ನಗರ ಸ್ಥಳೀಯ ಸಂಸ್ಥೆ ಚುನಾವಣೆ ಕೆಜೆಪಿಗೆ ವೇದಿಕೆ
ಹಾವೇರಿ: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಕೆಜೆಪಿ ಶಕ್ತಿ ಪ್ರದರ್ಶನಕ್ಕೆ ವೇದಿಕೆಯಾಗಲಿದ್ದು, ಪಕ್ಷ ಬರುವ ದಿನಗಳಲ್ಲಿ ರಾಜ್ಯದ ಚುಕ್ಕಾಣಿ ಹಿಡಿಯಲಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಸ್ಥಳೀಯ ಶಿವಶಕ್ತಿ ಪ್ಯಾಲೇಸ್ನಲ್ಲಿ ಆಯೋಜಿಸಿದ್ದ ಕೆಜೆಪಿ ಕಾರ್ಯಕರ್ತರ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ರಾಜ್ಯಾದ್ಯಂತ ಪ್ರವಾಸ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ಧತೆ ಅಂಗವಾಗಿ ತಾವು ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದು, ಫೆ. 19ರಂದು ಗುಲ್ಬರ್ಗ, ಬೀದರ, 21ರಂದು ದಾವಣಗೆರೆ, ಚಿತ್ರದುರ್ಗಗಳಲ್ಲಿ ಪ್ರವಾಸ ಕೈಗೊಳ್ಳಲಾಗುತ್ತದೆ. ಅಲ್ಲದೇ ಧನಂಜಯಕುಮಾರ ನೇತೃತ್ವದಲ್ಲಿ ಮತ್ತೊಂದು ತಂಡ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಪಕ್ಷ ಸಂಘಟನೆ ಮಾಡಲಾಗುತ್ತಿದೆ ಎಂದರು.
ಕೆಜೆಪಿಗೆ ಉತ್ತಮ ಸ್ಪಂದನೆ: ಕೆಜೆಪಿಗೆ ಜನಸ್ಪಂದನೆ ಉತ್ತಮವಾಗಿದೆ. ನನ್ನ ಅಧಿಕಾರಾವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನೇ ಮುಂದಿಟ್ಟುಕೊಂಡು ಚುನಾವಣೆ ಎದುರಿಸಲಾಗುತ್ತಿದ್ದು, 5 ವರ್ಷ ಪೂರ್ಣಾವಧಿ ಸಿಎಂ ಆಗಿದ್ದರೇ ರಾಜ್ಯದ ಅಭಿವೃದ್ಧಿಯಾಗುತ್ತಿತ್ತು ಎಂದು ಜನತೆ ಆಡಿಕೊಳ್ಳುತ್ತಿದ್ದಾರೆ.
ಬಜೆಟ್ ಬಿಜೆಪಿ ಪ್ರಣಾಳಿಕೆ: ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಮಂಡಿಸಿದ ಬಜೆಟ್ ಬಿಜೆಪಿಯ ಪ್ರಣಾಳಿಕೆ. ಇದಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲ, ಬೆಲೆಯೂ ಇಲ್ಲ. ಪ್ರಸ್ತುತ ಸರ್ಕಾರ ಕಳೆದ ಡಿಸೆಂಬರ್ ಅಂತ್ಯದವರೆಗೆ ಬಜೆಟ್ನ ಕೇವಲ ಶೇ. 42-45ರಷ್ಟನ್ನು ಮಾತ್ರ ಖರ್ಚು ಮಾಡಿದೆ. ಇದರಿಂದ ಅಭಿವೃದ್ಧಿ ಕಾರ್ಯಗಳಿಗೆ ತೀವ್ರ ಹಿನ್ನಡೆಯಾಗಿದೆ. ಅಭಿವೃದ್ಧಿಯನ್ನು ಸರ್ಕಾರ ನಿರ್ಲಕ್ಷಿಸಿದೆ ಎಂದು ದೂರಿದರು.
ಶೀಘ್ರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಫೆ. 19-20ರ ವೇಳೆಗೆ ಸ್ಥಳೀಯ ಸಂಸ್ಥೆಗಳಿಗೆ ಸ್ಪರ್ಧಿಸುವ ಕೆಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಕೆಜೆಪಿಗೆ ಕಾಂಗ್ರೆಸ್ ಮಾತ್ರ ಎದುರಾಳಿ. ಅಲ್ಲದೇ ಸೋಮವಾರ ವೇಳೆಗೆ ಕೆಜೆಪಿ ಅಧಿಕೃತ ಚಿಹ್ನೆ ಬಿಡುಗಡೆಯಾಗಲಿದೆ. ಕೆಜೆಪಿಗೆ ಇದು ಮೊದಲ ಚುನಾವಣೆಯಾಗಿದ್ದು, ಫರಿತಾಂಶ ಆಶಾದಾಯಕ ಹಾಗೂ ಭರವಸೆ ಮೂಡಿಸಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವರಾದ ಸಿ.ಎಂ. ಉದಾಸಿ, ಶೋಭಾ ಕರಂದ್ಲಾಜೆ, ಮಾಜಿ ಶಾಸಕರಾದ ನೆಹರು ಓಲೇಕಾರ, ಸುರೇಶಗೌಡ ಪಾಟೀಲ, ಯು.ಬಿ. ಬಣಕಾರ, ಜಿ. ಶಿವಣ್ಣ, ಜಿಲ್ಲಾಧ್ಯಕ್ಷ ಮೈಲಪ್ಪ ಗುಡಗೂರ, ಇನ್ನಿತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

