ಹಾಸನ

'ಸಿದ್ದು ನಾಯಕತ್ವವನ್ನು ಒಪ್ಪಿ ಕಾಂಗ್ರೆಸ್ ಸೇರಿದೆ'

Published On :

ಹೊಳೆನರಸೀಪುರ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ ಎ. ಮಂಜು ಅವರ ವಿರುದ್ಧವೇ ಕೆಜೆಪಿಯಿಂದ ಚುನಾವಣೆಗೆ ನಿಂತಿದ್ದು, ನಂತರದಲ್ಲಿ ಸಿದ್ದರಾಮಯ್ಯ ಅವರ ನಾಯಕತ್ವಕ್ಕೆ ಬೆಲೆ ಕೊಟ್ಟು ಕಾಂಗ್ರೆಸ್ ಸೇರಿದೆ ಎಂದು ತಾಲೂಕು ಕುರುಬರ ಸಂಘದ ಅಧ್ಯಕ್ಷ ಎಸ್. ಪುಟ್ಟಸ್ವಾಮಿ ಹೇಳಿದ್ದಾರೆ.
ಪಟ್ಟಣದಲ್ಲಿನ ಕನಕ ಭವನದಲ್ಲಿ ಗುರುವಾರದಂದು ನಡೆಸಲಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೆ ಕಾಂಗ್ರೆಸ್ ವಿರುದ್ಧವೇ ಸ್ಪರ್ಧಿಸಿದ್ದು ಈಗ ಮುಗಿದ ಅಧ್ಯಾಯ. ರಾಜಕೀಯದಲ್ಲಿ ಯಾವುದೂ ಶಾಶ್ವತವಲ್ಲ. ಈಗ ಪ್ರತಿಷ್ಠೆಗಿಂತ ಪಕ್ಷ ಹಾಗೂ ಪಕ್ಷದ ನಿರ್ಧಾರ ಮುಖ್ಯ. ಪಕ್ಷದ ನಾಯಕರ ನಿರ್ದೇಶನದಂತೆ ಎ. ಮಂಜು ಅವರ ಗೆಲುವಿಗಾಗಿ ಶಕ್ತಿಮೀರಿ ಶ್ರಮಿಸಲಾಗುವುದು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದರು.
ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎ. ಮಂಜು ಅವರ ಗೆಲುವಿಗೆ ಒಮ್ಮತದಿಂದ ಶ್ರಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ನಿರ್ದೇಶನಕ್ಕೆ ಬದ್ಧವಾಗಿ ತಾಲೂಕಿನಲ್ಲಿ ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ಕಾರ್ಯಕರ್ತರನ್ನು ಒಗ್ಗೂಡಿಸುವ ಕೆಲಸ ಮಾಡುವುದಾಗಿ ತಿಳಿಸಿದರು.
ಕಾಂಗ್ರೆಸ್ಗೆ ಬೆಂಬಲ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಹಾಗೂ ಅವರ ಕುಟುಂಬಕ್ಕೆ ಮತದಾರರು ಮಾಡಿದ ಆಶೀರ್ವಾದ ಮತ್ತು ಸಿಕ್ಕ ಅವಕಾಶಗಳಲ್ಲಿ ಅವರು ಜಿಲ್ಲೆಗೆ ಬಹಳಷ್ಟು ಕೆಲಸಗಳನ್ನು ಮಾಡಬಹುದಾಗಿತ್ತು. ಆದರೆ, ಜಿಲ್ಲೆಯ ಮೂಲಭೂತ ಸಮಸ್ಯೆಗಳಾದ ಕುಡಿಯುವ ನೀರು, ರಸ್ತೆ, ವಿದ್ಯುತ್ ಮೊದಲಾದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಲು ಇವರಿಂದ ಸಾಧ್ಯವಾಗಲಿಲ್ಲ ಎಂದು ಎಸ್. ಪುಟ್ಟಸ್ವಾಮಿ ಹೇಳಿದರು.
ಪುರಸಭೆಯ ಮಾಜಿ ನಾಮ ನಿರ್ದೇಶಿತ ಸದಸ್ಯ ಹೊನ್ನಿಕೊಪ್ಪಲು ಮಂಜೇಗೌಡ ಮಾತನಾಡಿ, ಗ್ರಾಮಾಂತರ ಪ್ರದೇಶದಿಂದ ಜಿಲ್ಲಾ ಮಟ್ಟದವರೆಗೂ ಪಕ್ಷವನ್ನು ಸಂಘಟಿಸಲು ಎಲ್ಲರೂ ಒಮ್ಮನಸ್ಸಿನಿಂದ ಕಾರ್ಯಕರ್ತರು ಒಂದಾಗಿರುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕು ಕುರುಬ ಸಮಾಜದ ಮಾಜಿ ಅಧ್ಯಕ್ಷ ಮಾಳಿಗೇಗೌಡ, ಗುಡ್ಡೇನಹಳ್ಳಿ ಓಹಿಲೇಶ್ ಇತರರು ಇದ್ದರು.



'ಮೋದಿ ಮೋಡಿ, ಗೌಡರ ಕಣ್ಣೀರ ಕೋಡಿ ನಡೆಯೋದಿಲ್ಲ'
ನರೇಂದ್ರ ಮೋದಿಯ ಮಾತಿನ ಮೋಡಿ ಹಾಗೂ ದೇವೇಗೌಡರ ಕಣ್ಣೀರಿನ ಕೋಡಿಯಿಂದ ಮತದಾರರನ್ನು ಓಲೈಸಲು ಸಾಧ್ಯವಿಲ್ಲ. ಮತದಾರರು ಪ್ರಬುದ್ಧರಾಗಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದು ಪುಟ್ಟಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.