ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭ: ಡಿಸಿ
ಹಾವೇರಿ: ಪ್ರಸಕ್ತ ಸಾಲಿನಲ್ಲಿ ಸರ್ಕಾರ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಉತ್ತಮ ಗುಣಮಟ್ಟದ ಮೆಕ್ಕೆಜೋಳ, ಬಿಳಿಜೋಳ ಹಾಗೂ ರಾಗಿ ಖರೀದಿಸಲು ನವೆಂಬರ್ ತಿಂಗಳಿನಿಂದ ಖರೀದಿ ಕೇಂದ್ರ ಪ್ರಾರಂಭಿಸಲಾಗಿದೆ. ಪ್ರತಿಯೊಬ್ಬ ರೈತರಿಂದ 25 ಕ್ವಿಂಟಲ್ ಗೋವಿನಜೋಳ ಖರೀದಿಸಲು ಇರುವ ನಿರ್ಬಂಧವನ್ನು ಸರ್ಕಾರ ಸಡಿಲಿಸಿದ್ದು, ರೈತ ಬೆಳೆದ ಮೆಕ್ಕೆಜೋಳವನ್ನು ಬೆಂಬಲ ಬೆಲೆ ಕೇಂದ್ರಗಳಿಗೆ ತಂದು ಮಾರಾಟ ಮಾಡಬೇಕೆಂದು ಜಿಲ್ಲಾಧಿಕಾರಿ ಪಾಂಡುರಂಗ ನಾಯಕ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಜರುಗಿದ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆಜೋಳ, ಬಿಳಿಜೋಳ, ರಾಗಿ ಖರೀದಿ ಪ್ರಕ್ರಿಯೆ ಪ್ರಗತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬತ್ತ ಖರೀದಿಸಲು ಹಾನಗಲ್ಲ, ಹಿರೇಕೆರೂರು ಹಾಗೂ ಶಿಗ್ಗಾಂವಿಗಳಲ್ಲಿ ಡಿ. 4ರಿಂದ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದ್ದು, ಸಾಮಾನ್ಯ ಬತ್ತಕ್ಕೆ ರು. 1600 ಬೆಲೆ ನೀಡಲಾಗುವುದು. ಗುಣಮಟ್ಟದ ಉತ್ಪನ್ನಗಳನ್ನು 50 ಕೆಜಿ ಗೋಣಿ ಚೀಲದಲ್ಲಿ ತುಂಬಿಕೊಂಡು ಖರೀದಿ ಕೇಂದ್ರಗಳಿಗೆ ತರಬೇಕು ಎಂದು ಸೂಚಿಸಿದರು.
ಹಸಿರು ಪಡೆಗೆ ಇಂದು ಚಾಲನೆ
ಶಿಗ್ಗಾಂವಿ: ಪಟ್ಟಣದ ಚನ್ನಪ್ಪ ಕುನ್ನೂರ ಕಾಲೇಜಿನಲ್ಲಿ ಡಿ. 6ರಂದು ಬೆಳಗ್ಗೆ 11 ಗಂಟೆಗೆ ಚನ್ನಬಸವೇಶ್ವರ ಹಸಿರುಪಡೆ (ಇಕೋ ಕ್ಲಬ್) ಉದ್ಘಾಟನೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಶಿಗ್ಗಾಂವಿಯ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ ಹನುಮಂತಪ್ಪ ಸಮಾರಂಭ ಉದ್ಘಾಟಿಸಲಿದ್ದಾರೆ. ಕಾಲೇಜಿನ ಪ್ರಾಚಾರ್ಯ ನಾಗರಾಜ ದ್ಯಾಮನಕೊಪ್ಪ ಅಧ್ಯಕ್ಷತೆ ವಹಿಸಲಿದ್ದು, ಹಾವೇರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಮಾರುತಿ ಶಿಡ್ಲಾಪುರ, ಹಾನಗಲ್ಲಿನ ಅಂಜುಮನ್ ಕಾಲೇಜಿನ ಪ್ರಾಚಾರ್ಯ ಎ.ಎ. ನಾಶಿಪುಡಿ ಆಗಮಿಸುವರು. ಕಾಲೇಜಿನ ವಿದ್ಯಾರ್ಥಿಗಳಿಗೆ ಪರಿಸರ ಜಾಗೃತಿ ಮೂಡಿಸುವ ಪ್ರಬಂಧ ಹಾಗೂ ಭಾಷಣ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದು ಕಾಲೇಜಿನ ಪ್ರಕಟನೆ ತಿಳಿಸಿದೆ.
ಮನೆಗೆ ಬೆಂಕಿ: ಹಾನಿ
ಬ್ಯಾಡಗಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಮನೆಯೊಂದಕ್ಕೆ ಬೆಂಕಿ ತಗುಲಿ ಹಣ ಒಡವೆ ಸೇರಿದಂತೆ ರು. 47 ಸಾವಿರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾದ ಘಟನೆ ತಾಲೂಕಿನ ಬಿಸಲಹಳ್ಳಿ ಗ್ರಾಮದಲ್ಲಿ ಗುರುವಾರ ಬೆಳಗ್ಗೆ 11.30ರ ಸುಮಾರಿಗೆ ನಡೆದಿದೆ. ಮಲ್ಲೇಶಪ್ಪ ಮೈಲಾರೆಪ್ಪ ಕೊರವರ ಎಂಬುವರಿಗೆ ಸೇರಿದ ಮನೆಯಲ್ಲಿ ಈ ದುರ್ಘಟನೆ ನಡೆದಿದೆ. ವ್ಯಾಪಾರಿಯಾಗಿರುವ ಮಲ್ಲೇಶಪ್ಪ, ವ್ಯಾಪಾರದ ಉದ್ದೇಶಕ್ಕಾಗಿ ತಂದಿಟ್ಟಿದ್ದ ಬಟ್ಟೆ, ಪಾತ್ರೆ ಮುಂತಾದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿ ಹತ್ತಿರುವುದನ್ನು ಗಮನಿಸಿದ ಅಕ್ಕಪಕ್ಕದವರು ನೀರು ಎರಚಿ ನಂದಿಸುವಲ್ಲಿ ಯಶಸ್ವಿಯಾದರು. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಎಎಸ್ಐ ಎನ್.ಎಚ್. ಹೊಸೂರ, ಗ್ರಾಪಂ ಅಭಿವೃದ್ಧಿ ಅಧಿಕಾರಿ ಪ್ರದೀಪ್ ಗಣೇಶ್ಕರ್ ಪರಿಶೀಲಿಸಿದರು. ಬ್ಯಾಡಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

