್ದು, ಈ ಪ್ರದೇಶದಲ್ಲಿನ ಯಾವುದೇ ಜೆರಾಕ್ಸ್ ಅಂಗಡಿಗಳು ಪರೀಕ್ಷಾ ಸಮಯದಲ್ಲಿ ನಡೆಸುವಂತಿಲ್ಲ ಎಂದು ತಿಳಿಸಿದರು. ಪ್ರಸ್ತುತ ವರ್ಷದಲ್ಲಿ ತಾವು ಶೇ.100 ಫಲಿತಾಂಶದ ನಿರೀಕ್ಷೆಯನ್ನು ಹೊಂದಿರುವುದಾಗಿ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಉಪಪ್ರಾಂಶುಪಾಲರಾದ ರೇಣುಕ, ಇನ್ನಿತರ ಶಿಕ್ಷಕರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

