ಮರಳು ಸಮಸ್ಯೆ ಬಗೆಹರಿಸಿ
ಕನ್ನಡಪ್ರಭ ವಾರ್ತೆ, ಹಾವೇರಿ, ಡಿ. 13
ಎರಡು ತಿಂಗಳಿಂದ ಮರಳು ಸಿಗದೆ ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಸ್ಥಗಿತಗೊಂಡಿದೆ. ಇದನ್ನೇ ನಂಬಿ ಬದುಕುತ್ತಿರುವ ಸಾವಿರಾರು ಕಾರ್ಮಿಕರಿಗೆ ಕೆಲಸವಿಲ್ಲದಂತಾಗಿದೆ. ಸರ್ಕಾರ ಸಮಸ್ಯೆ ಬಗೆಹರಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾ ಕಟ್ಟಡ ಕಟ್ಟುವ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಕಾರ್ಮಿಕರು, ಗುತ್ತಿಗೆದಾರರು, ಕಟ್ಟಡ ಸಾಮಗ್ರಿ ಅಂಗಡಿ ಮಾಲೀಕರು ಸೇರಿದಂತೆ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿಕೊಂಡವರು ಇಲ್ಲಿಯ ಪುರಸಿದ್ದೇಶ್ವರ ದೇವಸ್ಥಾನದ ಬಳಿಯಿಂದ ಎಂಜಿ ರಸ್ತೆ ಮೂಲಕ ಹೊಸಮನಿ ಸಿದ್ದಪ್ಪ ವೃತ್ತದ ವರೆಗೆ ಮೆರವಣಿಗೆ ನಡೆಸಿದರು. ಸಿದ್ದಪ್ಪ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು. ಸಂಘದ ಜಿಲ್ಲಾಧ್ಯಕ್ಷ ದಾವಲಸಾಬ್ ಹಿರೇಮುಗದೂರ ಮಾತನಾಡಿ, ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ಮರಳು ಎರಡು ತಿಂಗಳಿಂದ ಸಿಗದೆ ಜಿಲ್ಲೆಯಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಿದೆ. ಕಾರ್ಮಿಕರು ಕೆಲಸವಿಲ್ಲದೆ ಕಷ್ಟದಲ್ಲಿದ್ದಾರೆ. ಬೇರೆ ಕೆಲಸ ಮಾಡಲಾಗದೆ ಕುಟುಂಬ ನಿರ್ವಹಣೆ ಕಷ್ಟವಾಗುತ್ತಿದೆ ಎಂದರು.
ಕಾರ್ಮಿಕ ಮುಖಂಡರು ಮಾತನಾಡಿ, ಸರ್ಕಾರ ಕೆಜಿ ಅಕ್ಕಿಯನ್ನು ರು. 1ಕ್ಕೆ ನೀಡುತ್ತಿದ್ದು, ಉಳಿದ ದಿನೋಪಯೋಗಿ ವಸ್ತುಗಳಿಗೆ ನಾವು ಭಿಕ್ಷೆ ಬೇಡಬೇಕೆ? ಈ ರೀತಿ ಸಾವಿರಾರು ಕಾರ್ಮಿಕ ಕುಟುಂಬಗಳನ್ನು ಉಪವಾಸ ಕೆಡಗುವ ಮರಳು ನೀತಿ ಏಕೆ ಎಂದು ಪ್ರಶ್ನಿಸಿದರು. ತಕ್ಷಣ ಮರಳು ನೀತಿಯಿಂದ ಆಗಿರುವ ತೊಂದರೆ ನಿವಾರಿಸಬೇಕು. ಮರಳು, ಜಲ್ಲಿಕಲ್ಲು ಸೇರಿದಂತೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಅಗತ್ಯವಿರುವ ಸಾಮಗ್ರಿಗಳ ಸಾಗಣೆ, ಬಳಕೆಗೆ ಇರುವ ನಿರ್ಬಂಧವನ್ನು ಸಡಿಲಿಸಬೇಕು. ಸರ್ಕಾರ ಶೀಘ್ರ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಕೂಲಿ ಕಾರ್ಮಿಕರು, ಗೌಂಡಿಗಳು, ಎಂಜಿನಿಯರ್ಗಳು, ಸಿಮೆಂಟ್, ಹಾರ್ಡ್ವೇರ್ ಹಾಗೂ ಸ್ಟೀಲ್ ಅಂಗಡಿ ಮಾಲೀಕರು, ಇಟ್ಟಿಗೆ ಭಟ್ಟಿ ಕಾರ್ಮಿಕರು, ವೆಲ್ಡಿಂಗ್ ಕಾರ್ಮಿಕರು, ಕಲ್ಲು ಒಡೆಯುವವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಸಂಘದ ಕಾರ್ಯದರ್ಶಿ ಸಂಜೀವಪ್ಪ ಹರಪನಹಳ್ಳಿ, ಬಸವರಾಜ ಹರಪನಹಳ್ಳಿ, ರಾಮಣ್ಣ ದೊಡ್ಡತಳವಾರ, ವೆಂಕಟೇಶ ಹರಪನಳ್ಳಿ, ಮಾರುತಿ ಹತ್ತಿಮತ್ತೂರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

