ಹಾವೇರಿ

ಸವಣೂರು ಏತ ನೀರಾವರಿಗೆ ಚಾಲನೆ ನೀಡಿ: ಬೊಮ್ಮಾಯಿ

Published On :

ಕನ್ನಡಪ್ರಭ ವಾರ್ತೆ, ಹಾವೇರಿ ಆ. 22
ಸವಣೂರು ಏತ ನೀರಾವರಿ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರ ಪುನರ್ ಪರಿಶೀಲನೆಗೆ ಇಟ್ಟಿದೆ. ಅಭಿವೃದ್ಧಿ ದೃಷ್ಟಿಯಿಂದ ಇದಕ್ಕೆ ಶೀಘ್ರವೇ ಅನುಮೋದನೆ ನೀಡಬೇಕೆಂದು ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.
ಶಿಗ್ಗಾಂವಿಯಲ್ಲಿ ಗುರುವಾರ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಗ್ಗಾಂವಿ ಏತ ನೀರಾವರಿ ಯೋಜನೆಯ ಮುಂದುವರಿದ ಭಾಗವೇ ಸವಣೂರು ಏತ ನೀರಾವರಿ ಎಂದರು.
ಬಿಜೆಪಿ ಸರ್ಕಾರವಿದ್ದಾಗಲೇ ಸವಣೂರು ಏತ ನೀರಾವರಿ ಯೋಜನೆ ಕುರಿತಂತೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಒಪ್ಪಿಗೆ ನೀಡಲಾಗಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಇದನ್ನು ಪುನರ್ ಪರಿಶೀಲನೆ ಮಾಡಲು ತೀರ್ಮಾನ ಕೈಗೊಂಡಿದೆ. ಆದರೆ ಅಭಿವೃದ್ಧಿಪರ ಯೋಜನೆಯಾಗಿರುವುದರಿಂದ ಇದರಲ್ಲಿ ಯಾವುದೇ ರಾಜಕೀಯ ಮಾಡದೇ ಕೂಡಲೇ ಅನುಮೋದನೆ ನೀಡಬೇಕು. ಮಳೆಗಾಲದ ನಂತರ ಯೋಜನೆಗೆ ಚಾಲನೆ ನೀಡಬೇಕೆಂದು ಆಗ್ರಹಿಸಿದ ಅವರು, ಈ ಯೋಜನೆಯನ್ನು ಜಾರಿಗೊಳಿಸುವುದರಿಂದ 40 ಸಾವಿರ ಹೆಕ್ಟೇರ್ ಪ್ರದೇಶ ತುಂತುರು ನೀರಾವರಿ ಪ್ರದೇಶಕ್ಕೆ ಒಳಪಡುತ್ತದೆ. ಇದನ್ನು ಗಮನದಲ್ಲಿ ಇಟ್ಟುಕೊಂಡು ನೀರಾವರಿ ಸಚಿವರು ಕೂಡಲೇ ಕ್ರಮ ಕೈಗೊಳ್ಳಬೇಕೆಂದರು.
ತುಂಗಾ ಮೇಲ್ದಂಡೆ..
ಹಾವೇರಿ ಜಿಲ್ಲೆಯ ಜೀವನಾಡಿ ತುಂಗಾ ಮೇಲ್ದಂಡೆ ಯೋಜನೆಯನ್ನು ಸಮರ್ಪಕವಾಗಿ ಕೈಗೊಂಡರೆ ಈ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಬಹುದು. ಆದರೆ ನೀರಾವರಿ ಸಚಿವರು 2014ರೊಳಗೆ ಪೂರ್ಣಗೊಳಿಸಲಾಗುವುದು ಎಂದು ಹೇಳಿಕೆ ನೀಡಿದ್ದಾರೆ ಎಂದರು.
ತುಂಗಾ ಮೇಲ್ದಂಡೆ ಯೋಜನೆಯ 212 ಕಿ.ಮೀ.ವರೆಗೂ ಈಗಾಗಲೇ ಕಾಮಗಾರಿ ಪೂರ್ಣಗೊಂಡಿದೆ. 240ನೇ ಕಿ.ಮೀ. ವರೆಗಿನ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಇನ್ನುಳಿದ 30 ಕಿ.ಮೀ. ಮುಖ್ಯ ಕಾಲುವೆಗೆ ನೀರು ಹರಿಸುವ ಕಾಮಗಾರಿಯಾಗಿರುವುದರಿಂದ ಈ ಡಿಸೆಂಬರ್ ಒಳಗೆ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವರಾದ ಎಂ.ಬಿ. ಪಾಟೀಲರು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಕೋಳಿವಾಡ ಟೀಕೆಗೆ..
ತುಂಗಾ ಮೇಲ್ದಂಡೆ ಯೋಜನೆಯ ಕಾಮಗಾರಿ ಕುರಿತಂತೆ ಬಸವರಾಜ ಬೊಮ್ಮಾಯಿ ಯಾವುದೇ ಕೆಲಸ ನಿರ್ವಹಿಸಿಲ್ಲ ಎಂದು ಶಾಸಕ ಕೆ.ಬಿ. ಕೋಳಿವಾಡ ಟೀಕೆ ಮಾಡಿರುವುದಕ್ಕೆ, ನಾವು ಮಾಡಿರುವ ಕೆಲಸಗಳೇ ಇದಕ್ಕೆ ಉತ್ತರಿಸುತ್ತವೆ ಎಂದು ಬೊಮ್ಮಾಯಿ ಪ್ರತಿಕ್ರಿಯಿಸಿದರು. ಕೆಲಸವನ್ನೇ ಮಾಡದಿದ್ದರೆ, 1 ಲಕ್ಷ ಎಕರೆ ಪ್ರದೇಶಕ್ಕೆ ನೀರು ಹರಿಸಲು ಸಾಧ್ಯವಾಗುತ್ತಿತ್ತೆ ಎಂದು ಮರು ಪ್ರಶ್ನಿಸಿದ ಅವರು, ಕೋಳಿವಾಡರ ಟೀಕೆಗೆ ನಮ್ಮ ಕೆಲಸಗಳೇ ಉತ್ತರಿಸುತ್ತವೆ. ಅದಕ್ಕೆ ನಾವು ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ ಎಂದು ನುಡಿದರು.
ರಾಜ್ಯದಲ್ಲಿ ಒಂಬತ್ತು ವೈದ್ಯಕೀಯ ಕಾಲೇಜು ಸ್ಥಾಪನೆ ಕುರಿತಂತೆ ಹಿಂದಿನ ಸರ್ಕಾರ ತೀರ್ಮಾನ ಕೈಗೊಂಡಿತ್ತು. ಅದರಲ್ಲಿ ಹಾವೇರಿ ಜಿಲ್ಲೆಯ ವೈದ್ಯಕೀಯ ಕಾಲೇಜೂ ಸೇರಿದೆ. ಆದರೆ ಮೆಡಿಕಲ್ ಕೌನ್ಸಿಲ್ ಹಣಕಾಸು ಇಲಾಖೆಯ ಅನುಮತಿ ಪಡೆದಿಲ್ಲ ಎಂದು ತಿಳಿಸಿತ್ತು.
ಅಷ್ಟರೊಳಗೆ ಸರ್ಕಾರ ಬದಲಾಗಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿತು. ಆದರೆ ಈ ಸರ್ಕಾರ ಏಕಾಏಕಿ ಹಾವೇರಿಯನ್ನು ಕೈಬಿಟ್ಟು ಉಳಿದ ಜಿಲ್ಲೆಗಳ ವೈದ್ಯಕೀಯ ಕಾಲೇಜುಗಳನ್ನು ಘೋಷಣೆ ಮಾಡಿತು. ಈ ಬಗ್ಗೆ ತಾವು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದು, ಮುಂದಿನ ಸಲ ಹಾವೇರಿ ಜಿಲ್ಲೆಗೆ ವೈದ್ಯಕೀಯ ಕಾಲೇಜು ನೀಡುವುದಾಗಿ ಸರ್ಕಾರ ಭರವಸೆ ನೀಡಿದೆ ಎಂದರು.
ವಿಧಾನ ಪರಿಷತ್ ಸದಸ್ಯ ಸೋಮಣ್ಣ ಬೇವಿನಮರದ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.