ವರದಾ ನದಿಯಿಂದ ಕೆರೆ ತುಂಬಿಸುವ ಯೋಜನೆ
ಹಾನಗಲ್ಲ: ಕೆರೆಗಳಿಗೆ ನೀರು ತುಂಬಿಸುವ ಮೂಲಕ ನೀರಾವರಿಗೆ ಅವಕಾಶ ಮಾಡಿಕೊಡಲು ಹಾನಗಲ್ಲ ತಾಲೂಕಿನ ಉತ್ತರ ಭಾಗದ ನೂರು ಕೆರೆಗಳ ಮಾಹಿತಿ ಪಡೆಯಲಾಗುತ್ತಿದ್ದು, ಈ ಕೆರೆಗಳಿಗೆ ವರದಾ ನದಿಯಿಂದ ನೀರು ತುಂಬಿಸುವ ಯೋಜನೆ ರೂಪಿಸಲಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಹಾನಗಲ್ಲ ತಾಲೂಕಿನ ಬ್ಯಾತನಾಳ ಗ್ರಾಮದಲ್ಲಿ ಶನಿವಾರ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿದರು.
ಇದೇ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿ, ಒಂದು ತಿಂಗಳೊಳಗಾಗಿ ಹಾನಗಲ್ಲ ತಾಲೂಕಿನ ಉತ್ತರ ಭಾಗದಲ್ಲಿರುವ ಒಟ್ಟು ಕೆರೆಗಳು, ಅವುಗಳ ಕ್ಷೇತ್ರ ವ್ಯಾಪ್ತಿ, ನೀರಾವರಿಗೆ ಒಳಪಡುವ ಪ್ರದೇಶ ಹಾಗೂ ನೀರಿನ ಮೂಲದ ಮಾಹಿತಿಯನ್ನು ಸಿದ್ಧಪಡಿಸಿ ಕೂಡಲೆ ತಮಗೆ ತಲುಪಿಸುವಂತೆ ತಿಳಿಸಿದರು. ಇದಕ್ಕೆ ಬೇಕಾಗುವ ಅನುದಾನವನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ಹಾಗೂ ನೀರಾವರಿ ಇಲಾಖೆಯಿಂದ ಒದಗಿಸಲು ಕ್ರಮ ಕೈಗೊಳ್ಳಲಾಗುವುದು.
ಸರ್ಕಾರ ಈಗ ಗ್ರಾಮೀಣಾಭಿವೃದ್ಧಿಗಾಗಿ ಹೆಚ್ಚು ಆದ್ಯತೆ ನೀಡುತ್ತಿದ್ದು, ಗ್ರಾಮೀಣ ಜನತೆಗೆ ಇದರ ಪ್ರಯೋಜನ ತಲುಪಿಸುವುದು ಅತ್ಯಂತ ಅವಶ್ಯವಿದೆ ಎಂದರು.
ಶುದ್ಧ ನೀರು: ಶುದ್ಧ ಕುಡಿಯುವ ನೀರಿನ ಘಟಕಗಳನ್ನು ರಾಜ್ಯಾದ್ಯಂತ ಆರಂಭಿಸಲಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಪ್ರತಿ ಹಳ್ಳಿಯಲ್ಲೂ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಆರಂಭಿಸಲು ಸರ್ಕಾರ ಮುಂಚೂಣಿಯಲ್ಲಿದೆ. ಹಾನಗಲ್ಲ ತಾಲೂಕಿನ ಪ್ರತಿ ಗ್ರಾಮ ಪಂಚಾಯಿತಿಗೆ ಒಂದರಂತೆ ಮೊದಲ ಹಂತದ ಶುದ್ಧ ಕುಡಿಯುವ ನೀರಿನ ಘಟಕ ಆರಂಭಿಸುವುದರ ಜೊತೆಗೆ ಹಾನಗಲ್ಲ ಪಟ್ಟಣದಲ್ಲೂ ಎರಡು ಘಟಕಗಳನ್ನು ಆರಂಭಿಸಲಾಗುತ್ತದೆ.
ರಾಜ್ಯಾದ್ಯಂತ ಮೊದಲ ಹಂತದಲ್ಲಿ ಫ್ಲೋರೈಡ್ಯುಕ್ತ ನೀರಿರುವ ಗ್ರಾಮಗಳಿಗೆ ಆದ್ಯತೆ ನೀಡಲಾಗುತ್ತದೆ ಎಂದು ಎಚ್.ಕೆ. ಪಾಟೀಲ ತಿಳಿಸಿದರು.
ಶೌಚಾಲಯ: ಇದರೊಂದಿಗೆ ರಾಜ್ಯದಲ್ಲಿ 6 ಲಕ್ಷ ಶೌಚಾಲಯಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದ್ದು, ಈಗಾಗಲೆ 2.4 ಲಕ್ಷ ಗುರಿ ತಲುಪಲಾಗಿದೆ. ಉಳಿದ ಗುರಿ ತಲುಪುವುದರ ಜೊತೆಗೆ ಅದಕ್ಕಿಂತಲೂ ಹೆಚ್ಚು ಶೌಚಾಲಯಗಳನ್ನು ನಿರ್ಮಿಸುವ ಮೂಲಕ ನಿರ್ಮಲ ಗ್ರಾಮ ಯೋಜನೆಗೆ ಯಶಸ್ವಿ ಚಾಲನೆ ಸಿಕ್ಕಂತಾಗುತ್ತದೆ. ಸಾರ್ವಜನಿಕರು ಎಲ್ಲ ಮನೆಗಳಲ್ಲಿ ಶೌಚಾಲಯ ನಿರ್ಮಿಸಿಕೊಳ್ಳಲು ಮುಂದಾಗಬೇಕು ಎಂದು ಸಲಹೆ ನೀಡಿದರು. ಇದಾದ ನಂತರ ಪ್ರತಿ ಗ್ರಾಮದಲ್ಲಿ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸುವ ಗುರಿ ಇದೆ ಎಂದು ವಿವರಿಸಿದರು.
ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವ ಎಚ್.ಕೆ. ಪಾಟೀಲ, ಮುಂದಿನ ಸಂಪುಟ ವಿಸ್ತರಣೆಯಲ್ಲಿ ಹಾವೇರಿ ಜಿಲ್ಲೆಗೆ ಮಂತ್ರಿ ಸ್ಥಾನ ನೀಡಲಾಗುತ್ತದೆ. ಹಾನಗಲ್ಲ ಶಾಸಕ ಮನೋಹರ ತಹಸೀಲ್ದಾರ್ಗೆ ಮಂತ್ರಿ ಸ್ಥಾನ ಸಿಗುತ್ತದೆಯೇ ಎಂಬ ಪ್ರಶ್ನೆಗೆ ಕಾದು ನೋಡಿ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಮನೋಹರ ತಹಶೀಲಾರ್, ಬಸವರಾಜ ಶಿವಣ್ಣನವರ, ಮಾಜಿ ಶಾಸಕ ಅಜ್ಜಂಪೀರ ಖಾದ್ರಿ, ಜಿಪಂ ಮಾಜಿ ಅಧ್ಯಕ್ಷ ಕೊಟ್ರೆಶಪ್ಪ ಬಸೆಗಣ್ಣಿ, ಕೆಪಿಸಿಸಿ ಸದಸ್ಯ ಸತೀಶ ದೇಶಪಾಂಡೆ, ಹಾವೇರಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಕಾಶಗೌಡ ಪಾಟೀಲ, ಎಸ್.ಎಫ್.ಎನ್. ಗಾಜಿಗೌಡ್ರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

