ಸಾಮಾಜಿಕ ನ್ಯಾಯ: ಕೈಗೆ ನೈತಿಕತೆ ಇಲ್ಲ
ಬ್ಯಾಡಗಿ: ಮಹಿಳಾ ಮೀಸಲಾತಿ ಕರಡು ಮಸೂದೆ ತಿರಸ್ಕರಿಸಿರುವ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರಕ್ಕೆ ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ಬಿಜೆಪಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಭಾರತಿ ಜಂಬಗಿ ಟೀಕಿಸಿದರು.
ಚುನಾವಣೆ ಹಿನ್ನೆಲೆಯಲ್ಲಿ ಶುಕ್ರವಾರ ಪಟ್ಟಣಕ್ಕೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಎನ್‌ಡಿಎ ಮಹಿಳಾ ಮೀಸಲಾತಿ ಪರವಾಗಿದ್ದು, 2 ಬಾರಿ ಮಸೂದೆ ಅಂಗೀಕಾರಕ್ಕೆ ಆಗ್ರಹಿಸಿದರೂ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಒಬ್ಬ ಮಹಿಳೆಯಾಗಿ ಮಹಿಳಾ ಮೀಸಲಾತಿ ಕರಡನ್ನು ತಿರಸ್ಕರಿಸಿದ್ದಾರೆ. ಶೀಲಾ ದೀಕ್ಷಿತ್ ಮುಖ್ಯಮಂತ್ರಿಯಾಗಿರುವ ದೆಹಲಿಯಲ್ಲೇ ಯುವತಿ ಮೇಲೆ ಅತ್ಯಾಚಾರ ನಡೆದರೂ ರಕ್ಷಣೆ ನೀಡುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.
ಟಿಕೆಟ್ ಹಂಚಿಕೆಯಲ್ಲಿ ಮಹಿಳೆಯರಿಗೆ ಅನ್ಯಾಯವಾಗಿದ್ದು, ತಮ್ಮನ್ನು ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ಮಹಿಳಾಮಣಿಗಳು ಇತ್ತೀಚೆಗೆ ಸೋನಿಯಾ ಮನೆ ಎದುರಿಗೆ ಪ್ರತಿಭಟನೆ ನಡೆಸಿದ್ದು ಕಾಂಗ್ರೆಸ್‌ನಿಂದಲೇ ಮಹಿಳೆಯರಿಗೆ ಹೆಚ್ಚು ಅನ್ಯಾಯವಾಗಿದೆ ಎಂಬುದಕ್ಕೆ ಸಾಕ್ಷಿ ಎಂದರು.
ಬಿಜೆಪಿ ಮಹಿಳೆಯೊಬ್ಬರಿಗೆ ಕ್ಯಾಬಿನೆಟ್ ದರ್ಜೆ ಸ್ಥಾನ ನೀಡಿದೆ. ಈ ಬಾರಿ ಚುನಾವಣೆಯಲ್ಲಿ ಶೇ. 10ರಷ್ಟು ಸ್ಥಾನಗಳನ್ನು ಮಹಿಳೆಯರಿಗೆ ನೀಡಲು ಬಿಜೆಪಿ ಚಿಂತಿಸಿದೆ. ಮಹಿಳೆಯರಿಗೆ ಆದ್ಯತೆ ನೀಡಿದ್ದು, ಭಾಗ್ಯಲಕ್ಷ್ಮೀ ಬಾಂಡ್, 8ನೇ ತರಗತಿ ವಿದ್ಯಾರ್ಥಿನಿಯರಿಗೆ ಉಚಿತ ಸೈಕಲ್ ಹಾಗೂ ಉಚಿತ ಶಿಕ್ಷಣ ಮುಂತಾದ ಜನಪ್ರಿಯ ಯೋಜನೆಗಳನ್ನು ಪ್ರಕಟಿಸಿದೆ ಎಂದರು.
ರಾಣೆಬೆನ್ನೂರ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದು, ಕಾಂಗ್ರೆಸ್‌ನಿಂದಲೂ ಮಹಿಳಾ ಪ್ರತಿಸ್ಪರ್ಧಿ ನಿರೀಕ್ಷೆಸಿದ್ದೇವೆ ಎಂದು ಭಾರತಿ ಹೇಳಿದರು.
ಮಹಿಳಾ ಘಟಕದ ತಾಲೂಕಾಧ್ಯಕ್ಷೆ ಗಿರಿಜಮ್ಮ ಪಟ್ಟಣಶೆಟ್ಟಿ, ತಾಲೂಕು ಘಟಕದ ಅಧ್ಯಕ್ಷ ಚಂದ್ರಣ್ಣ ಮುಚ್ಚಟ್ಟಿ, ರಾಮಣ್ಣ ಉಕ್ಕುಂದ, ಜಯಣ್ಣ ಮಲ್ಲಿಗಾರ, ಶಂಕರಗೌಡ ಪಾಟೀಲ, ವೀರೇಂದ್ರ ಶೆಟ್ಟರ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

