ಮಾಧ್ಯಮದವರಿಗೆ ನಿರ್ಬಂಧ: ಪ್ರತಿಭಟನೆ
ರಾಣಿಬೆನ್ನೂರು: ಪಾರದರ್ಶಕವಾಗಿ ಚುನಾವಣೆ ನಡೆಸುತ್ತಿರುವ ಚುನಾವಣಾ ಆಯೋಗವು ಅಭ್ಯರ್ಥಿಗಳು ಹಾಗೂ ಮತದಾರರನ್ನು ಜಾಗೃತಗೊಳಿಸುವುದಕ್ಕಾಗಿ ಜಾರಿಗೆ ತಂದಿರುವ ಕಟ್ಟುನಿಟ್ಟಿನ ಕ್ರಮಗಳನ್ನು ಮತದಾರರ ಹಾಗೂ ಅಭ್ಯರ್ಥಿಗಳ ಗಮನಕ್ಕೆ ತರುವಲ್ಲಿ ಮಹತ್ವದ ಪಾತ್ರ ವಹಿಸಿ ಸಹಕರಿಸುತ್ತಿರುವ ಮಾಧ್ಯಮ ಪ್ರತಿನಿಧಿಗಳೊಂದಿಗೆ ಉದ್ಧಟತನದಿಂದ ವರ್ತಿಸುತ್ತಿರುವ ಚುನಾವಣಾಧಿಕಾರಿಗಳ ವಿರುದ್ಧ ಇಲ್ಲಿನ ಪತ್ರಕರ್ತರು 3 ಗಂಟೆಗೂ ಅಧಿಕ ಕಾಲ ಪ್ರತಿಭಟನೆ ನಡೆಸಿದರು.
ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು, ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ನಗರದ ತಹಸೀಲ್ದಾರ್ ಕಚೇರಿ ಎದುರು ಸೇರಿ ರಾಣಿಬೆನ್ನೂರು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಜಿಪಂ ಮುಖ್ಯ ಯೋಜನಾಧಿಕಾರಿ ಬಸನಗೌಡರ ವಿರುದ್ಧ ಮಂಗಳವಾರ ಮಧ್ಯಾಹ್ನ 12ರಿಂದ 3 ಗಂಟೆವರೆಗೆ ಪ್ರತಿಭಟನೆ ನಡೆಸಿ ಧಿಕ್ಕಾರ ಕೂಗಿದರು. ತಾಲೂಕು ಚುನಾವಣಾಧಿಕಾರಿಯಾಗಿರುವ ಬಸನಗೌಡರು ಕಾಲಕಾಲಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಪ್ರಚಾರ ಮಾಡುತ್ತಿರುವ ಮಾಧ್ಯಮ ಪ್ರತಿನಿಧಿಗಳೊಂದಿಗೆ ಉದ್ಧಟತನದಿಂದ ವರ್ತಿಸುತ್ತಿರುವುದನ್ನು ವಿರೋಧಿಸಿರುವ ಪತ್ರಕರ್ತರು ಪ್ರತಿಭಟನೆ ನಡೆಸಿ ಸೂಕ್ತ ಕ್ರಮಕ್ಕೆ ಆಗ್ರಹಿಸಿ ತಹಸೀಲ್ದಾರ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಎಂ. ಚಿರಂಜೀವಿ ಮಾತನಾಡಿ, ಮೇ 5ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ರೀತಿಯ ಅಕ್ರಮ ನಡೆಯದಂತೆ ಕಾರ್ಯನಿರ್ವಹಿಸುತ್ತಿರುವ ಚುನಾವಣಾ ಸಿಬ್ಬಂದಿಯಿಂದ ಹಿಡಿದು-ಅಭ್ಯರ್ಥಿ ಮತ್ತು ಮತದಾರರಿಗೆ ಕಾಲಕಾಲಕ್ಕೆ ನೀಡುತ್ತಿರುವ ಎಚ್ಚರಿಕೆ, ಸೂಚನೆ ಮತ್ತು ಮಾರ್ಗದರ್ಶನ, ಇನ್ನಿತರ ಎಲ್ಲಾ ಮಾಹಿತಿಯನ್ನು ಸಮಯಕ್ಕೆ ಸರಿಯಾಗಿ ಒದಗಿಸುವ ಮಾಧ್ಯಮದವರಿಗೆ ನಿರ್ಬಂಧ ಹೇರಲಾಗುತ್ತಿದೆ ಎಂದು ದೂರಿದರು.
ರವಿಂದ್ರಗೌಡ ಎಫ್. ಪಾಟೀಲ, ಬಿ.ಎಂ. ಜಯದೇವ, ನಿತ್ಯಾನಂದ ಕುಂದಾಪುರ, ಶಿದ್ದಾರೂಢ ಗುರಂ, ಪರಸಪ್ಪ ಶೇಟ್ಟೇರ, ಹರಿಹರಗೌಡ ಪಾಟೀಲ, ಶಿವಪ್ಪ ಜಾನಪ್ಪನವರ, ಕೆ.ಎಸ್. ನಾಗರಾಜ, ಜೆ.ಎಚ್. ನೇಶ್ವಿ, ಮುಕ್ತೇಶ ಕುರಗುಂದಮಠ, ಸಾಬ್ಜಾನ್ ಇಟಗಿ, ಗಣೇಶ ನಂದಿಗಾವಿ, ಮಂಜುನಾಥ ಕುಂಬಳೂರು, ಬಸವರಾಜ ಸರೂರು, ವೇದಮೂರ್ತಿ, ಮಾರುತಿ ಮರಾಠ, ಸಂತೋಷ ಮಹಾಂತ ಶೆಟ್ಟರ್ ಇತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

