ಜ. 3ರಿಂದ ನೌಕರರ ಹಾವೇರಿ ಜಿಲ್ಲಾ ಮಟ್ಟದ ಕ್ರೀಡಾಕೂಟ
ಹಾವೇರಿ: ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಜ. 3 ಹಾಗೂ 4ರಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಎಸ್.ಬಿ. ಕಿನ್ನಾಳ ತಿಳಿಸಿದರು.
ನೌಕರರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ ಜ. 18ರಿಂದ 20ರ ವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ. ಅದಕ್ಕೆ ಮುಂಚಿತವಾಗಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಆಯೋಜಿಸಲಾಗಿದ್ದು, ಜ. 3 ಮತ್ತು 4ರಂದು ರಾಜ್ಯ ಸರ್ಕಾರಿ ನೌಕರರಿಗಾಗಿ ವಿವಿಧ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ಕ್ರೀಡೆಯಲ್ಲಿ ವೈಯಕ್ತಿಕ ಹಾಗೂ ಗುಂಪು ಸ್ಪರ್ಧೆಗಳು ನಡೆಯಲಿವೆ. ಹಿಂದೂಸ್ತಾನಿ-ಕರ್ನಾಟಕ ಸಂಗೀತ, ಭರತನಾಟ್ಯ, ಜಾನಪದ ನೃತ್ಯ, ವಾದ್ಯ ಸಂಗೀತ, ನಾಟಕ ಸ್ಪರ್ಧೆಗಳು ಪುರುಷರಿಗೆ ಮತ್ತು ಮಹಿಳೆಯರಿಗೆ ಒಟ್ಟಿಗೇ ನಡೆಯಲಿವೆ. ಕ್ರೀಡಾಕೂಟದಲ್ಲಿ 500ಕ್ಕೂ ಹೆಚ್ಚು ಸ್ಪರ್ಧಿಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಇಲ್ಲಿ ಉತ್ತಮ ಪ್ರದರ್ಶನ ನೀಡಿದವರನ್ನು ರಾಜ್ಯಮಟ್ಟಕ್ಕೆ ಆಯ್ಕೆ ಮಾಡಲಾಗುವುದು ಎಂದು ಹೇಳಿದರು.
ಜ. 3ರಂದು ಬೆಳಗ್ಗೆ 10 ಗಂಟೆಗೆ ಕ್ರೀಡಾಕೂಟ ಉದ್ಘಾಟನೆ ಸಮಾರಂಭ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಪ್ರಕಾಶ ಹುಕ್ಕೇರಿ, ಶಾಸಕರು, ಜಿಪಂ ಅಧ್ಯಕ್ಷ ರಾಜೇಂದ್ರ ಹಾವೇರಣ್ಣನವರ, ನಗರಸಭೆ ಅಧ್ಯಕ್ಷ ಐ.ಯು. ಪಠಾಣ, ಜಿಲ್ಲಾಧಿಕಾರಿ ಪಾಂಡುರಂಗ ನಾಯಕ, ಜಿಪಂ ಸಿಇಒ ಕೆ.ಬಿ. ಆಂಜನಪ್ಪ ಪಾಲ್ಗೊಳ್ಳಲಿದ್ದಾರೆ ಎಂದು ಎಸ್.ಬಿ. ಕಿನ್ನಾಳ ತಿಳಿಸಿದರು. ಸಂಘದ ಪದಾಧಿಕಾರಿಗಳಾದ ಬಸವರಾಜ ಕಮತರ, ಸಿ.ವಿ. ಹಿರೇಮಠ, ಶಂಕರ ಸುತಾರ, ಬಸವರಾಜ ಅರಳಿ ಇದ್ದರು.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

