ಹಾವೇರಿ

ಆರು ಕ್ಷೇತ್ರಗಳಲ್ಲಿ ಕೆಜೆಪಿ ಜಯ

Published On :

ಹಾವೇರಿ: ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಕೆಜೆಪಿ ಅಭ್ಯರ್ಥಿಗಳು ಜಯಭೇರಿ ಬಾರಿಸಲಿದ್ದಾರೆ ಎಂದು ಮಾಜಿ ಶಾಸಕ ಹಾಗೂ ಕೆಜೆಪಿ ಅಭ್ಯರ್ಥಿ ನೆಹರು ಓಲೇಕಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಾಜಿ ಸಚಿವ ಸಿ.ಎಂ. ಉದಾಸಿ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಚುನಾವಣೆಗಳನ್ನು ಎದುರಿಸಲಾಗುವುದು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಗೋಷ್ಠಿಯುದ್ದಕ್ಕೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಬಿಜೆಪಿ ಮೂಲೆ ಗುಂಪು: ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಬಾಯಿಗೆ ಬಂದಂತೆ ಮಾತನಾಡುವ ಮೂಲಕ ಬಿಜೆಪಿಯನ್ನು ಮೂಲೆ ಗುಂಪು ಮಾಡಿದ್ದಾರೆ ಎಂದು ದೂರಿದರು. ಇತ್ತೀಚಿಗಷ್ಟೇ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಪ್ರಕಟಗೊಳ್ಳುವ ಮೊದಲೇ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವ ಮೂಲಕ ಪಲಾಯನವಾದ ಮಾಡಿದ್ದಾರೆ ಎಂದು ದೂರಿದರು. ಹಾವೇರಿಯಲ್ಲಿ ಹುಟ್ಟಿಕೊಂಡಿರುವ ಕೆಜೆಪಿ ಹಾವೇರಿಯಲ್ಲೇ ನಿರ್ನಾಮವಾಗಲಿದೆ ಎಂಬ ಈಶ್ವರಪ್ಪನವರ ಹೇಳಿಕೆಯನ್ನು ಓಲೇಕಾರ ಬಲವಾಗಿ ಖಂಡಿಸಿದರು.
ನಂಬಿಕೆ ದ್ರೋಹ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಯಾರನ್ನು ನಂಬಿದ್ದರೋ ಅವರೇ ನಂಬಿಕೆ ದ್ರೋಹ ಮಾಡಿದ್ದಾರೆ. ಪ್ರಸಕ್ತ ಚುನಾವಣೆಯಲ್ಲಿ ಕೆಜೆಪಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲವು ಸಾಧಿಸುವ ಮೂಲಕ ಬಿಎಸ್‌ವೈ ತಾಕತ್ತು ಏನೆಂಬುದನ್ನು ತೋರಿಸಿಕೊಡಲಿದ್ದಾರೆ ಎಂದರು.
ಸಂಸದರಾದ ಶಿವಕುಮಾರ ಉದಾಸಿ ಹಾಗೂ ಬಿ.ವೈ. ರಾಘವೇಂದ್ರ ಅವರನ್ನು ಬಿಜೆಪಿಯಿಂದ ಉಚ್ಛಾಟಿಸಿರುವ ಕ್ರಮ ಬಿಜೆಪಿಗರಲ್ಲಿ ರಾಜಕೀಯ ಪ್ರಜ್ಞೆ ಇಲ್ಲ ಎಂಬುದನ್ನು ಸಾಬೀತುಪಡಿಸುತ್ತದೆ ಎಂದ ಅವರು, ಬಿಜೆಪಿಯ ಈ ಕ್ರಮದಿಂದ ಉದಾಸಿ ಹಾಗೂ ರಾಫವೇಂದ್ರ ಬೇರೆ ಪಕ್ಷಗಳ ಪರ ಪ್ರಚಾರ ಕೈಗೊಳ್ಳಲು ಮತ್ತಷ್ಟು ಅನುಕೂಲವನ್ನೇ ಮಾಡಿಕೊಟ್ಟಿದೆ ಎಂದರು.
ಅಭಿವೃದ್ಧಿ ಮಂತ್ರ: ಬಿಎಸ್‌ವೈ ಸಿಎಂ ಆಗಿದ್ದ ಸಂದರ್ಭ ಜಿಲ್ಲೆ ಹಾಗೂ ರಾಜ್ಯದಲ್ಲಿ ನಡೆದಿರುವ ಅಭಿವೃದ್ಧಿ ಕಾಮಗಾರಿಗಳನ್ನು ಮುಂದಿಟ್ಟುಕೊಂಡೇ ಪ್ರಸಕ್ತ ಚುನಾವಣೆ ಎದುರಿಸಲಾಗುವುದು. ಯಡಿಯೂರಪ್ಪನವರ ಜನಪರ ಕಾರ್ಯಕ್ರಮಗಳೇ ಕೆಜೆಪಿ ಅಭಿವೃದ್ಧಿ ಗೆಲುವಿಗೆ ಶ್ರೀರಕ್ಷೆಯಾಗಲಿವೆ. ಅತಿ ಹೆಚ್ಚು ಸ್ಥಾನಗಳಲ್ಲಿ ಗೆಲವು ಸಾಧಿಸುವ ಮೂಲಕ ಸರ್ಕಾರ ರಚಿಸಲಾಗುವುದೆಂದೂ ಓಲೇಕಾರ ವಿಶ್ವಾಸ ವ್ಯಕ್ತಪಡಿಸಿದರು.
ಏ. 12ಕ್ಕೆ ಬಿಎಸ್‌ವೈ: ಏ. 12ರಂದು ಮಧ್ಯಾಹ್ನ 3ಕ್ಕೆ ಹಾವೇರಿ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಕೆಜೆಪಿ ಕಾರ್ಯಕರ್ತರ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಪಕ್ಷದ ರಾಜ್ಯಾಧ್ಯಕ್ಷರು ಆಗಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇದೇ ಸಂದರ್ಭ ವಿವಿಧ ಪಕ್ಷಗಳಿಂದ ಸಾವಿರಾರು ಕಾರ್ಯಕರ್ತರು ಕೆಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಓಲೇಕಾರ ತಿಳಿಸಿದರು. ಮಾಜಿ ನಗರಸಭಾ ಸದಸ್ಯ ವಿಜಯಕುಮಾರ ಚಿನ್ನಿಕಟ್ಟಿ, ವಕ್ತಾರ ಸುರೇಶ ಹೊಸಮನಿ ಪತ್ರಿಕಾಗೋಷ್ಠಿಯಲ್ಲಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.